ADVERTISEMENT

ಗೋಶಾಲೆ ತೆರೆಯಲು ಪ್ರಸ್ತಾವ ಸಲ್ಲಿಸಿ

ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಆದ್ಯಾದೇಶ ಅನುಷ್ಠಾನಕ್ಕೆ ಡಿ.ಸಿ ಸೂಚನೆ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2021, 14:51 IST
Last Updated 16 ಫೆಬ್ರುವರಿ 2021, 14:51 IST
ಹಾವೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧ ಮತ್ತು ಸಂರಕ್ಷಣಾ ಆದ್ಯಾದೇಶ 2020ರ ಕುರಿತ ಜಿಲ್ಲಾ ಮಟ್ಟದ ಸಮಿತಿ ಸಭೆ ಸಂಜಯ ಶೆಟ್ಟೆಣ್ಣವರ ಅಧ್ಯಕ್ಷತೆಯಲ್ಲಿ ನಡೆಯಿತು
ಹಾವೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧ ಮತ್ತು ಸಂರಕ್ಷಣಾ ಆದ್ಯಾದೇಶ 2020ರ ಕುರಿತ ಜಿಲ್ಲಾ ಮಟ್ಟದ ಸಮಿತಿ ಸಭೆ ಸಂಜಯ ಶೆಟ್ಟೆಣ್ಣವರ ಅಧ್ಯಕ್ಷತೆಯಲ್ಲಿ ನಡೆಯಿತು   

ಹಾವೇರಿ: ‘ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಆದ್ಯಾದೇಶ ಕುರಿತಂತೆ ಅಧಿಕಾರಿಗಳು ಸಂಪೂರ್ಣ ಮಾಹಿತಿ ಹೊಂದಬೇಕು. ಪ್ರಾಣಿ ಹಿಂಸೆ, ಸಾಗಾಟ ಕುರಿತಂತೆ ನಿಯಮಾವಳಿಗಳ ಅನುಸಾರ ಕ್ರಮ ತೆಗೆದುಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಪ್ರಾಣಿ ದಯಾಸಂಘ ಹಾಗೂ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧ ಮತ್ತು ಸಂರಕ್ಷಣಾ ಆದ್ಯಾದೇಶ 2020ರ ಕುರಿತ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಗೋಶಾಲೆ, ಗೋಕಟ್ಟೆಗಳನ್ನು ನಿರ್ಮಿಸಲು ಕ್ರಮವಹಿಸಬೇಕು. ಪ್ರತಿ ತಾಲ್ಲೂಕಿನಲ್ಲಿ ಗೋಶಾಲೆಗಳಿಗಾಗಿ ಕನಿಷ್ಠ ಎರಡು ಎಕರೆ ಜಮೀನು ಗುರುತಿಸಿ ಪ್ರಸ್ತಾವ ಸಲ್ಲಿಸುವಂತೆ ತಹಶೀಲ್ದಾರ್‌ಗಳಿಗೆ ಸೂಚನೆ ನೀಡಿದರು.

