ADVERTISEMENT

ಹಾವೇರಿ| ಹಕ್ಕುಪತ್ರ ವಿತರಣೆಗೆ ಸಕಲ ಸಿದ್ದತೆ ಅವಶ್ಯ: ರುದ್ರಪ್ಪ ಲಮಾಣಿ ಸೂಚನೆ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2026, 2:29 IST
Last Updated 11 ಫೆಬ್ರುವರಿ 2026, 2:29 IST
ಹಾವೇರಿ ನಗರದ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಮಾವೇಶ ಸಭೆಯ ಅಧ್ಯಕ್ಷತೆ ವಹಿಸಿ ವಿಧಾನಸಭೆ ಉಪಸಭಾಪತಿ ರುದ್ರಪ್ಪ ಲಮಾಣಿ ಮಾತನಾಡಿದರು
ಹಾವೇರಿ ನಗರದ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಮಾವೇಶ ಸಭೆಯ ಅಧ್ಯಕ್ಷತೆ ವಹಿಸಿ ವಿಧಾನಸಭೆ ಉಪಸಭಾಪತಿ ರುದ್ರಪ್ಪ ಲಮಾಣಿ ಮಾತನಾಡಿದರು   

ಹಾವೇರಿ: ‘ಜಿಲ್ಲೆಯಲ್ಲಿ ಕಂದಾಯ ಇಲಾಖೆಯ ವತಿಯಿಂದ ಫೆ.14 ರಂದು ರಾಜ್ಯಮಟ್ಟದ 2ನೇ ಬೃಹತ್ ಹಕ್ಕುಪತ್ರ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿದೆ. ಇದಕ್ಕೆ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕು’ ಎಂದು ವಿಧಾನಸಭೆ ಉಪಸಭಾಪತಿ ರುದ್ರಪ್ಪ ಲಮಾಣಿ ಹೇಳಿದರು.

ನಗರದ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಮಾವೇಶ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಹಾವೇರಿ ಹಾಗೂ ಇತರೆ 8 ಜಿಲ್ಲೆಗಳನ್ನು ಸೇರಿ ಒಂದು ಲಕ್ಷ ಫಲಾನುಭವಿಗಳಿಗೆ ಫೆ.14ರಂದು ಹಕ್ಕುಪತ್ರ ವಿತರಿಸಲಾಗುವುದು’ ಎಂದು ತಿಳಿಸಿದರು. 

‘ಸರ್ಕಾರ ಜಾರಿಗೆ ತಂದಿರುವ ಮಹತ್ವದ ಗ್ಯಾರಂಟಿ ಯೋಜನೆಗಳ ಜೊತೆಗೆ ಇದೀಗ ಸರ್ಕಾರ ಒಂದು ಹೆಜ್ಜೆ ಮುಂದೆ ಇಟ್ಟು ಕಂದಾಯ ಗ್ಯಾರಂಟಿ ನೀಡಲು ಮುಂದಾಗಿದೆ. ಹೊಸಪೇಟೆಯಲ್ಲಿ ಹಮ್ಮಿಕೊಂಡಿದ್ದ ಸಮಾವೇಶಕ್ಕಿಂತಲೂ ಉತ್ತಮವಾಗಿ ಆಯೋಜಿಸಲು ಸಕಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ’ ಎಂದರು.

ADVERTISEMENT

ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಸಮಿತಿ ರಚಿಸಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಸಮಾವೇಶ ಇಡೀ ದೇಶಕ್ಕೆ ಮಾದರಿಯಾಗಲಿದೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ರಾಜ್ಯದ ಸಚಿವ ಸಂಪುಟದ ಬಹುತೇಕ ಎಲ್ಲ ಸಚಿವರ ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.

ಹಾವೇರಿ ಜಿಲ್ಲೆಯಿಂದ 50,000, ದಾವಣಗೆರೆ 20,000, ಶಿವಮೊಗ್ಗ, ಧಾರವಾಡ ಹಾಗೂ ಗದಗ ಜಿಲ್ಲೆಯಿಂದ ತಲಾ 10,000, ಚಿಕ್ಕಮಗಳೂರು 7,000, ಚಿತ್ರದುರ್ಗ 5,500, ಕೊಪ್ಪಳ 8,000 ಹಾಗೂ ಉತ್ತರ ಕನ್ನಡ ಜಿಲ್ಲೆಯಿಂದ 1,000 ಜನರು ಹಕ್ಕು ಪತ್ರ ಪಡ್ರೆದುಕೊಳ್ಳಲಿದ್ದಾರೆ. ಫಲಾನುಭವಿಗಳನ್ನು ಸಮಾವೇಶಕ್ಕೆ ಕರೆ ತರಲು 800 ಕೆಎಸ್‌ಆರ್‌ಟಿಸಿ ಬಸ್‌, 75 ಖಾಸಗಿ ಬಸ್‌ ಹಾಗೂ 200 ಶಾಲಾ ವಾಹನ ಸೌಲಭ್ಯ ಕಲ್ಪಿಸಲಾಗಿದೆ. ಕಾರ್ಯಕ್ರಮದ ಭದ್ರತೆಗೆ 3500ಕ್ಕಿಂತಲೂ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ’ ಎಂದರು.

ಸಭೆಯಲ್ಲಿ ತಹಶೀಲ್ದಾರ್ ಶರಣಮ್ಮ ಕೆ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮ ಆಡಳಿತಾಧಿಕಾರಿ ಹಾಗೂ ಸಿಬ್ಬಂದಿ ಇದ್ದರು.

Quote - ಜಿಲ್ಲಾ ಮಟ್ಟದ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳು ಜವಾಬ್ದಾರಿಯುತವಾಗಿ ಯಾವುದೇ ಲೋಪದೋಷ ಆಗದಂತೆ ಕಾರ್ಯ ನಿರ್ವಹಿಸಬೇಕು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.