
ಹಾವೇರಿ: ‘ರೈಲ್ವೆ ಇಲಾಖೆ ನೇಮಕಾತಿ ಪ್ರವೇಶ ಪರೀಕ್ಷೆಗಳಲ್ಲಿ ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು’ ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಪದಾಧಿಕಾರಿಗಳು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ನಗರದ ಹುತಾತ್ಮ ಮೈಲಾರ ಮಹದೇವಪ್ಪ ವೃತ್ತದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಪದಾಧಿಕಾರಿಗಳು, ಬೇಡಿಕೆ ಈಡೇರಿಕೆಗಾಗಿ ಘೋಷಣೆ ಕೂಗಿದರು.
‘ಕೇಂದ್ರ ಸರ್ಕಾರ ಕನ್ನಡ ವಿರೋಧಿ ಧೋರಣೆ ಅನುಸರಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಭಾಷೆಗಳನ್ನು ಕಡೆಗಣಿಸಿ ಹಿಂದಿ ಹೇರಿಕೆ ಮಾಡುತ್ತಿದ್ದಾರೆ. ಇಂಗ್ಲೀಷ್ ಭಾಷೆಗೆ ಮನ್ನಣೆ ನೀಡಿ ನಮ್ಮ ಮಾತೃಭಾಷೆ ಕನ್ನಡ ಭಾಷೆಯನ್ನು ಕಡೆಗಣಿಸುತ್ತಿರುವುದು ಸರಿಯಲ್ಲ’ ಎಂದು ಆಕ್ರೋಶ ಹೊರಹಾಕಿದರು.
‘ಕೇಂದ್ರದಲ್ಲಿ ಅಧಿಕಾರ ನಡೆಸಿದ ಎಲ್ಲ ಸರ್ಕಾರಗಳು, ಕನ್ನಡ ಭಾಷೆಗೆ ಹಾಗೂ ಕನ್ನಡಿಗರಿಗೆ ಅಪಮಾನ ಮಾಡುವ ಮೂಲಕ ಕನ್ನಡ ಪರ ಸಂಘಟನೆಗಳನ್ನು ಕೆಣಕುವ ಕೆಲಸ ಮಾಡುತ್ತಿವೆ. ಕೇಂದ್ರ ಸರ್ಕಾರವು ರೈಲ್ವೆ ಇಲಾಖೆ ಸೇಡಿದಂತೆ ವಿವಿಧ ಇಲಾಖೆಗಳ ಮೂಲಕ ನಡೆಸುವ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡುತ್ತಿಲ್ಲ. ಇದರಿಂದಾಗಿ ಕರ್ನಾಟಕದ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಇದೇ ಪರೀಕ್ಷೆ ಮೂಲಕ ಆಯ್ಕೆಯಾಗಿ ರಾಜ್ಯದಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗೆ, ಕನ್ನಡ ಭಾಷೆಯೇ ಬರುತ್ತಿಲ್ಲ. ಅವರೆಲ್ಲ ಹಿಂದಿ ಹಾಗೂ ಇಂಗ್ಲಿಷ್‌ನಲ್ಲಿ ಮಾತನಾಡುತ್ತಿದ್ದು, ಇದರಿಂದ ಕನ್ನಡ ಭಾಷಿಗರು ತೊಂದರೆ ಅನುಭವಿಸುತ್ತಿದ್ದಾರೆ’ ಎಂದು ದೂರಿದರು.
‘ಕೇಂದ್ರದ ಸಚಿವರು ಹಾಗೂ ಸಂಸದರು, ಕನ್ನಡ ಭಾಷೆಗೆ ಅನ್ಯಾಯವಾಗುತ್ತಿದ್ದರೂ ಕಣ್ಣು ಬಾಯಿ ಮುಚ್ಚಿ ಕುಳಿತಿದ್ದಾರೆ. ಇನ್ನಾದರೂ ಎಚ್ಚೆತ್ತುಕೊಂಡು ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆಯಲು, ಕನ್ನಡಿಗರಿಗೆ ಅವಕಾಶ ನೀಡಬೇಕು’ ಎಂದು ಆಗ್ರಹಿಸಿದರು.
‘ಕನ್ನಡ ಭಾಷೆಗೆ ಸಾವಿರಾರು ವರ್ಷ ಇತಿಹಾಸವಿದೆ. ಕರ್ನಾಟಕದಲ್ಲಿ ಹಿಂದಿ ಭಾಷೆಗೆ ಯಾವುದೇ ಇತಿಹಾಸವಿಲ್ಲ. ಇದೀಗ ರೈಲ್ವೆ ನೇಮಕಾತಿ ಮಾಡುವ ಸಮಯದಲ್ಲಿ ಹಿಂದಿ–ಇಂಗ್ಲಿಷ್‌ಗೆ ಮಾತ್ರ ಸ್ಥಾನ ಸಿಗುತ್ತಿದೆ. ಮಾತೃಭಾಷೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡದೇ ಭಾಷಾ ತಾರತಮ್ಯ ಮಾಡಲಾಗುತ್ತಿದೆ. ಈ ಅನ್ಯಾಯವನ್ನು ಕೂಡಲೇ ಸರಿಪಡಿಸಬೇಕು. ಇಲ್ಲದಿದ್ದರೆ, ರಾಜ್ಯದಾದ್ಯಂತ ಗಂಭೀರ ಸ್ವರೂಪದ ಪ್ರತಿಭಟನೆ ನಡೆಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.
ಸಂಘಟನೆಯ ನಾಗರಾಜ ಮಡಿವಾಳರ, ರೂಪಾ ಬಂಗಿ, ಆನಂದ ಮುರಡಪ್ಪನವರ, ಪ್ರೇಮಲತಾ ಮುದ್ದಿ, ಪ್ರಕಾಶ ಗೋಣೆಮ್ಮನವರ, ಜ್ಯೋತಿ ಚಿಗಳ್ಳಿ, ಶಿವಾನಂದ ಚಾಕಲಬ್ಬಿ, ಶಂಬು ಕೇರಿ, ಗೌರಮ್ಮ, ಮುಸ್ತಾಕ್ ಮುಲ್ಲಾ, ಮಹಾದೇವಪ್ಪ ಅಳಲಗೇರಿ ಹಾಗೂ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.