ADVERTISEMENT

ಹಾವೇರಿ | ಉಪನ್ಯಾಸಕರ ಕೊರತೆ: ವಿದ್ಯಾರ್ಥಿಗಳ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2025, 2:33 IST
Last Updated 23 ಆಗಸ್ಟ್ 2025, 2:33 IST
ಪದವಿ ಕಾಲೇಜುಗಳಲ್ಲಿ ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ಹಾವೇರಿ ವಾಲ್ಮೀಕಿ ವೃತ್ತದಲ್ಲಿ ವಿದ್ಯಾರ್ಥಿಗಳು ಶುಕ್ರವಾರ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು 
ಪದವಿ ಕಾಲೇಜುಗಳಲ್ಲಿ ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ಹಾವೇರಿ ವಾಲ್ಮೀಕಿ ವೃತ್ತದಲ್ಲಿ ವಿದ್ಯಾರ್ಥಿಗಳು ಶುಕ್ರವಾರ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು    

ಹಾವೇರಿ: ‘ರಾಜ್ಯದ ಪದವಿ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿದ್ದು, ಇದರಿಂದ ತರಗತಿಗಳಿಗೆ ತೊಂದರೆ ಆಗುತ್ತಿದೆ’ ಎಂದು ಆರೋಪಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ನಗರದ ವಾಲ್ಮೀಕಿ ವೃತ್ತದಲ್ಲಿ ಸೇರಿದ್ದ ವಿದ್ಯಾರ್ಥಿಗಳು, ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು.

‘ರಾಜ್ಯದಲ್ಲಿ ಪದವಿ ಕಾಲೇಜಿನ ತರಗತಿಗಳು ಶುರುವಾಗಿ ತಿಂಗಳಾಗಿದೆ. ಎಲ್ಲ ಕಾಲೇಜಿನಲ್ಲೂ ಉಪನ್ಯಾಸಕರ ಕೊರತೆ ಇದೆ. ಎಲ್ಲಿಯೂ ಅತಿಥಿ ಉಪನ್ಯಾಸಕರ ನೇಮಕಾತಿ ನಡೆದಿಲ್ಲ. ಇದು ವ್ಯಾಸಂಗದ ಮೇಲೆ ಪರಿಣಾಮ ಬೀರಿದೆ’ ಎಂದು ಪ್ರತಿಭಟನಕಾರರು ಹೇಳಿದರು.

ADVERTISEMENT

‘ಅತಿಥಿ ಉಪನ್ಯಾಸಕರನ್ನೇ ನಂಬಿಕೊಂಡಿದ್ದ ಕಾಲೇಜುಗಳಲ್ಲಿ ಹೆಚ್ಚಿನ ತೊಂದರೆಯಾಗಿದೆ. ಬಡ, ಕೂಲಿ ಕಾರ್ಮಿಕರ ಮಕ್ಕಳು ಹೆಚ್ಚಾಗಿ ಪದವಿ ಕಾಲೇಜಿನಲ್ಲಿ ಓದುತ್ತಿದ್ದಾರೆ. ಉಪನ್ಯಾಸಕರು ಇಲ್ಲದಿದ್ದರಿಂದ, ತರಗತಿಗಳು ನಡೆಯುತ್ತಿಲ್ಲ’ ಎಂದರು.

‘ರಾಜ್ಯ ಸರ್ಕಾರ ತ್ವರಿತವಾಗಿ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಬೇಕಿತ್ತು. ಆದರೆ, ಇದುವರೆಗೂ ಪ್ರಕ್ರಿಯೆ ಆರಂಭಿಸಿಲ್ಲ. ಇದು ವಿದ್ಯಾರ್ಥಿ ವಿರೋಧಿ ನಡೆಯಾಗಿದೆ. ಇನ್ನಾದರೂ ಎಚ್ಚೆತ್ತುಕೊಂಡು ಸರ್ಕಾರ, ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಬೇಕು’ ಎಂದು ಆಗ್ರಹಿಸಿದರು.

‘ಉಪನ್ಯಾಸಕರ ಕೊರತೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಸರ್ಕಾರಿ ಕಾಲೇಜುಗಳಲ್ಲಿ ಮೂಲ ಸೌಕರ್ಯ ಕಲ್ಪಿಸಲು ಹೆಚ್ಚಿನ ಅನುದಾನ ನೀಡಬೇಕು. ಪ್ರಯೋಗಾಲಯ, ಕಂಪ್ಯೂಟರ್ ಹಾಗೂ ಆಧುನಿಕ ಶಿಕ್ಷಣಕ್ಕೆ ತಕ್ಕಂತೆ ಉಪಕರಣಗಳನ್ನು ಒದಗಿಸಬೇಕು’ ಎಂದೂ ಒತ್ತಾಯಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.