ADVERTISEMENT

ಹಾವೇರಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹನುಮಂತರಾಯ

ನೂತನ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ ಹನುಮಂತರಾಯ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 10 ಜೂನ್ 2021, 15:11 IST
Last Updated 10 ಜೂನ್ 2021, 15:11 IST
ಹಾವೇರಿ ಜಿಲ್ಲೆ ನೂತನ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ ಹನುಮಂತರಾಯ ಅವರನ್ನು ಎಎಸ್ಪಿ ವಿಜಯಕುಮಾರ ಸಂತೋಷ ಅವರು ಗುರುವಾರ ಹೂಗುಚ್ಛ ನೀಡಿ ಸ್ವಾಗತಿಸಿದರು 
ಹಾವೇರಿ ಜಿಲ್ಲೆ ನೂತನ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ ಹನುಮಂತರಾಯ ಅವರನ್ನು ಎಎಸ್ಪಿ ವಿಜಯಕುಮಾರ ಸಂತೋಷ ಅವರು ಗುರುವಾರ ಹೂಗುಚ್ಛ ನೀಡಿ ಸ್ವಾಗತಿಸಿದರು    

ಹಾವೇರಿ: ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹನುಮಂತರಾಯ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.

ಬೆಂಗಳೂರು ಸಿಐಡಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಂಡಿರುವ ನಿರ್ಗಮಿತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜು ಅವರು ಅಧಿಕಾರ ಹಸ್ತಾಂತರಿಸಿ, ಹೂಗುಚ್ಛ ನೀಡಿ ನೂತನ ಎಸ್.ಪಿ. ಅವರನ್ನು ಸ್ವಾಗತಿಸಿದರು.

‘ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತದೊಂದಿಗೆ ಪೊಲೀಸ್ ಇಲಾಖೆ ತಂಡವಾಗಿ ಕೆಲಸ ಮಾಡಲಿದೆ. ‘ಜನಸ್ನೇಹಿ ಪೊಲೀಸ್ ಸೇವೆ’ಗೆ ಆದ್ಯತೆ ನೀಡಲಾಗುವುದು. ಗ್ರಾಮೀಣ ಮತ್ತು ನಗರದ ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಲಾಗುವುದು. ಈ ನಿಟ್ಟಿನಲ್ಲಿ ‘ತುರ್ತು ಸ್ಪಂದನ ಸಹಾಯ ವ್ಯವಸ್ಥೆ’ (ಇ.ಆರ್.ಎಸ್.ಎಸ್) ಸೇವೆಯನ್ನು ಬಲಪಡಿಸಲಾಗುವುದು’ ಎಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಹನುಮಂತರಾಯ ಹೇಳಿದರು.

ADVERTISEMENT

‘ಪೊಲೀಸ್ ಇಲಾಖೆಯಲ್ಲಿ ಹೆಚ್ಚಿನ ತಂತ್ರಜ್ಞಾನ, ತಂತ್ರಾಂಶಗಳ ಮೂಲಕ ತನಿಖಾ ಕೆಲಸ ಸೇರಿದಂತೆ ಪೊಲೀಸ್ ಸೇವೆಯನ್ನು ಉನ್ನತೀಕರಿಸಲಾಗುವುದು. ಅಪರಾಧ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿಗೊಳಿಸಿ, ನ್ಯಾಯಾಲಯಕ್ಕೆ ವರದಿ ಸಲ್ಲಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು’ ಎಂದು ತಿಳಿಸಿದರು.

ಅಪರಾಧ ಪ್ರಕರಣಗಳು, ಸರಗಳ್ಳತನ ನಿಯಂತ್ರಣ ಕುರಿತಂತೆ ಅಧಿಕಾರಿಗಳ ಸಭೆ ಕರೆದು ಪರಿಶೀಲನೆ ನಡೆಸಲಾಗುವುದು. ಸ್ಥಳೀಯ ಆಡಳಿತದ ಸಹಕಾರದೊಂದಿಗೆ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಹಾಗೂ ಖಾಸಗಿ ಮನೆ, ಶಾಪಿಂಗ್ ಮಾಲ್, ಅಪಾರ್ಟ್‍ಮೆಂಟ್‍ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆಗೆ ಮನವೊಲಿಸಿ ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.

ರಾಷ್ಟ್ರೀಯ ಹೆದ್ದಾರಿಗಳ ಟೋಲ್‍ಗೇಟ್‍ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿ ಅಪರಾಧ ಚಟುವಟಿಕೆಗಳ ಬಗ್ಗೆ ಹೆಚ್ಚಿನ ನಿಗಾವಹಿಸಲಾಗುವುದು ಎಂದು ತಿಳಿಸಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯಕುಮಾರ ಸಂತೋಷ್ ಅವರು ನೂತನ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಶುಭ ಕೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.