ಹಾವೇರಿ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ನೀಡಲು ನಗರದ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ವಿಶೇಷ ವಸ್ತುಪ್ರದರ್ಶನ ಹಮ್ಮಿಕೊಳ್ಳಲಾಗಿದ್ದು, ನೋಡುಗರ ಗಮನ ಸೆಳೆಯುತ್ತಿದೆ.
ಮಳಿಗೆ ರೂಪದಲ್ಲಿ ವಸ್ತುಪ್ರದರ್ಶನ ಏರ್ಪಪಡಿಸಲಾಗಿದೆ. ಪ್ರವೇಶ ದ್ವಾರದಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿಯಿದೆ. ಗ್ಯಾರಂಟಿ ಯೋಜನೆಗಳ ಪರಿಚಯ ನೀಡುವ ಪುಸ್ತಕ ಹಿಡಿದುಕೊಂಡಿರುವ ಸಿದ್ದರಾಮಯ್ಯ, ನೋಡುಗರನ್ನು ಸ್ವಾಗತಿಸುತ್ತಿದ್ದಾರೆ.
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಹಸಿವು ಮುಕ್ತ ಕರ್ನಾಟಕದತ್ತ ದಾಪುಗಾಲು (ಅನ್ನ ಭಾಗ್ಯ), ಗ್ಯಾರಂಟಿ ಬದುಕು ಶಕ್ತಿ, ಗೃಹ ಜ್ಯೋತಿ, ಯುವ ನಿಧಿ, ಪ್ರಗತಿಯತ್ತ ಕರ್ನಾಟಕ, ಸಿರಿಗನ್ನಡಂ ಗೆಲ್ಗೆ, ಗ್ಯಾರಂಟಿ ಬದುಕು, ನೀವು ಕರ್ನಾಟಕದಲ್ಲಿ ಹಸಿವಿನಿಂದ ಬಳಲುವುದಿಲ್ಲ (ಇಂದಿರಾ ಕ್ಯಾಂಟಿನ್), ಅನ್ನದಾತನ ಮೊಗದಲ್ಲಿ ಮಂದಹಾಸ, ಹಿಂದುಳಿದ ವರ್ಗಗಳ ಕಲ್ಯಾಣ ಪಣ, ಸರ್ವರಿಗೂ ಗುಣಮಟ್ಟದ ಆರೋಗ್ಯ ಸೌಲಭ್ಯ, ಸರ್ವರಿಗೂ ಸೂರು ಹೀಗೆ ವಿವಿಧ ಯೋಜನೆಗಳ ಮಾಹಿತಿ ಪ್ರದರ್ಶನದಲ್ಲಿದೆ.
ಪ್ರದರ್ಶನವನ್ನು ಸೋಮವಾರ ಉದ್ಘಾಟಿಸಿದ ಶಾಸಕ ರುದ್ರಪ್ಪ ಲಮಾಣಿ, ‘ಯೋಜನೆಗಳ ವಸ್ತು ಪ್ರದರ್ಶನದ ಅದ್ಭುತವಾಗಿ ಮೂಡಿಬಂದಿದೆ’ ಎಂದರು.
ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ಎಸ್.ಆರ್.ಪಾಟೀಲ ಮಾತನಾಡಿ, ‘ಗ್ಯಾರಂಟಿ ಯೋಜನೆಗಳಿಂದ ಬಡ ಜನರ ಜೀವನಮಟ್ಟ ಸುಧಾರಿಸಿದೆ. ದೇಶದ ಜಿಡಿಪಿ ಸಾಧನೆ ಕೊಡುಗೆಗೆ ಕರ್ನಾಟಕ ರಾಜ್ಯ ಎರಡನೇ ಸ್ಥಾನದಲ್ಲಿರುವುದು ಹೆಮ್ಮೆಯ ಸಂಗತಿ’ ಎಂದರು.
ಜಿಲ್ಲಾ ವಾರ್ತಾಧಿಕಾರಿ ಭಾರತಿ ಅವರು ಸರ್ಕಾರದ ಯೋಜನೆಗಳ ಕುರಿತು ಮಾಹಿತಿ ನೀಡಿದರು. ನಗರಸಭೆ ಸದಸ್ಯ ಸಂಜೀವಕುಮಾರ ನೀರಲಗಿ, ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ, ಕೆಎಸ್‌ಆರ್‌ಟಿಸಿ ಡಿ.ಸಿ. ವಿಜಯಕುಮಾರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.