ADVERTISEMENT

ಸರ್ಕಾರಿ ಕಚೇರಿಗಳು ತಂಬಾಕು ಮುಕ್ತವಾಗಲಿ

ಜಿಲ್ಲಾ ಮಟ್ಟದ ತ್ರೈಮಾಸಿಕ ಸಭೆಯಲ್ಲಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2022, 13:35 IST
Last Updated 8 ಆಗಸ್ಟ್ 2022, 13:35 IST
ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ರಾಷ್ಟ್ರೀಯ ತಂಬಾಕು ನಿಯಂತ್ರಣ ಜಿಲ್ಲಾ ಮಟ್ಟದ ತ್ರೈಮಾಸಿಕ ಸಭೆಯು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಅಧ್ಯಕ್ಷತೆಯಲ್ಲಿ ನಡೆಯಿತು 
ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ರಾಷ್ಟ್ರೀಯ ತಂಬಾಕು ನಿಯಂತ್ರಣ ಜಿಲ್ಲಾ ಮಟ್ಟದ ತ್ರೈಮಾಸಿಕ ಸಭೆಯು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಅಧ್ಯಕ್ಷತೆಯಲ್ಲಿ ನಡೆಯಿತು    

ಹಾವೇರಿ: ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕೋಟ್ಪಾ ಕಾಯ್ದೆ ಜಾರಿಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಜಿಲ್ಲಾ ಮಟ್ಟದ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಲ್ಲಿ ಮಾರ್ಗಸೂಚಿಯನ್ವಯ ತಂಬಾಕು ಮುಕ್ತ ಶಿಕ್ಷಣ ಸಂಸ್ಥೆಗಳನ್ನಾಗಿ ಘೋಷಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಂಬಾಕು ತನಿಖಾ ದಾಳಿಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಸಕ್ರಿಯವಾಗಿ ಭಾಗವಹಿಸಬೇಕು. ಶಾಲಾ-ಕಾಲೇಜು ಕಟ್ಟಡದ ನೂರು ಮೀಟರ್ ವ್ಯಾಪ್ತಿಯಲ್ಲಿ ಧೂಮಪಾನ ಮತ್ತು ತಂಬಾಕು ಮಾರಾಟ ಮಾಡದಂತೆ ಈಗಿರುವ ನಿಯಮಗಳನ್ನು ಕಡ್ಡಾಯವಾಗಿ ಅನುಷ್ಠಾನಕ್ಕೆ ತರಬೇಕು. ನಿಯಮ ಮೀರಿದ ಮಾರಾಟಗಾರರ ಮೇಲೆ ದಂಡ ವಿಧಿಸಿ ಕಾನೂನಾತ್ಮಕ ಕ್ರಮ ಕೈಗೊಳ್ಳಿ ಎಂದರು.

ADVERTISEMENT

ಗುಲಾಬಿ ಆಂದೋಲನ:

ಪ್ರಸಕ್ತ ಸಾಲಿನಲ್ಲಿ ತಾಲ್ಲೂಕು ಮಟ್ಟದಲ್ಲಿ ಶಾಲಾ ವಿದ್ಯಾರ್ಥಿಗಳಿಂದ, ಆಶಾ ಕಾರ್ಯಕರ್ತೆಯರಿಂದ ಕೋಟ್ಪ-2003ರ ಅನುಷ್ಠಾನದ ಕುರಿತು ‘ಗುಲಾಬಿ ಆಂದೋಲನ’ ಕೈಗೊಳ್ಳಬೇಕು. ಸಾರ್ವಜನಿಕರು ಸಹಕರಿಸಬೇಕು ಎಂದು ತಿಳಿಸಿದರು.

ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳನ್ನು ತಂಬಾಕು ಮುಕ್ತ ಸ್ಥಳಗಳನ್ನಾಗಿ ಘೋಷಿಸಿ, ಕಚೇರಿ ಪ್ರವೇಶ ದ್ವಾರದಲ್ಲಿ ‘ತಂಬಾಕು ಮುಕ್ತ ಕಚೇರಿ’ ಎಂಬ ನಾಮಫಲಕ ಅಳವಡಿಸುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯಕುಮಾರ ಸಂತೋಷ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಆರ್.ವಿ.ಹಾವನೂರ, ಜಿಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಜಗದೀಶ ಪಾಟೀಲ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ ಸೇರಿದಂತೆ ಎಲ್ಲ ತಾಲ್ಲೂಕು ಆರೋಗ್ಯಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.