ADVERTISEMENT

ರಟ್ಟೀಹಳ್ಳಿ | ಜನತೆಗೆ ಸೌಲಭ್ಯ ಒದಗಿಸಲು ಪ್ರಜಾಸೌಧ: ಕೃಷ್ಣ ಬೈರೇಗೌಡ

​ಪ್ರಜಾವಾಣಿ ವಾರ್ತೆ
Published 20 ಜನವರಿ 2026, 6:15 IST
Last Updated 20 ಜನವರಿ 2026, 6:15 IST
ರಟ್ಟೀಹಳ್ಳಿ ಪಟ್ಟಣದಲ್ಲಿ ನಿರ್ಮಿಸುತ್ತಿರುವ ಪ್ರಜಾಸೌಧ ಕಟ್ಟಡ ಕಾಮಗಾರಿಗೆ ಭೂಮಿಪೂಜೆಯನ್ನು ಸೋಮವಾರ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ನೆರವೇರಿಸಿದರು
ರಟ್ಟೀಹಳ್ಳಿ ಪಟ್ಟಣದಲ್ಲಿ ನಿರ್ಮಿಸುತ್ತಿರುವ ಪ್ರಜಾಸೌಧ ಕಟ್ಟಡ ಕಾಮಗಾರಿಗೆ ಭೂಮಿಪೂಜೆಯನ್ನು ಸೋಮವಾರ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ನೆರವೇರಿಸಿದರು   

ರಟ್ಟೀಹಳ್ಳಿ: ‘ಜನತೆಗೆ ಕನಿಷ್ಠ ಮೂಲ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ರಾಜ್ಯದ ಪ್ರತಿ ತಾಲ್ಲೂಕು ಕೇಂದ್ರಗಳಲ್ಲಿ ಪ್ರಜಾಸೌಧ ನಿರ್ಮಾಣ ಮಾಡಲಾಗುತ್ತಿದೆ’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಪಟ್ಟಣದಲ್ಲಿ ಸುಮಾರು ₹8.69 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಪ್ರಜಾಸೌಧ ಕಟ್ಟಡ ನಿರ್ಮಾಣ ಕಾಮಗಾರಿ ಭೂಮಿಪೂಜೆ, ಕಾರ್ಮಿಕಭವನ ಕಟ್ಟಡ ಉದ್ಘಾಟನೆ, ಅಗ್ನಿಶಾಮಕ ಠಾಣೆ ಉದ್ಘಾಟನೆ ಕಾರ್ಯಕ್ರಮವನ್ನು ಸೋಮವಾರ ನೆರವೇರಿಸಿ ಮಾತನಾಡಿದರು.

ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ಅನುಷ್ಠಾನ ಜೊತೆಗೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ಕ್ರಮ ವಹಿಸುತ್ತಿದೆ. ರಾಜ್ಯದಲ್ಲಿ ಹಿಂದಿನ ಸರ್ಕಾರದಿಂದ 4 ವರ್ಷದ ಅವಧಿಯಲ್ಲಿ ಕೇವಲ 14 ಪ್ರಜಾಸೌಧ ನಿರ್ಮಿಸಲಾಗಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಕಳೆದ 2.5 ವರ್ಷಗಳಲ್ಲಿ 49 ಆಡಳಿತ ಸೌಧ ನಿರ್ಮಿಸಿ ರಾಜ್ಯದ ಅಭಿವೃದ್ಧಿಗೆ ಸಾಕ್ಷಿಯಾಗಿದೆ ಎಂದು ತಿಳಿಸಿದರು.

