ಹಾವೇರಿ: ‘ಜಿಲ್ಲೆಯಲ್ಲಿ ಅಕ್ಟೋಬರ್ 18ರಿಂದ ಡಿಸೆಂಬರ್ 17ರವರೆಗೆ ‘ತಂಬಾಕು ಮುಕ್ತ ಯುವ ಅಭಿಯಾನ’ ಹಮ್ಮಿಕೊಳ್ಳಲಾಗಿದೆ. ಈ ಅವಧಿಯಲ್ಲಿ ಜಿಲ್ಲೆಯ 30 ಗ್ರಾಮಗಳನ್ನು ತಂಬಾಕು ಮುಕ್ತ ಗ್ರಾಮಗಳನ್ನಾಗಿ ಘೋಷಿಸುವ ಗುರಿ ಇಟ್ಟುಕೊಳ್ಳಲಾಗಿದೆ’ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಸಲಹೆಗಾರ ಸಂತೋಷ ದಡ್ಡಿ ಹೇಳಿದರು.
ನಗರದ ಹೊರವಲಯದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ‘ತಂಬಾಕು ಮುಕ್ತ ಯುವ ಅಭಿಯಾನ 3.0 ಕುರಿತ ಪೂರ್ವಭಾವಿ ಸಭೆ’ಯಲ್ಲಿ ಅವರು ಮಾತನಾಡಿದರು.
‘ಅಭಿಯಾನದ ಅಂಗವಾಗಿ ಜಿಲ್ಲೆಯಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಆರೋಗ್ಯ ಶಿಕ್ಷಣ, ಶಾಲಾ ಮಕ್ಕಳಿಂದ ಪ್ರಭಾತಫೇರಿ ಮೂಲಕ ಜಾಗೃತಿ ಮೂಡಲಾಗುತ್ತಿದೆ. 400 ಶಾಲೆಗಳನ್ನು ತಂಬಾಕು ಮುಕ್ತ ಶಾಲೆಗಳೆಂದು ಘೋಷಿಸುವ ಗುರಿಯಿದೆ’ ಎಂದರು.
‘ಗ್ರಾಮ ಪಂಚಾಯತಿ ಮೂಲಕ ಸರಪಂಚರು ಮತ್ತು ಗ್ರಾಮ ಕಾರ್ಯಕರ್ತರಿಗೆ ವಿವಿಧ ಚಟುವಟಿಕೆಗಳ ಮೂಲಕ ಜಾಗೃತಿ ಮೂಡಿಸಲಾಗುವುದು. ಪೊಲೀಸ್ ಇಲಾಖೆ ಮೂಲಕ ಜಾಗೃತಿ ಕಾರ್ಯಕ್ರಮ ಸಂಘಟಿಸಲಾಗುವುದು. ಅಭಿಯಾನದ ಕಾರ್ಯ ಚಟುವಟಿಕೆಯನ್ನು ಜಿಲ್ಲಾ ಜಾಲತಾಣ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್ ಮಾಡುವ ಮೂಲಕ ವ್ಯಾಪಕ ಪ್ರಚಾರ ಮಾಡಲು ಉದ್ದೇಶಿಸಲಾಗಿದೆ’ ಎಂದು ಹೇಳಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ, ‘ಜಿಲ್ಲೆಯಲ್ಲಿ ತಂಬಾಕು ಮುಕ್ತ ಯುವ ಅಭಿಯಾನವನ್ನು ಸಮರ್ಪಕವಾಗಿ ಅನುಷ್ಠಾನ ಮಾಡಬೇಕು. ಸಾರ್ವಜನಿಕ ಸ್ಥಳ, ಬಸ್ ನಿಲ್ದಾಣ, ಶಾಲಾ–ಕಾಲೇಜುಗಳಲ್ಲಿ ತಂಬಾಕು ಉತ್ಪನ್ನಗಳ ದುಷ್ಪರಿಣಾಮ ಕುರಿತು ಜಾಗೃತಿ ಮೂಡಿಸಬೇಕು’ ಎಂದರು.
‘ಬಸ್ ನಿಲ್ದಾಣ ಹಾಗೂ ಚಿತ್ರಮಂದಿರಗಳಿಗೆ ಅನಿರೀಕ್ಷಿತ ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಸ್ವಚ್ಛತೆಗೆ ಆದ್ಯತೆ ನೀಡುವಂತೆ ನೋಟಿಸ್ ನೀಡಬೇಕು. ಆರೋಗ್ಯ ಇಲಾಖೆ, ಪೊಲೀಸ್, ಶಿಕ್ಷಣ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು’ ಎಂದು ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಎಚ್.ವೈ. ಮೀಸೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಶೋಕ ಶಾಸ್ತ್ರಿ, ತಾಲ್ಲೂಕು ಆರೋಗ್ಯಾಧಿಕಾರಿ ಪ್ರಭಾಕರ ಕುಂದೂರ, ಹಾವೇರಿ ಗ್ರಾಮೀಣ ಸಿಪಿಐ ಸಂತೋಷ ಪವಾರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.