ADVERTISEMENT

ಪಾರದರ್ಶಕ ಚುನಾವಣೆಗೆ ಜಿಲ್ಲಾಡಳಿತ ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2020, 16:12 IST
Last Updated 1 ಅಕ್ಟೋಬರ್ 2020, 16:12 IST
ಸಂಜಯ ಶೆಟ್ಟೆಣ್ಣವರ, ಜಿಲ್ಲಾಧಿಕಾರಿ
ಸಂಜಯ ಶೆಟ್ಟೆಣ್ಣವರ, ಜಿಲ್ಲಾಧಿಕಾರಿ   

ಹಾವೇರಿ: ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್‍ಗೆ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಗುರುವಾರದಿಂದಚುನಾವಣಾ ಅಧಿಸೂಚನೆ ಜಾರಿಗೊಂಡಿದೆ. ನಾಮಪತ್ರ ಸಲ್ಲಿಕೆ ಆರಂಭಗೊಳ್ಳಲಿದೆ. ಜಿಲ್ಲೆಯಾದ್ಯಂತ ಪಾರದರ್ಶಕ ಚುನಾವಣೆಗೆ ಜಿಲ್ಲಾಡಳಿತ ಎಲ್ಲ ಸಿದ್ಧತೆಯನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ತಿಳಿಸಿದರು.

ಗುರುವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲು ಸ್ಥಳ ನಿಗದಿಪಡಿಸಲಾಗಿದೆ. ಧಾರವಾಡದಲ್ಲೇ ಮತ ಎಣಿಕೆ ಕಾರ್ಯ ಜರುಗಲಿದೆ ಎಂದು ತಿಳಿಸಿದರು.

ನಾಮಪತ್ರ ಸಲ್ಲಿಕೆಗೆ ಅ.8 ಕೊನೆಯ ದಿನ, ಅ.9ರಂದು ನಾಮಪತ್ರಗಳ ಪರಿಶೀಲನೆ , ಅ.12ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ. ಅ.28ರಂದು ಮತದಾನ ನಡೆಯಲಿದ್ದು, ನ.2ರಂದು ಮತ ಎಣಿಕೆ ಕಾರ್ಯ ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯಲಿದೆ.

ADVERTISEMENT

37 ಮತಗಟ್ಟೆಗಳನ್ನು ಗುರುತಿಸಲಾಗಿದೆ. ಮತಗಟ್ಟೆ ಅಧಿಕಾರಿ, ಸಹಾಯಕ ಮತಗಟ್ಟೆ ಅಧಿಕಾರಿ ಹಾಗೂ ಸಿಬ್ಬಂದಿ ಸೇರಿದಂತೆ 209 ನೌಕರರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಜಿಲ್ಲೆಯಲ್ಲಿ 16,052 ಪುರುಷ, 7218 ಮಹಿಳಾ ಹಾಗೂ ನಾಲ್ಕು ಇತರೆ ಮತದಾರರು ಸೇರಿ 23,274 ಮತದಾರರಿದ್ದಾರೆ. ಈ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದೆ. ನೀತಿ ಸಂಹಿತೆ ತಂಡಗಳನ್ನು ರಚಿಸಿ ನಿಗಾ ವಹಿಸಲಾಗಿದೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ 08375-249102 ಕಂಟ್ರೋಲ್ ರೂಂ ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ ಅವರು ಮಾಹಿತಿ ನೀಡಿ, ಚುನಾವಣಾ ಅಕ್ರಮಗಳ ತಡೆಗೆ ಸೂಕ್ತ ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಮತಗಟ್ಟೆಗಳಿಗೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುತ್ತಿದೆ. ಚೆಕ್‍ಪೋಸ್ಟ್ ವ್ಯವಸ್ಥೆ ಇರುವುದಿಲ್ಲ ಎಂದು ವಿವರಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ರಮೇಶ ದೇಸಾಯಿ, ಹೆಚ್ಚುವರಿ ಜಿಲ್ಲಾಧಿಕಾರಿ ಯೋಗೇಶ್ವರ, ಚುನಾವಣಾ ತಹಶೀಲ್ದಾರ್‌ ಪ್ರಶಾಂತ ನಾಲವಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.