ADVERTISEMENT

ಪಠ್ಯದ ಕೇಸರೀಕರಣ: ಹಾವೇರಿಯಲ್ಲಿ ಕರವೇ ಖಂಡನೆ

ಶಿಕ್ಷಣ ಸಚಿವ ಬಿ.ಸಿ.ನಾಗೇಶ ಅವರನ್ನು ಸಂಪುಟದಿಂದ ವಜಾಗೊಳಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 17 ಜೂನ್ 2022, 15:29 IST
Last Updated 17 ಜೂನ್ 2022, 15:29 IST
ಶಿಕ್ಷಣ ಸಚಿವ ಬಿ.ಸಿ.ನಾಗೇಶ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಕುಮಾರ ಶೆಟ್ಟಿ ಬಣ) ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು
ಶಿಕ್ಷಣ ಸಚಿವ ಬಿ.ಸಿ.ನಾಗೇಶ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಕುಮಾರ ಶೆಟ್ಟಿ ಬಣ) ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು   

ಹಾವೇರಿ: ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಮರು ಪರಿಷ್ಕರಣಾ ಸಮಿತಿ ರದ್ದುಪಡಿಸಬೇಕು ಹಾಗೂ ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿ ನೀಡಿರುವ ಪಠ್ಯಪುಸ್ತಕರ ಪರಿಷ್ಕರಣೆಯನ್ನು ಮುಂದುವರಿಸಬೇಕು ಎಂದುಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಕುಮಾರ ಶೆಟ್ಟಿ ಬಣ) ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ ಓಲೇಕಾರ, ‘ರಾಜ್ಯ ಸರ್ಕಾರ ರೋಹಿತ್‌ ಚಕ್ರತೀರ್ಥ ನೇತೃತ್ವದಲ್ಲಿ ಪಠ್ಯಪುಸ್ತಕ ಮರು ಪರಿಷ್ಕರಣಾ ಸಮಿತಿಯನ್ನು ಮಾಡಿ ವಿವಾದ ಹುಟ್ಟು ಹಾಕಿರುವುದನ್ನು ಕರವೇ ತೀವ್ರವಾಗಿ ಖಂಡಿಸುತ್ತದೆ.ಸಕಾಲದಲ್ಲಿ ಪಠ್ಯಪುಸ್ತಕ ಪೂರೈಸಲು ವಿಫಲರಾದ ಮತ್ತು ಹಲವು ಗೊಂದಲಗಳಿಗೆ ಕಾರಣರಾದ ಶಿಕ್ಷಣ ಸಚಿವ ಬಿ.ಸಿ ನಾಗೇಶ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿದರು.

ನಾಡಿನ ಸಂತ ಶರಣರ, ಸಾಹಿತಿಗಳ, ಕಾನೂನು ತಜ್ಞರ ಪಾಠಗಳನ್ನು ತಿರುಚಿ ಈ ನಾಡಿನ ಮಕ್ಕಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವಂತಹ ವಿವಾದಾತ್ಮಕ ವಿಷಯಗಳನ್ನು ಪಠ್ಯ ಪುಸ್ತಕಗಳಲ್ಲಿ ಮುದ್ರಿಸಿರುವುದು ಖಂಡನೀಯ, ವಿಶ್ವ ಮಾನವ ಕುವೆಂಪುರವರು ರಚಿಸಿರುವ ನಾಡಗೀತೆ ತಿರುಚಿ ಕುವೆಂಪು ಅವರಿಗೆ ಅವಮಾನ ಮಾಡಿರುವುದನ್ನು ಸಹಿಸಲಾಗದು. ಅದರಂತೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್‌ ಅವರ ಬಿರುದು ‘ಸಂವಿಧಾನ ಶಿಲ್ಪಿ’ ಎಂಬ ಪದವನ್ನು ಪಠ್ಯದಿಂದ ತೆಗೆದು ಹಾಕಿರುವುದು ಖಂಡನೀಯ ಎಂದರು.

ADVERTISEMENT

ಪಠ್ಯದ ಕೇಸರೀಕರಣ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ನಡೆಯನ್ನು ಕರವೇ ತೀವ್ರವಾಗಿ ಖಂಡಿಸುತ್ತದೆ, ಅಲ್ಲದೇ, ರಾಜ್ಯದಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಹಿಂದಿ ಭಾಷೆ ಬರುವ ಶಾಲಾ ಮಕ್ಕಳಿಗೆ ಮಾತ್ರ ಪ್ರವಾಸಕ್ಕೆ ಸೂಚಿಸಿರುವುದು ಖಂಡನೀಯ ಎಂದರು.

ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ನೂರ್‌ ಅಹ್ಮದ ಲಕ್ಷ್ಮೇಶ್ವರ, ಉಪಾಧ್ಯಕ್ಷ ಮಹದೇವಪ್ಪ ಹೆಡಿಗ್ಗೊಂಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಲ್ಲಪ್ಪ ಮರಾಠೆ, ಜಿಲ್ಲಾ ಸಂಚಾಲಕ ಮಾಲತೇಶ ಜಿ.ಕೆ, ಜಿಲ್ಲಾ ಯುವ ಘಟಕದ ಉಪಾಧ್ಯಕ್ಷ ಯುಸೂಫ ಸೈಕಲಗಾರ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಬಸವರಾಜ ಹೊಂಭರಡಿ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.