ಹಾವೇರಿ: ‘2024ರ ಏಪ್ರಿಲ್ ತಿಂಗಳಿನಲ್ಲಿ 64 ಡೆಂಗಿ ಪ್ರಕರಣಗಳು ವರದಿಯಾಗಿದ್ದವು. ಈ ವರ್ಷದ ಏಪ್ರಿಲ್‌ನಲ್ಲಿ 20 ಪ್ರಕರಣಗಳು ಪತ್ತೆಯಾಗಿವೆ’ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಸರಿತಾ ಹೇಳಿದರು.
ನಗರದ ರಾಜ್ಯ ಸರ್ಕಾರಿ ನೌಕರರ ಸಂಘದ ಸಮುದಾಯ ಭವನದಲ್ಲಿ ರಾಷ್ಟ್ರೀಯ ಡೆಂಗಿ ದಿನಾಚರಣೆ ಅಂಗವಾಗಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಹಾಗೂ ಪೌರಕಾರ್ಮಿಕರಿಗಾಗಿ ಶುಕ್ರವಾರ ಆಯೋಜಿಸಿದ್ದ ‘ಕೀಟಜನ್ಯ ರೋಗಗಳ ತರಬೇತಿ ಕಾರ್ಯಾಗಾರ’ದಲ್ಲಿ ಅವರು ಮಾತನಾಡಿದರು.
‘ಜನವರಿ ತಿಂಗಳಿನಿಂದ ಜಿಲ್ಲೆಯ 345 ಸೂಕ್ಷ್ಮ ಪ್ರದೇಶಗಳಲ್ಲಿರುವ ಜನರಲ್ಲಿ ಜಾಗೃತಿ ಮೂಡಿಸಲಾಗಿದೆ. ಡೆಂಗಿ ನಿಯಂತ್ರಣ ಕಾರ್ಯದಲ್ಲಿ ಪೌರಕಾರ್ಮಿಕರು ಹಾಗೂ ಆಶಾ ಕಾರ್ಯಕರ್ತರ ಪಾತ್ರ ಬಹಳ ಪ್ರಮುಖವಾಗಿದೆ. ಈ ಹಿನ್ನಲೆಯಲ್ಲಿ ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿ ಘನತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು’ ಎಂದರು ಹೇಳಿದರು.
‘ಘನತ್ಯಾಜ್ಯ ವಸ್ತುಗಳಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ಡೆಂಗಿ ನಿಯಂತ್ರಣಕ್ಕೆ ಎಲ್ಲರೂ ಕೈಜೋಡಿಸಬೇಕು. ಜ್ವರ ಬಂದರೆ ಉದಾಸೀನ ಮಾಡದೇ ವೈದ್ಯರ ಬಳಿ ಚಿಕಿತ್ಸೆ ಪಡೆದುಕೊಳ್ಳಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಪರೀಕ್ಷೆ ಹಾಗೂ ಚಿಕಿತ್ಸೆ ನೀಡಲಾಗುತ್ತಿದ್ದು, ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಹೇಳಿದರು.
‘ಡೆಂಗಿಗೆ ನಿಗದಿತ ಚಿಕಿತ್ಸೆ ಇರುವುದಿಲ್ಲ. ಜ್ವರ ಕಾಣಿಸಿಕೊಂಡ ತಕ್ಷಣ ಪರೀಕ್ಷೆ ಮಾಡಿಕೊಂಡು ಚಿಕಿತ್ಸೆ ಪಡೆಯಬೇಕು. ಪ್ರಾರಂಭದಲ್ಲೇ ಚಿಕಿತ್ಸೆ ಪಡೆದರೆ ಬೇಗ ಗುಣಮುಖರಾಗಬಹುದು. ಸಾವು–-ನೋವುಗಳನ್ನು ತಪ್ಪಿಸಬಹುದು. ಜಗತ್ತಿನ ನೂರಕ್ಕೂ ಅಧಿಕ ದೇಶಗಳಲ್ಲಿ ಡೆಂಗಿ ಕಾಣಿಸಿಕೊಳ್ಳುತ್ತಿದೆ. ಡಬ್ಲ್ಯುಎಚ್‌ಒ ವರದಿ ಪ್ರಕಾರ 2000ರಲ್ಲಿ 5 ಸಾವಿರ, 2023ರಲ್ಲಿ 65 ಲಕ್ಷ ಹಾಗೂ 2024ರಲ್ಲಿ 50 ಲಕ್ಷ ಡೆಂಗಿ ಪ್ರಕರಣಗಳು ಪತ್ತೆಯಾಗಿವೆ’ ಎಂದರು.
