ADVERTISEMENT

ಹಾವೇರಿ | ಹಾಳಾದ ರಸ್ತೆ: ಬೀದಿಗಿಳಿದು ಗ್ರಾಮಸ್ಥರ ಪ್ರತಿಭಟನೆ

ವಾಹನಗಳ ಸಂಚಾರ ತಡೆದು ಹೋರಾಟ, ಶಾಸಕ–ಅಧಿಕಾರಿಗಳ ವಿರುದ್ಧ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 16 ಮೇ 2025, 14:31 IST
Last Updated 16 ಮೇ 2025, 14:31 IST
ಹಾವೇರಿ ತಾಲ್ಲೂಕಿನ ಕರ್ಜಗಿ ಗ್ರಾಮದ ರಸ್ತೆಗಳನ್ನು ದುರಸ್ತಿಗೊಳಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ರಸ್ತೆಯಲ್ಲಿ ಕುಳಿತು ಶುಕ್ರವಾರ ಪ್ರತಿಭಟನೆ ನಡೆಸಿದರು 
ಹಾವೇರಿ ತಾಲ್ಲೂಕಿನ ಕರ್ಜಗಿ ಗ್ರಾಮದ ರಸ್ತೆಗಳನ್ನು ದುರಸ್ತಿಗೊಳಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ರಸ್ತೆಯಲ್ಲಿ ಕುಳಿತು ಶುಕ್ರವಾರ ಪ್ರತಿಭಟನೆ ನಡೆಸಿದರು    

ಹಾವೇರಿ: ತಾಲ್ಲೂಕಿನ ಕರ್ಜಗಿ ಗ್ರಾಮದ ಮೂಲಕ ಹಾದು ಹೋಗುವ ಮುಖ್ಯ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ಇದರ ದುರಸ್ತಿಗೆ ಆಗ್ರಹಿಸಿ ಗ್ರಾಮಸ್ಥರು ಶುಕ್ರವಾರ ಬೀದಿಗಿಳಿದು ಪ್ರತಿಭಟನೆ ನಡೆಸಿದರು.

ಗ್ರಾಮದ ರಸ್ತೆ ಅಭಿವೃದ್ಧಿಗಾಗಿ ಶಾಸಕ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದ ಗ್ರಾಮಸ್ಥರು, ಗಡುವು ಸಹ ನೀಡಿದ್ದರು. ಆದರೆ, ಯಾರೊಬ್ಬರೂ ಮನವಿಗೆ ಸ್ಪಂದಿಸಿಲ್ಲ. ಇದರಿಂದ ಬೇಸತ್ತ ಗ್ರಾಮಸ್ಥರು, ಶುಕ್ರವಾರ ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ತಡೆದು ಆಕ್ರೋಶ ಹೊರಹಾಕಿದರು.

‘ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುವುದು’ ಎಂದು ಗ್ರಾಮಸ್ಥರಿಗೆ ಗುರುವಾರವೇ ಗ್ರಾಮಸ್ಥರಿಗೆ ಮಾಹಿತಿ ನೀಡಲಾಗಿತ್ತು. ಹೀಗಾಗಿ, ಶುಕ್ರವಾರ 50ಕ್ಕೂ ಹೆಚ್ಚು ಗ್ರಾಮಸ್ಥರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಬಸ್‌ ನಿಲ್ದಾಣದ ಎದುರಿನ ರಸ್ತೆಯಲ್ಲಿ ಕುಳಿತಿದ್ದ ಗ್ರಾಮಸ್ಥರು, ಘೋಷಣಾ ಫಲಕಗಳನ್ನು ಪ್ರದರ್ಶಿಸಿದರು. ಅಧಿಕಾರಿಗಳು ಸ್ಥಳಕ್ಕೆ ಬರುವಂತೆ ಪಟ್ಟು ಹಿಡಿದಿದ್ದರು.

ADVERTISEMENT

ಎರಡು ಗಂಟೆಗಳ ಕಾಲ ರಸ್ತೆ ಸಂಚಾರ ಬಂದ್ ಮಾಡಲಾಗಿತ್ತು. ಬಸ್‌, ಖಾಸಗಿ ವಾಹನ ಹಾಗೂ ಇತರೆ ವಾಹನಗಳ ಓಡಾಟ ಸ್ಥಗಿತಗೊಂಡಿದ್ದರಿಂದ, ಎಲ್ಲ ವಾಹನಗಳು ರಸ್ತೆಯಲ್ಲಿ ಸಾಲುಗಟ್ಟಿ ನಿಂತಿದ್ದವು.

