ಹಾವೇರಿ: ಜಿಲ್ಲೆಯ ರೌಡಿ ಪಟ್ಟಿಯಲ್ಲಿರುವ 182 ಮಂದಿಯ ಮನೆಗಳ ಮೇಲೆ ಬುಧವಾರ ನಸುಕಿನಲ್ಲಿ ದಿಢೀರ್ ದಾಳಿ ನಡೆಸಿದ ಪೊಲೀಸರು, ತಪಾಸಣೆ ನಡೆಸಿದರು.
ಜಿಲ್ಲೆಯ ಹಾವೇರಿ, ಹಾನಗಲ್, ರಾಣೆಬೆನ್ನೂರು, ಹಿರೇಕೆರೂರು, ರಟ್ಟೀಹಳ್ಳಿ, ಬ್ಯಾಡಗಿ, ಶಿಗ್ಗಾವಿ, ಸವಣೂರು ಹಾಗೂ ಸುತ್ತಮುತ್ತಲಿನ ಠಾಣೆಗಳಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದರು.
ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಜಾಮೀನು ಮೇಲೆ ಹೊರಗಿರುವ ವ್ಯಕ್ತಿಗಳ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸಿದರು. ರೌಡಿ ಪಟ್ಟಿಯಲ್ಲಿ ಹೆಸರಿರುವ ವ್ಯಕ್ತಿಗಳ ಮನೆಗಳಿಗೆ ಹೋಗಿ, ಅವರನ್ನು ವಿಚಾರಣೆಗೆ ಒಳಪಡಿಸಿದರು. ಯಾವುದಾದರೂ ಮಾರಕಾಸ್ತ್ರ ಇದೆಯಾ? ಎಂಬುದನ್ನು ತಿಳಿಯಲು ಮನೆಯಲ್ಲಿ ತಪಾಸಣೆ ನಡೆಸಿದರು.
‘ಜಿಲ್ಲೆಯಲ್ಲಿ ಅಪರಾಧ ಚಟುವಟಿಕೆಗಳನ್ನು ಹತ್ತಿಕ್ಕಲು ವಿಶೇಷ ಒತ್ತು ನೀಡಲಾಗಿದೆ. ಯಾವುದೇ ಕೃತ್ಯದಲ್ಲಿ ಭಾಗಿಯಾಗಬಾರದು. ಯಾರೊಬ್ಬರನ್ನೂ ಬೆದರಿಸಬಾರದು. ಆಕಸ್ಮಾತ್ ಕಾನೂನು ಉಲ್ಲಂಘಿಸಿದರೆ ಕ್ರಮ ಖಚಿತ’ ಎಂದು ಪೊಲೀಸರು ರೌಡಿಗಳಿಗೆ ಎಚ್ಚರಿಕೆ ನೀಡಿದರು.
ಡಿವೈಎಸ್ಪಿ, ಇನ್‌ಸ್ಪೆಕ್ಟರ್, ಪಿಎಸ್‌ಐ ಹಾಗೂ ಸಿಬ್ಬಂದಿ ದಾಳಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.