ಹಾವೇರಿ: ಬಾಲಕಿಯನ್ನು ಅಪಹರಿಸಿ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ನಂತರ ಕೊಲೆ ಮಾಡಿದ್ದ ಆರೋಪಿಗೆ ಒಂದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ (ಪೋಕ್ಸೊ) ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಈ. ರಾಜೀವಗೌಡ ಅವರು ಮರಣದಂಡನೆ ಶಿಕ್ಷೆ ಮತ್ತು ₹1 ಲಕ್ಷ ದಂಡ ವಿಧಿಸಿ ಗುರುವಾರ ಆದೇಶ ನೀಡಿದ್ದಾರೆ.
ಸವಣೂರ ತಾಲ್ಲೂಕಿನ ಮಣ್ಣೂರ ಗ್ರಾಮದ ಮಂಜುನಾಥಗೌಡ@ ಶಶಿ ಪಾಟೀಲ (26) ಎಂಬ ಆರೋಪಿಯು 2018ರ ಆಗಸ್ಟ್‌ನಲ್ಲಿ ಕಾಲೇಜಿಗೆ ಹೋಗುತ್ತಿದ್ದ ಬಾಲಕಿಯನ್ನು ಅಪಹರಿಸಿ, ಅತ್ಯಚಾರ ಎಸಗಿದ್ದ. ಕೊಲೆ ಮಾಡಿದ ನಂತರ ಶವವನ್ನು ಕಾರಿನಲ್ಲಿ ಸಾಗಿಸಿ, ಹಾವೇರಿ–ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ–4ರಲ್ಲಿ ಬರುವ ವರದಾ ಸೇತುವೆ ಕೆಳಗೆ ಶವವನ್ನು ಸುಟ್ಟು ಹಾಕಿದ್ದ. ಈ ಪ್ರಕರಣ ಜಿಲ್ಲೆಯಾದ್ಯಂತ ದೊಡ್ಡ ಸುದ್ದಿಯಾಗಿತ್ತು.
ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ಹಾವೇರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಸಿಪಿಐ ಬಾಸು ಚೌಹಾಣ್ ತನಿಖೆ ನಡೆಸಿ, ಆರೋಪಿನ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಆರೋಪಿಯು ₹1.50 ಲಕ್ಷ ಪರಿಹಾರವನ್ನು ಸಂತ್ರಸ್ತೆಯ ಕುಟುಂಬಕ್ಕೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ವಿನಾಯಕ ಎಸ್.ಪಾಟೀಲ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.