
ಹಾವೇರಿ: ಜಿಲ್ಲೆಯಲ್ಲಿ ಹೆಚ್ಚಾಗಿರುವ ಬೀದಿನಾಯಿಗಳನ್ನು ಹಿಡಿದು ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಲಾಗುತ್ತಿದ್ದು, ಶಾಲೆ ಆವರಣದಲ್ಲಿ ಇರುವ ಬೀದಿನಾಯಿಗಳನ್ನು ಎಣಿಕೆ ಮಾಡಿ ವರದಿ ನೀಡುವ ಜವಾಬ್ದಾರಿಯನ್ನು ಶಿಕ್ಷಕರಿಗೆ ವಹಿಸಲಾಗಿದೆ.
ಶಾಲಾ ಆವರಣದಲ್ಲಿ ಬರುವ ಬೀದಿ ನಾಯಿಗಳ ಎಣಿಕೆ ಮಾಡಿ, ವರದಿ ನೀಡುವಂತೆ ಜಿಲ್ಲೆಯ ಎಲ್ಲ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಆದೇಶ ಹೊರಡಿಸಿದ್ದಾರೆ. ಅದರಂತೆ ವರದಿಗಳು ಸಲ್ಲಿಕೆಯಾಗಿವೆ.
ಸರ್ಕಾರಿ ಶಾಲೆಗಳಲ್ಲಿ 1,766, ಅನುದಾನಿತ ಶಾಲೆಗಳಲ್ಲಿ 224 ಹಾಗೂ ಖಾಸಗಿ ಶಾಲೆಗಳಲ್ಲಿ 291 ಸೇರಿದಂತೆ ಜಿಲ್ಲೆಯಾದ್ಯಂತ ಶಾಲೆಗಳ ಆವರಣದಲ್ಲಿ 2,211 ಬೀದಿನಾಯಿಗಳು ಇರುವ ಬಗ್ಗೆ ಸರ್ಕಾರಕ್ಕೂ ವರದಿ ಸಲ್ಲಿಕೆಯಾಗಿದೆ.
‘ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಾಲಾ ಆವರಣದಲ್ಲಿ ಇರುವ ಬೀದಿನಾಯಿಗಳ ಬಗ್ಗೆ ವರದಿ ನೀಡುವಂತೆ ಇಲಾಖೆಯ ಹಿರಿಯ ಅಧಿಕಾರಿಗಳಿಂದ ಸೂಚನೆ ಬಂದಿತ್ತು. ಅದನ್ನು ಆಧರಿಸಿ ಜಿಲ್ಲೆಯ ಎಲ್ಲ ಶಾಲೆಗಳಿಂದ ವರದಿ ತರಿಸಿಕೊಂಡು ಕೇಂದ್ರ ಕಚೇರಿಗೆ ಕಳುಹಿಸಲಾಗಿದೆ’ ಎಂದು ಶಾಲಾ ಶಿಕ್ಷಣ ಇಲಾಖೆಯ ಮೋಹನ್ ದಂಡಿನ ‘ಪ್ರಜಾವಾಣಿ’ಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.