
ಹಿರೇಕೆರೂರ: ಗಣರಾಜ್ಯ ದಿನವು ಎಲ್ಲ ಭಾರತೀಯರನ್ನು ಭಾವನಾತ್ಮಕ, ಭಾಷಿಕ, ಭೌಗೋಳಿಕ ಹಾಗೂ ಆಡಳಿತಾತ್ಮಕವಾಗಿ ಬೆಸುಗೆ ಹಾಕಿದ ದಿನವಾಗಿದೆ. ಶ್ರೇಷ್ಠ ಸಂವಿಧಾನವನ್ನು ಎಲ್ಲ ಭಾರತೀಯರು ಮನಃಪೂರ್ವಕವಾಗಿ ಅಂತಃಕರಣದಿಂದ ಒಪ್ಪಿ ಸಂತಸಪಟ್ಟ ದಿನವಾಗಿದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ಪಟ್ಟಣದ ಪೋಲಿಸ್ ಪರೇಡ್ ಮೈದಾನದಲ್ಲಿ ಸೋಮವಾರ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಆಚರಣೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವನ್ನು 1950ರ ಜ. 26ರಂದು ಜಾರಿಗೆ ತರಲಾಯಿತು. ಅಂದಿನಿಂದಲೂ ಸಂವಿಧಾನ ದಿನ ಹಾಗೂ ಗಣರಾಜ್ಯೋತ್ಸವ ದಿನವನ್ನಾಗಿ ಸಂಭ್ರಮದಿಂದ ಆಚರಿಸುತ್ತೇವೆ ಎಂದರು.
‘ಸರ್ಕಾರದ ಮೂಲ ಧ್ಯೇಯ ಸಮಾನತೆ ಮತ್ತು ಸಾಮಾಜಿಕ ನ್ಯಾಯವಾಗಿದೆ. ಶೋಷಿತರು ಮತ್ತು ಹಿಂದುಳಿದ ವರ್ಗದವರ ಏಳಿಗೆ, ಮಹಿಳಾ ಸಬಲೀಕರಣಕ್ಕಾಗಿ 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ’ ಎಂದು ಅವರು ಹೇಳಿದರು.
‘ಮಹಾತ್ಮ ಗಾಂಧೀಜಿ, ನೆಹರೂ, ನೇತಾಜಿ ಸೇರಿದಂತೆ ಪ್ರತಿ ಸ್ವಾತಂತ್ರ್ಯ ಹೋರಾಟಗಾರರನ್ನು ನಿತ್ಯ ನೆನೆಯಬೇಕು. ದೇಶದ ಗಡಿ ಕಾಯುತ್ತಿರುವ ಸೈನಿಕರನ್ನು ಸ್ಮರಿಸಬೇಕು. ಸಂವಿಧಾನದ ಆಶಯಗಳನ್ನು ಜಾರಿಗೊಳಿಸಲು ಶ್ರಮಿಸಬೇಕು’ ಎಂದರು.
‘ರಾಜ್ಯ ಸರ್ಕಾರವು ಭವ್ಯ ಸಂವಿಧಾನದ ಆಶಯಗಳನ್ನು ಗಟ್ಟಿಗೊಳಿಸಲು ಸರ್ಕಾರಿ ಸಭೆ, ಸಮಾರಂಭ ಹಾಗೂ ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ವಾಚನವನ್ನು ಕಡ್ಡಾಯಗೊಳಿಸಿದೆ’ ಎಂದರು.
ತಹಶೀಲ್ದಾರ್ ಎಂ. ರೇಣುಕಾ ಧ್ವಜಾರೋಹಣ ನೆರವೇರಿಸಿದರು.
ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಮಲ್ಲಿಕಾರ್ಜುನ ಬುರುಡಿಕಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಎನ್. ಶ್ರೀಧರ್, ಎಚ್.ಎಚ್. ಜಾಡರ, ಸಿಪಿಐ ಮಂಜುನಾಥ ಪಂಡಿತ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೋಡಿ ಭೀಮರಾಯ ಎನ್.ಟಿ., ತಾಲ್ಲೂಕು ಆರೋಗ್ಯಾಧಿಕಾರಿ ಜೆಡ್.ಆರ್. ಮಕಾನದಾರ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎನ್. ರವಿ, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮೇಘರಾಜ ಮಾಳಗಿಮನಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ ರಮೇಶ ಮಡಿವಾಳರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.