
ಬ್ಯಾಡಗಿ: ತಾಲ್ಲೂಕಿನಾದ್ಯಂತ ಪೋಲಿಯೊ ಲಸಿಕಾ ಅಭಿಯಾನ ಡಿ.21ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ ಎಂದು ತಾಲ್ಲೂಕಾ ಆರೋಗ್ಯಾಧಿಕಾರಿ ಡಾ.ಕಾಂತೇಶ ಭಜಂತ್ರಿ ತಿಳಿಸಿದರು.
ಪಟ್ಟಣದಲ್ಲಿ ಶುಕ್ರವಾರ ‘ಪ್ರಜಾವಾಣಿ‘ಯೊಂದಿಗೆ ಮಾತನಾಡಿದ ಅವರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕಾ ಆರೋಗ್ಯಾಧಿಕಾರಿಗಳ ಕಾರ್ಯಾಲಯ, ರೋಟರಿ ಮತ್ತು ಇನ್ನರ್‌ವೀಲ್ ಕ್ಲಬ್‌ಗಳ ಸಂಯುಕ್ತ ಆಶ್ರಯದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಶಾಸಕ ಬಸವರಾಜ ಶಿವಣ್ಣನವರ ಭಾನುವಾರ ಬೆಳಿಗ್ಗೆ 9 ಗಂಟೆಗೆ ಚಾಲನೆ ನೀಡುವರು ಎಂದು ತಿಳಿಸಿದರು.
ಪಟ್ಟಣದಲ್ಲಿ 3,401 ಮತ್ತು ಗ್ರಾಮೀಣ ಪ್ರದೇಶದಲ್ಲಿ 8,354 ಸೇರಿದಂತೆ ಒಟ್ಟಾರೆ ತಾಲ್ಲೂಕಿನಲ್ಲಿ 11,755 ಐದು ವರ್ಷದೊಳಗಿನ ಮಕ್ಕಳಿದ್ದಾರೆ. ಈಗಾಗಲೆ ಲಸಿಕೆ ಸಂಗ್ರಹವಿದ್ದು, ರೈಲ್ವೆ ನಿಲ್ದಾಣ ಮತ್ತು ಬಸ್ ನಿಲ್ದಾಣ ಸೇರಿದಂತೆ ಒಟ್ಟು83 ಲಸಿಕಾ ಕೇಂದ್ರಗಳನ್ನು ತೆರೆಯಲಾಗುವುದು. ಪ್ರತಿ ಬೂತ್‌ಗೆ ನಾಲ್ಕು ಜನ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
ಡಿ.22 ರಿಂದ ಡಿ.24ರವರೆಗೆ ಮನೆ ಮನೆಗೆ ತೆರಳಿ ಉಳಿದಂತಹ ಮಕ್ಕಳನ್ನು ಗುರುತಿಸಿ ಲಸಿಕೆ ನೀಡಲಾಗುವುದು. ಪ್ರತಿಶತ ಲಸಿಕಾ ಕಾರ್ಯಕ್ರಮ ನಡೆಯಲಿದೆ. ಕಾರಣ ಸಾರ್ವಜನಿಕರು ತಮ್ಮ ಮಕ್ಕಳನ್ನು ಬೂತ್‌ಗಳಿಗೆ ಕರೆ ತಂದು ಪೋಲಿಯೊ ಮುಕ್ತಗೊಳಿಸಲು ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿಕೊಂಡರು.
ತಾಲ್ಲೂಕು ಆಡಳಿತ ವೈದ್ಯಾಧಿಕಾರಿ ಡಾ.ರಾಘವೇಂದ್ರಸ್ವಾಮಿ ಹಾಗೂ ಇನ್ನಿತರ ವೈದ್ಯರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.