ADVERTISEMENT

ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಕ್ರಮವಹಿಸಿ

ಶಾಲೆಗಳಲ್ಲಿ ಸ್ವಚ್ಛತೆ ಕಾಪಾಡಿ: ಜಿ.ಪಂ. ಅಧ್ಯಕ್ಷ ಏಕನಾಥ ಬಾನುವಳ್ಳಿ ಸೂಚನೆ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2021, 17:14 IST
Last Updated 12 ಫೆಬ್ರುವರಿ 2021, 17:14 IST
ಹಾವೇರಿ ಜಿಲ್ಲಾ ಪಂಚಾಯಿತಿಯಲ್ಲಿ ಶುಕ್ರವಾರ ನಡೆದ ಕೆಡಿಪಿ ಸಭೆಯಲ್ಲಿ ಅಧ್ಯಕ್ಷ ಏಕನಾಥ ಬಾನುವಳ್ಳಿ ಮಾತನಾಡಿದರು. ಸಿಇಒ ಮೊಹಮ್ಮದ್‌ ರೋಶನ್‌ ಇದ್ದಾರೆ 
ಹಾವೇರಿ ಜಿಲ್ಲಾ ಪಂಚಾಯಿತಿಯಲ್ಲಿ ಶುಕ್ರವಾರ ನಡೆದ ಕೆಡಿಪಿ ಸಭೆಯಲ್ಲಿ ಅಧ್ಯಕ್ಷ ಏಕನಾಥ ಬಾನುವಳ್ಳಿ ಮಾತನಾಡಿದರು. ಸಿಇಒ ಮೊಹಮ್ಮದ್‌ ರೋಶನ್‌ ಇದ್ದಾರೆ    

ಹಾವೇರಿ: ‘ವಿದ್ಯಾರ್ಥಿಗಳ ಕಲಿಕೆ, ಪರೀಕ್ಷಾ ತಯಾರಿಗೆ ಆದ್ಯತೆ ನೀಡಬೇಕು. ಕೋವಿಡ್ ಹಿನ್ನೆಲೆಯಲ್ಲಿ ಶಾಲಾ ಸ್ವಚ್ಛತೆಗೆ ಗಮನಹರಿಸಬೇಕು’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಜಿ.ಪಂ. ಅಧ್ಯಕ್ಷ ಏಕನಾಥ ಬಾನುವಳ್ಳಿ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿಸಭಾಂಗಣದಲ್ಲಿ ಶುಕ್ರವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಹಳ ಶಾಲೆಗಳಲ್ಲಿ ಸ್ವಚ್ಛತಾ ನಿರ್ವಹಣೆ ಬಗ್ಗೆ ದೂರುಗಳು ಕೇಳಿಬರುತ್ತಿವೆ. ನಿರ್ವಹಣಾ ವೆಚ್ಚವಿದ್ದರೂ ಸ್ವಚ್ಛತೆ ಬಗ್ಗೆ ಏಕೆ ಗಮನಹರಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಉಳಿದ ಶೈಕ್ಷಣಿಕ ಅವಧಿಯಲ್ಲಿ ಮಕ್ಕಳನ್ನು ಪರೀಕ್ಷೆಗೆ ಸಿದ್ಧಪಡಿಸುವುದು ಸವಾಲಿನ ಕೆಲಸ. ಈ ನಿಟ್ಟಿನಲ್ಲಿ ರಜೆ ರಹಿತವಾಗಿ ಶಿಕ್ಷಕರು ಪಾಠ ಮಾಡಬೇಕು. ಪರೀಕ್ಷೆ ಎದುರಿಸುವ ಕುರಿತಂತೆ ಮಕ್ಕಳಿಗೆ ಪರಿಣಾಮಕಾರಿಯಾದ ಬೋಧನೆ ಮೂಲಕ ಎಸ್ಸೆಸ್ಸೆಲ್ಸಿ ಫಲಿತಾಂಶದ ಸುಧಾರಣೆಗೆ ಕ್ರಮವಹಿಸಿ ಎಂದು ಉಪನಿರ್ದೇಶಕರಿಗೆ ಸೂಚನೆ ನೀಡಿದರು.

ADVERTISEMENT

ಹೊರಗುಳಿದವರ ಸರ್ವೆ:ಶಾಲೆಯಿಂದ ಹೊರಗುಳಿದ ಮಕ್ಕಳ ಸರ್ವೆ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಎಲ್ಲ ಮಕ್ಕಳು ಶಾಲೆಗೆ ನೋಂದಾಯಿಸಿಕೊಂಡಿದ್ದಾರಾ ಎಂದು ಪರಿಶೀಲನೆ ನಡೆಸಿ, ಈ ಕುರಿತಂತೆ ತಂಡಗಳ ಕಾರ್ಯನಿರ್ವಹಣೆ ಕುರಿತು ಪರಿಶೀಲನೆ ನಡೆಸಿ ಎಂದು ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸಿಇಒ ಮೊಹಮ್ಮದ್‌ ರೋಶನ್‌ ಸೂಚನೆ ನೀಡಿದರು.

ಶಾಲಾ ಶೌಚಾಲಯ ಹೆಚ್ಚಳ:ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಶೌಚಾಲಯಗಳ ವ್ಯವಸ್ಥೆ ಮಾಡಬೇಕು.ಕೋವಿಡ್ ಹಿನ್ನೆಲೆಯಲ್ಲಿ ಶಾಲಾ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಶಾಲಾ ಸುಧಾರಣಾ ಸಮಿತಿ ಅನುದಾನದಲ್ಲಿ ಸೋಪು, ಸ್ಯಾನಿಟೈಸರ್ ಖರೀದಿಗೆ ಕ್ರಮವಹಿಸಬೇಕು.ಜಿಲ್ಲೆಯಲ್ಲಿ ಕೈಗೊಂಡಿರುವ ಅಂಗನವಾಡಿ ಕಟ್ಟಡಗಳು ಹಾಗೂ ಶಾಲಾ ಕೊಠಡಿಗಳ ನಿರ್ಮಾಣ ಕಾರ್ಯ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ಅಡುಗೆ ಕೋಣೆ:ಆರ್.ಐ.ಡಿ.ಎಫ್ 25 ಯೋಜನೆಯಡಿ ನರೇಗಾ ಸಹಯೋಗದಲ್ಲಿ ಜಿಲ್ಲೆಯಲ್ಲಿ ಕೈಗೊಂಡಿರುವ 55 ಮಧ್ಯಾಹ್ನ ಬಿಸಿಯೂಟ ಕೊಠಡಿ ನಿರ್ಮಾಣ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಗುಣಮಟ್ಟವನ್ನು ಕಾಪಾಡಿಕೊಳ್ಳುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಜಿ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಶಿವಾನಂದ ಹಾಗೂ ಶಿವರಾಜ, ಜಿಲ್ಲಾ ಮಟ್ಟದ ವಿವಿಧ ಇಲಾಖಾ ಅಧಿಕಾರಿಗಳು ಭಾಗವಹಿಸಿದ್ದರು. ಘನ ತ್ಯಾಜ್ಯ ನಿರ್ವಹಣೆ ಪ್ರಚಾರ ಪೋಸ್ಟರ್‌ಗಳನ್ನು ಸಭೆಯಲ್ಲಿ ಬಿಡುಗಡೆಗೊಳಿಸಲಾಯಿತು. ಜಿ.ಪಂ. ಮುಖ್ಯ ಯೋಜನಾಧಿಕಾರಿ ನಿರ್ಮಲಾ ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.