ADVERTISEMENT

ಸಾರ್ವಜನಿಕರು ಕಂದಾಯ ಇಲಾಖೆಯಿಂದ ದಾಖಲೆ ಪಡೆಯುವ ಪ್ರಕ್ರಿಯೆಯನ್ನು ಮತ್ತಷ್ಟು ಸರಳೀಕರಣ ಗೊಳಿಸಲಾಗಿದೆ. ಮೃತರ ವಾರಸಾ ಬದಲಾವಣೆ, ಕೃಷಿ ಭೂಮಿಗೆ ಆಧಾರ ಜೋಡಣೆ, ಭೂದಾಖಲೆ ಡಿಜಿಟಲೀಕರಣ, ಕಂದಾಯ ಅಧಿಕಾರಿಗಳಿಗೆ ಲ್ಯಾಪ್‌ಟ್ಯಾಪ್ ವಿತರಣೆ ಸೇರಿದಂತೆ ವಿವಿಧ ಸೌಲಭ್ಯ ಒದಗಿಸಲಾಗುತ್ತಿದೆ’ ಎಂದರು.

ಅಧ್ಯಕ್ಷತೆ ವಹಿಸಿದ ಶಾಸಕ ಯು.ಬಿ.ಬಣಕಾರ ಮಾತನಾಡಿ, ‘ತಾಲ್ಲೂಕಿನ ಜನತೆಯ ಸುದೀರ್ಘ ಹೋರಾಟದ ಫಲವಾಗಿ ರಟ್ಟೀಹಳ್ಳಿ ತಾಲ್ಲೂಕು ಕೇಂದ್ರವಾಗಿದೆ. ಇದೀಗ ತಾಲ್ಲೂಕು ಆಡಳಿತ ಕಚೇರಿ ನಿರ್ಮಾಣಕ್ಕೆ ಸಚಿವ ಕೃಷ್ಣ ಬೈರೇಗೌಡ ಅವರು ₹8.69 ಕೋಟಿ ಅನುದಾನ ನೀಡಿದ್ದಾರೆ’ ಎಂದು ಹೇಳಿದರು.

ಮಾಜಿ ಶಾಸಕ ಬಿ.ಎಚ್. ಬನ್ನಿಕೋಡ, ವಿಧಾನಸಭೆ ಉಪಸಭಾಪತಿ ರುದ್ರಪ್ಪ ಲಮಾಣಿ, ಶಾಸಕರಾದ ಯಾಶೀರಖಾನ್ ಪಠಾಣ, ಶ‍್ರೀನಿವಾಸ ಮಾನೆ, ಮುಖಂಡ ಆನಂದಸ್ವಾಮಿ ಗಡ್ಡದೇವರಮಠ, ಪಟ್ಟಣ ಪಂಚಾಯಿತಿ ಅಧ್ಯಕ್ಷ ರವೀಂದ್ರ ಮುದಿಯಪ್ಪನವರ, ಉಪಾಧ್ಯಕ್ಷ ಶಿವಕುಮಾರ ಉಪ್ಪಾರ, ಗ್ಯಾರಂಟಿ ಸಮಿತಿ ಅಧ್ಯಕ್ಷ ನಾರಾಯಣಪ್ಪ ಗೌರಕ್ಕನವರ, ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ, ತಹಶೀಲ್ದಾರ್‌ ಶ‍್ವೇತಾ ಅಮರಾವತಿ ಸೇರಿದಂತೆ ಮುಂತಾದವರು ಇದ್ದರು. 

ರಟ್ಟೀಹಳ್ಳಿ ಪಟ್ಟಣದಲ್ಲಿ ಸೋಮವಾರ ರಾಜ್ಯ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು 8.69 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಪ್ರಜಾಸೌಧ ನಿರ್ಮಾಣ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಬಳಿಕ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿದರು.
2017ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಟ್ಟೀಹಳ್ಳಿ ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಿತ್ತು. ಇದೀಗ ಶಾಸಕ ಯು.ಬಿ. ಬಣಕಾರ ಅವರ ಬೇಡಿಕೆಯಂತೆ ತಾಲ್ಲೂಕು ಆಡಳಿತ ಕಚೇರಿ ನಿರ್ಮಿಸಲಾಗುತ್ತಿದೆ
ಕೃಷ್ಣ ಬೈರೇಗೌಡ ಕಂದಾಯ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.