‘ಕಳೆದ ವರ್ಷ ಜಿಲ್ಲೆಯಲ್ಲಿ 800 ಪ್ರಕರಣಗಳು ಪತ್ತೆಯಾಗಿದ್ದವು. ಇದರಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಕಳೆದ ಜುಲೈನಲ್ಲಿ ಹೆಚ್ಚಿನ ಸಂಖ್ಯೆ ಡೆಂಗಿ ಪ್ರಕರಣಗಳು ಪತ್ತೆಯಾಗಿದ್ದವು. ಈ ವರ್ಷ ಡೆಂಗಿ ಹೆಚ್ಚಾಗದಂತೆ ನಿಯಂತ್ರಿಸಲು, ನಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳಬೇಕು. ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಸಮನ್ವಯದಿಂದ, ಜವಾಬ್ದಾರಿ ಹಾಗೂ ಉತ್ಸಾಹದಿಂದ ಕೆಲಸಮಾಡಬೇಕು’ ಎಂದರು.
‘ಮಳೆ ಆರಂಭವಾಗುತ್ತಿದ್ದಂತೆ ಅಲ್ಲಲ್ಲಿ ನೀರು ನಿಂತು ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ನೀರು ನಿಲ್ಲದಂತೆ ಮುಂಜಾಗ್ರತಾ ಕ್ರಮವಹಿಸಬೇಕು. ಮನೆಗಳಲ್ಲಿ ನೀರು ಶೇಖರಣೆ ಸಾಮಗ್ರಿಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸಲು ಹಾಗೂ ನೀರು ತುಂಬಿಡುವ ಪರಿಕರಗಳನ್ನು ಗಾಳಿ ಆಡದಂತೆ ಭದ್ರವಾಗಿ ಮುಚ್ಚುವಂತೆ ಜನರಲ್ಲಿ ಜಾಗೃತಿ ಮೂಡಿಸಬೇಕು’ ಎಂದು ಅಧಿಕಾರಿಗಳಿಗೆ ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಜೇಶ ಸುರಗಿಹಳ್ಳಿ ಮಾತನಾಡಿ, ‘ಡೆಂಗಿ ಮಾರಣಾಂತಿಕ ಕಾಯಿಲೆಯಲ್ಲ. ಆದರೆ, ನಿರ್ಲಕ್ಷ್ಯ ಮಾಡಿದರೆ ಮರಣ ಸಾಧ್ಯತೆ ಇರುತ್ತದೆ. 24 ಗಂಟೆಯೊಳಗೆ ಜ್ವರ ಕಡಿಮೆಯಾಗದಿದ್ದರೆ, ಕೂಡಲೇ ಸರ್ಕಾರಿ ಆಸ್ಪತ್ರೆಗಳಲ್ಲಿ ಪರೀಕ್ಷಿಸಿಕೊಳ್ಳಬೇಕು. ಡೆಂಗಿ ಪರೀಕ್ಷೆಗೆ ಎಲ್ಲ ಆಸ್ಪತ್ರೆಗಳಲ್ಲಿ ರ‍್ಯಾಪಿಟ್ ಕಿಟ್ ವ್ಯವಸ್ಥೆ ಮಾಡಲಾಗಿದೆ. ಮೂರಕ್ಕಿಂತ ಅಧಿಕ ಡೆಂಗಿ ಪ್ರಕರಣಗಳು ಕಂಡುಬಂದ ಪ್ರದೇಶದಲ್ಲಿ ಜ್ವರದ ಕ್ಲಿನಿಕ್ ಆರಂಭಿಸಿ ಸೂಕ್ತ ಚಿಕಿತ್ಸೆ ನೀಡಲಾಗುವುದು’ ಎಂದರು.
ಡಾ. ನಿಲೇಶ, ಡಾ. ಚನ್ನಬಸಯ್ಯ ವಿರಕ್ತಮಠ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಪ್ರಭಾಕರ ಕುಂದೂರ, ರಾಜ್ಯ ಸರ್ಕಾರಿ ನೌಕರರ ಸಂಘದ ಹಾವೇರಿ ಘಟಕದ ಜಿಲ್ಲಾಧ್ಯಕ್ಷ ಮಲ್ಲೇಶ ಕರಿಗಾರ, ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕ, ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಚನ್ನಪ್ಪ, ಹಿರಿಯ ಆರೋಗ್ಯ ನಿರೀಕ್ಷ ಖುಷ ಭಾಗವಹಿಸಿದ್ದರು.
ಸೊಳ್ಳೆ ಕಚ್ಚುವುದರಿಂದ ಡೆಂಗಿ ಕಾಯಿಲೆ ಬರುತ್ತದೆ. ಡೆಂಗಿ ತಡೆಗೆ ಆರೋಗ್ಯ ಇಲಾಖೆ ಜೊತೆಗೆ ಸಾರ್ವಜನಿಕರ ಸಹಕಾರ ಹಾಗೂ ಸಹಭಾಗಿತ್ವ ಮುಖ್ಯ-ಡಾ. ವಿಜಯ ಮಹಾಂತೇಶ ದಾನಮ್ಮನವರ ಜಿಲ್ಲಾಧಿಕಾರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.