ಪ್ರತಿಭಟನೆಯ ಸುದ್ದಿ ಕೇಳಿ ಸ್ಥಳಕ್ಕೆ ಬಂದ ಅಧಿಕಾರಿಗಳು, ಗ್ರಾಮಸ್ಥರ ಜೊತೆ ಮಾತುಕತೆ ನಡೆಸಿದರು. ರಸ್ತೆ ದುರಸ್ತಿ ಬಗ್ಗೆ ಸಂಬಂಧಪಟ್ಟ ಇಲಾಖೆ ಮುಖ್ಯಸ್ಥರ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ ಗ್ರಾಮಸ್ಥರು ಪ್ರತಿಭಟನೆ ಹಿಂಪಡೆದರು.

‘ಕರ್ಜಗಿ ಗ್ರಾಮದ ಮಾರ್ಗವಾಗಿ ನಾಲ್ಕು ಮುಖ್ಯರಸ್ತೆಗಳು ಹಾದು ಹೋಗುತ್ತವೆ. ಜಂಗಮನಕೊಪ್ಪ ಕ್ರಾಸ್‌ನಿಂದ ಹಿರೇಮುಗದೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹಾಗೂ ಹಾವೇರಿಯಿಂದ ಲಕ್ಷ್ಮೇಶ್ವರಕ್ಕೆ ಹೋಗುವ ರಸ್ತೆಗಳು ಎರಡು ವರ್ಷಗಳಿಂದ ಸಂಪೂರ್ಣ ಹಾಳಾಗಿದೆ. ಈ ರಸ್ತೆಗಳಲ್ಲಿ ಸಂಚರಿಸಲು ಗ್ರಾಮಸ್ಥರು ಪರದಾಡುವಂತಾಗಿದೆ’ ಎಂದು ದೂರಿದರು.

‘ಹಾಳಾದ ರಸ್ತೆಯಲ್ಲಿ ತಗ್ಗು–ಗುಂಡಿಗಳು ಹೆಚ್ಚಿವೆ. ಇದರಿಂದಾಗಿ ವಾಹನಗಳು ಉರುಳಿಬಿದ್ದು, ಪದೇ ಪದೇ ಅಪಘಾತಗಳು ಸಂಭವಿಸುತ್ತಿವೆ. ಕೆಲವರು ಇಂದಿಗೂ ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ಅಲೆದಾಡುವಂತಾಗಿದೆ’ ಎಂದರು.

‘ಹಾವೇರಿ ಜಿಲ್ಲಾ ಕೇಂದ್ರದಿಂದ 11 ಕಿ.ಮೀ. ದೂರದಲ್ಲಿರುವ ಕರ್ಜಗಿ ಗ್ರಾಮದ ರಸ್ತೆಗಳೇ ಸರಿಯಿಲ್ಲ. ಇದರಿಂದ ಗ್ರಾಮಸ್ಥರು ನಿತ್ಯವೂ ನರಕಯಾತನೆ ಅನುಭವಿಸುತ್ತಿದ್ದಾರೆ. ವಿದ್ಯಾಭ್ಯಾಸ, ಆರೋಗ್ಯ, ಉದ್ಯೋಗ ಸೇರಿದಂತೆ ಇತರೆ ಕೆಲಸಕ್ಕಾಗಿ ಓಡಾಡುವವರು ಕಷ್ಟಪಡುತ್ತಿದ್ದಾರೆ’ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡರು.

ರಸ್ತೆ ಹಾಳಾಗಿರುವ ವಿಷಯ ಶಾಸಕ ಹಾಗೂ ಅಧಿಕಾರಿಗಳು ಗೊತ್ತಿದೆ. ಆದರೆ, ಅವರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇದರಿಂದ ಬೇಸತ್ತು ರಸ್ತೆಯಲ್ಲಿ ವಾಹನಗಳ ಸಂಚಾರ ತಡೆದು ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ತ್ವರಿತವಾಗಿ ರಸ್ತೆಯನ್ನು ಅಭಿವೃದ್ಧಿಪಡಿಸಬೇಕು. ಇಲ್ಲದಿದ್ದರೆ, ನಿರಂತರವಾಗಿ ಗಂಭೀರ ಸ್ವರೂಪದ ಹೋರಾಟ ನಡೆಸಲಾಗುವುದು’ ಎಂದು ಗ್ರಾಮಸ್ಥರು ಎಚ್ಚರಿಸಿದರು.

ಬೇಸತ್ತು ಪ್ರತಿಭಟನೆ ನಡೆಸುತ್ತಿದ್ದೇವೆ

ಹಾವೇರಿ ತಾಲ್ಲೂಕಿನ ಗ್ರಾಮಗಳಲ್ಲಿ ಕರ್ಜಗಿ ಗ್ರಾಮ ದೊಡ್ಡದು. ಹೋಬಳಿಯೂ ಹೌದು. ಈ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹಾಳಾಗಿ ಹಲವು ವರ್ಷವಾಗಿದೆ. ಆದರೆ ರಸ್ತೆ ದುರಸ್ತಿಗೆ ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ. ಇದರಿಂದ ಬೇಸತ್ತು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಗ್ರಾಮಸ್ಥರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.