ADVERTISEMENT

ಸಹಾಯಧನಕ್ಕೆ ಪ್ರಸ್ತಾವ ಸಲ್ಲಿಸಿ

ಜಿಲ್ಲೆಯಲ್ಲಿರುವ ಖಾಸಗಿ ಗೋಶಾಲೆಗಳು, ಪಿಂಜರಾಪೋಲ್ ಹಾಗೂ ಇತರ ಗೋಶಾಲೆಗಳು, ಸಹಾಯಧನ ಮಂಜೂರಾತಿಗಾಗಿ ಸಲ್ಲಿಕೆಯಾಗಿರುವ ಅರ್ಜಿಗಳ ಕ್ರಮಬದ್ಧತೆ ಕುರಿತಂತೆ ಪರಿಶೀಲನೆ ನಡೆಸಿ ನಿಯಮಾನುಸಾರ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳಿಗೆ ಸಹಾಯಧನ ನೀಡಲು ಸರ್ಕಾರಕ್ಕೆ ಪ್ರಸ್ತಾವ ಕಳುಹಿಸಿಕೊಂಡುವಂತೆ ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ.ರಾಜೀವ ಕೂಲೇರ ಅವರಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಪಶು ಸಂಗೋಪನೆ ಇಲಾಖೆಯ ಉಪನಿರ್ದೇಶಕ ಡಾ.ರಾಜೀವ ಕೂಲೇರ ಅವರು ಪ್ರಾಣಿ ಕಲ್ಯಾಣ, ಪ್ರಾಣಿ ಹಿಂಸೆ, ಪ್ರಾಣಿ ವಧೆ ಹಾಗೂ ಪ್ರಾಣಿಗಳ ಸಾಗಾಣಿಕೆಗಾಗಿ ಜಾರಿಯಲ್ಲಿರುವ ಹಳೆಯ ಮತ್ತು ಹೊಸ ಕಾನೂನುಗಳ ಕುರಿತಂತೆ ಸಭೆಗೆ ಮಾಹಿತಿ ನೀಡಿದರು.

15 ಕಿ.ಮೀ.ವರೆಗೆ ಪರವಾನಗಿ ಬೇಕಿಲ್ಲ:

ಸ್ಥಳೀಯವಾಗಿ 15 ಕಿಲೋಮೀಟರ್ ದೂರದವರೆಗೆ ಪರವಾನಗಿ ಇಲ್ಲದೆ ಎರಡು ಹಸು ಮತ್ತು ಎರಡು ಕರುಗಳನ್ನು ಮಾತ್ರ ಕೊಂಡೊಯ್ಯಬಹುದು. ರಾತ್ರಿ ವೇಳೆ ಗೋವುಗಳ ಸಾಗಣೆಗೆ ಸಂಪೂರ್ಣ ನಿಷೇಧವಿದೆ. ರಾತ್ರಿ 8ರಿಂದ ಬೆಳಿಗ್ಗೆ 6ರವರೆಗೆ ಗೋವುಗಳ ಸಾಗಣೆಗೆ ಅವಕಾಶವಿಲ್ಲ. ಬೇಸಿಗೆಯ ಕಾಲದಲ್ಲಿ ಮಾರ್ಚ್‌ನಿಂದ ಮೇ ತಿಂಗಳವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3ರ ಅವಧಿಯಲ್ಲೂ ಗೋವುಗಳ ಸಾಗಣೆಗೆ ನಿಷೇಧಿಸಲಾಗಿದೆ ಎಂದು ವಿವರಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೊಹಮ್ಮದ್‌ ರೋಶನ್, ಜಿಲ್ಲಾ ಪ್ರಾಣಿ ದಯಾ ಸಂಘದ ಸರ್ಕಾರೇತರ ಸದಸ್ಯರಾದ ನಿಜಲಿಂಗಪ್ಪ ಬಸಗೇಣ್ಣಿ, ಪರಿಮಳಾ ಜೈನ್, ಶಾಂತಪ್ಪ ಅಟವಳಿಗಿ, ರವಿ ಹಿಂಚಗೇರಿ ಮತ್ತು ಬಸವೇಶ್ವರ ಗೋಶಾಲೆಯ ಕಾರ್ಯದರ್ಶಿಗಳು, ಪೌರಾಯುಕ್ತ ಚಲವಾದಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಂಬಾಬಾ ಮುದ್ದೇಬಿಹಾಳ, ಜಿಲ್ಲಾ ಪಶು ಆಸ್ಪತ್ರೆ ಶಸ್ತ್ರಚಿಕಿತ್ಸಕ ಡಾ.ಸಣ್ಣಕ್ಕಿ ಹಾಗೂ ಜಿಲ್ಲೆಯ ಪಶು ವೈದ್ಯಾಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.