ADVERTISEMENT

ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್‌: ರೋಗಿಗಳ ಪರದಾಟ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2020, 16:26 IST
Last Updated 11 ಡಿಸೆಂಬರ್ 2020, 16:26 IST
ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್‌ ಆಗಿದ್ದ ಕಾರಣ ಹಾವೇರಿ ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ರೋಗಿಗಳು ಚಿಕಿತ್ಸೆಗಾಗಿ ಕಾದು ಕುಳಿತಿದ್ದ ದೃಶ್ಯ
ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್‌ ಆಗಿದ್ದ ಕಾರಣ ಹಾವೇರಿ ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ರೋಗಿಗಳು ಚಿಕಿತ್ಸೆಗಾಗಿ ಕಾದು ಕುಳಿತಿದ್ದ ದೃಶ್ಯ   

ಹಾವೇರಿ: ಕೇಂದ್ರ ಸರ್ಕಾರವು ಆಯುರ್ವೇದ ವೈದ್ಯರಿಗೆ ಕೆಲವು ಶಸ್ತ್ರಚಿಕಿತ್ಸೆ ನಡೆಸಲು ಅವಕಾಶ ನೀಡಿರುವುದನ್ನು ವಿರೋಧಿಸಿ, ಜಿಲ್ಲೆಯ ಖಾಸಗಿ ಆಸ್ಪತ್ರೆಗಳ ವೈದ್ಯರು ಒಪಿಡಿ ಬಂದ್‌ ಮಾಡಿ ಸಾಂಕೇತಿಕ ಪ್ರತಿಭಟನೆ ನಡೆಸಿದರು.

ಗ್ರಾಮೀಣ ಪ್ರದೇಶಗಳಿಂದ ಬೆಳ್ಳಂಬೆಳಿಗ್ಗೆಯೇ ನಗರದ ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸೆ ಪಡೆಯಲು ಬಂದಿದ್ದ ಜನರು, ಒಪಿಡಿ ಬಂದ್‌ ಆಗಿದ್ದ ಕಾರಣ ಪರದಾಡಿದರು. ಕೆಲವು ಖಾಸಗಿ ಆಸ್ಪತ್ರೆಗಳ ಮುಂದೆ ‘ಒಪಿಡಿ ಬಂದ್‌’ ಎಂಬ ನಾಮಫಲಕ ಹಾಕಲಾಗಿತ್ತು.ಒಳರೋಗಿಗಳಿಗೆ ಮಾತ್ರ ಚಿಕಿತ್ಸೆ ನೀಡುತ್ತೇವೆ ಎಂದು ಖಾಸಗಿ ಆಸ್ಪತ್ರೆಯ ಸಿಬ್ಬಂದಿ ಜನರನ್ನು ಹೊರಕಳಿಸಿದರು.

ಖಾಸಗಿ ಆಸ್ಪತ್ರೆಗಳಿಂದ ಜಿಲ್ಲಾಸ್ಪತ್ರೆಯತ್ತ ರೋಗಿಗಳು ಆಟೊ, ಬೈಕ್‌ಗಳಲ್ಲಿ ತೆರಳುತ್ತಿದ್ದ ದೃಶ್ಯ ಕಂಡು ಬಂದಿತು. ಸಹಜವಾಗಿಯೇ ಜಿಲ್ಲಾಸ್ಪತ್ರೆ ಆವರಣದಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗಿತ್ತು.

ADVERTISEMENT

‘ಖಾಸಗಿ ವೈದ್ಯರ ಮುಷ್ಕರದ ಮಾಹಿತಿ ಇದ್ದ ಕಾರಣ, ಸರ್ಕಾರಿ ಆಸ್ಪತ್ರೆ ನೌಕರರ ಎಲ್ಲ ರಜೆಗಳನ್ನು ರದ್ದುಗೊಳಿಸಿ, ಪ್ರತಿಯೊಬ್ಬರೂ ಕರ್ತವ್ಯಕ್ಕೆ ಗೈರು ಹಾಜರಾಗಿ, ಉತ್ತಮ ವೈದ್ಯಕೀಯ ಸೇವೆ ನೀಡಬೇಕು’ ಎಂದು ಸೂಚನೆ ನೀಡಿದ್ದವು. ಹೀಗಾಗಿ ಜಿಲ್ಲೆಯಾದ್ಯಂತ ತಾಲ್ಲೂಕು ಆಸ್ಪತ್ರೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಿದ್ದೇವೆ. ಎಲ್ಲೂ ಅಹಿತಕರ ಘಟನೆ ನಡೆದಿಲ್ಲ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಜೇಂದ್ರ ದೊಡ್ಡಮನಿ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.