ರಾಣೆಬೆನ್ನೂರು: ‘ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಹಳೇ ಪಿಂಚಣಿ ಯೋಜನೆ ಜಾರಿಗೆ ಮಾಡಲು ರಾಜ್ಯ ಸರ್ಕಾರ ಸಿದ್ದವಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಈ ಜವಾಬ್ದಾರಿ ತೆಗೆದುಕೊಂಡಿದ್ದು, ಈಗಾಗಲೇ ಸಂಬಂಧಿಸಿದ ಇಲಾಖೆಗಳ ಜೊತೆಗೆ ಚರ್ಚೆ ನಡೆಸಿದ್ದಾರೆ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.
ಇಲ್ಲಿನ ಮೃತ್ಯುಂಯನಗರದ ಮೃತ್ಯುಂಜಯ ಸಮುದಾಯ ಭವನದಲ್ಲಿ ಭಾನುವಾರ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಏರ್ಪಡಿಸಿದ್ದ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ ಮತ್ತು ಪ್ರತಿಭಾ ವಿದ್ಯಾರ್ಥಿ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
‘ಮೂವತ್ತು ವಿದ್ಯಾರ್ಥಿಗಳಿಗೆ ಒಬ್ಬ ಶಿಕ್ಷಕರನ್ನು ನೇಮಿಸಲು ಕ್ರಮಕೈಗೊಳ್ಳಲಾಗುವುದು. ಶಿಕ್ಷಕರ ಕೊರತೆ ನೀಗಿಸಲು ಈಗಾಗಲೇ 13,500 ಶಿಕ್ಷಕರ ನೇಮಕಾತಿಗೆ ಆದೇಶ ನೀಡಲಾಗಿದೆ. ಇನ್ನೂ 50,000 ಶಿಕ್ಷಕರ ಹುದ್ದೆಗಳು ಖಾಲಿ ಇರಲಿದ್ದು, ಹಂತ–ಹಂತವಾಗಿ ನೇಕಮಾತಿಗೆ ಕ್ರಮ ವಹಿಸಲಾಗುತ್ತದೆ. ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತಿದೆ’ ಎಂದು ತಿಳಿಸಿದರು.
‘ಅನುದಾನಿತ ಶಾಲಾ ಶಿಕ್ಷಕರಿಗೆ ಅಗತ್ಯ ಸೌಕರ್ಯ, ಅಲ್ಲಿನ ಮಕ್ಕಳಿಗೂ ಸಮವಸ್ತ್ರ, ಶೂ–ಸಾಕ್ಸ್ ನೀಡುವ ಬಗ್ಗೆ ಆರ್ಥಿಕ ಇಲಾಖೆ ಜೊತೆಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ನೋಟ್ ಪುಸ್ತಕ ನೀಡಲು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಲಾಗವುದು. ಸರ್ಕಾರಿ ಶಾಲೆಯಲ್ಲಿ ಸಿಗುವ ಎಲ್ಲ ಸೌಲಭ್ಯಗಳು ಅನುದಾನಿತ ಶಾಲೆಗಳಲ್ಲೂ ಸಿಗಲು ಶ್ರಮಿಸಲಾಗುವುದು’ ಎಂದರು.
ವಿಧಾನ ಪರಿಷತ್ ಉಪಸಭಾಪತಿ ರುದ್ರಪ್ಪ ಲಮಾಣಿ ಮಾತನಾಡಿ, ‘ನಮ್ಮ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲೂ ಅನೇಕ ಹುದ್ದೆಗಳು ಖಾಲಿ ಇವೆ. ಅನೇಕ ವರ್ಷಗಳಿಂದ ಸಮಸ್ಯೆಗಳು ಹಾಗೇ ಉಳಿದಿವೆ’ ಎಂದರು.
ಸಂಗದ ರಾಜ್ಯ ಘಟಕದ ಅಧ್ಯಕ್ಷ ಎನ್. ರಾಜಗೋಪಾಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನಿರ್ದೇಶಕ ಮೋಹನ ಎನ್. ದಂಡಿನ, ಡಯಟ್ ಪ್ರಾಚಾರ್ಯ ಝಡ್.ಎಂ. ಖಾಜಿ, ಟಿ. ರವಿಕುಮಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶಾಮಸುಂದರ ಅಡಿಗ, ಎನ್. ಶ್ರೀಧರ, ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ನಾಗರಾಜ ನಲವಾಗಲ, ಮಾಲತೇಶ ಎಂ., ಜ್ಯೋತಿ ಕೆ.ಎಸ್ ಇದ್ದರು.
‘ಶಿಕ್ಷಕರ ನೇಮಕಾತಿಗೆ ಅವಕಾಶ ಕಲ್ಪಿಸಬೇಕು. ಕಾಲ್ಪನಿಕ ವೇತನ ಜಾರಿಗೊಳಿಸಬೇಕು. ಅನುದಾನಿತ ಶಿಕ್ಷಣ ಸಂಸ್ಥೆಗಳ ಪ್ರಾಥಮಿಕ ಶಾಲಾ ಶಿಕ್ಷಕರಿಗೂ ಜ್ಯೋತಿ ಸಂಜೀವಿನಿ ಯೋಜನೆ ಜಾರಿಗೊಳಿಸಬೇಕು. ಮಾನ್ಯತೆ ನವೀಕರಣ ಸರಳಗೊಳಿಸಬೇಕು. ಅನುದಾನಿತ ಪ್ರಾಥಮಿಕ ಶಾಲೆಗಳಲ್ಲಿರುವ ಹೆಚ್ಚುವರಿ ಶಿಕ್ಷಕರನ್ನು ಗುರುತಿಸಿ ಕೌನ್ಸೆಲಿಂಗ್ ಮೂಲಕ ಶಿಕ್ಷಕರಿಲ್ಲದ ಶಾಲೆಗಳಿಗೆ ವರ್ಗಾವಣೆ ಮಾಡಬೇಕು’ ಎಂದು ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳುಸಚಿವ ಮಧು ಬಂಗಾರಪ್ಪ ಹಾಗೂ ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರಿಗೆ ಮನವಿ ಸಲ್ಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.