ADVERTISEMENT

‘ಕಾಳಸಂತೆಯಲ್ಲಿ ಅಕ್ಕಿ; 27 ಮಂದಿ ವಿರುದ್ಧ ಪ್ರಕರಣ’

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಮಟ್ಟದ ಸಭೆ

​ಪ್ರಜಾವಾಣಿ ವಾರ್ತೆ
Published 10 ಜನವರಿ 2026, 3:10 IST
Last Updated 10 ಜನವರಿ 2026, 3:10 IST
ಹಾವೇರಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ‘ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆ’ ನಡೆಯಿತು
ಹಾವೇರಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ‘ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆ’ ನಡೆಯಿತು   

ಹಾವೇರಿ: ‘ಬಿಪಿಎಲ್ ಪಡಿತರ ಚೀಟಿದಾರರಿಗೆ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತಿದೆ. ಇಂಥ ಅಕ್ಕಿಯನ್ನು ಕೆಲವರು ಕಾಳಸಂತೆಯಲ್ಲಿ ಮಾರುತ್ತಿದ್ದಾರೆ. ಈ ಕೃತ್ಯ ಎಸಗಿ ಸಿಕ್ಕಿಬಿದ್ದಿರುವ 27 ಮಂದಿ ವಿರುದ್ಧ 15 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ’ ಎಂದು ಆಹಾರ ಇಲಾಖೆಯ ಉಪನಿರ್ದೇಶಕ ಮಂಜುನಾಥ ಹೇಳಿದರು.

ನಗರದ ಹೊರವಲಯದಲ್ಲಿರುವ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ‘ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾಹಿತಿ ನೀಡಿದರು.

ವಿಷಯ ಪ್ರಸ್ತಾಪಿಸಿದ್ದ ಪ್ರಾಧಿಕಾರದ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎಂ. ಹಿರೇಮಠ, ‘ಅನ್ನಭಾಗ್ಯ ಯೋಜನೆಯಡಿ ಜನರಿಗೆ ನೀಡುವ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಲಾಗುತ್ತಿದೆ. ಈ ಬಗ್ಗೆ ಏನು ಕ್ರಮ ಕೈಗೊಂಡಿದ್ದೀರಾ’ ಎಂದು ಪ್ರಶ್ನಿಸಿದರು.

ADVERTISEMENT

ಅದಕ್ಕೆ ಉತ್ತರಿಸಿದ ಮಂಜುನಾಥ್, ‘2025ರ ಏಪ್ರಿಲ್‌ನಿಂದ ಡಿಸೆಂಬರ್‌ವರೆಗೆ 15 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಜೊತೆಗೆ, ಕಾಳಸಂತೆಯಲ್ಲಿ ಅಕ್ಕಿ ಮಾರಾಟವನ್ನು ತಡೆಯಲು ಹೆಚ್ಚಿನ ನಿಗಾ ವಹಿಸಲಾಗಿದೆ’ ಎಂದರು.

‘ಅಕ್ಕಿಯನ್ನು ಸಂಗ್ರಹಿಸಿಡುವ ಗೋದಾಮುಗಳಲ್ಲಿ ಸಿ.ಸಿ.ಟಿ.ವಿ. ಕ್ಯಾಮೆರಾ ಅಳವಡಿಸಲಾಗಿದೆ. ಅಕ್ಕಿ ಸಾಗಿಸುವ ವಾಹನಗಳಿಗೆ ಜಿಪಿಎಸ್ ಅಳವಡಿಕೆ ಕಡ್ಡಾಯಗೊಳಿಸಲಾಗಿದೆ. ನ್ಯಾಯಬೆಲೆ ಅಂಗಡಿಗಳಿಗೆ ಅಕ್ಕಿ ಪೂರೈಸುವ ಪ್ರತಿ ವಾಹನಕ್ಕೂ ಜಿಪಿಎಸ್ ಅಳವಡಿಸಿದರೆ ಮಾತ್ರ ಟೆಂಡರ್‌ ನೀಡುವುದಾಗಿ ಹೇಳಿದ್ದೇವೆ’ ಎಂದು ಮಂಜುನಾಥ್ ಹೇಳಿದರು.

ಬಸ್‌ ನಿಲ್ದಾಣಗಳಲ್ಲಿ ಪರಿಶೀಲನೆ: ‘ಜಿಲ್ಲೆಯ ಎಲ್ಲ ಬಸ್‌ ನಿಲ್ದಾಣಗಳ ಶೌಚಾಲಯ ಸ್ವಚ್ಛತೆ, ಸಿ.ಸಿ.ಟಿ.ವಿ. ಕ್ಯಾಮೆರಾ ಅಳವಡಿಕೆ ಕುರಿತು ಕಳೆದ ಸಭೆಯಲ್ಲಿ ಚರ್ಚಿಸಲಾಗಿತ್ತು. ಅದರಂತೆ, ಬಹುತೇಕ ಬಸ್ ನಿಲ್ದಾಣಗಳಲ್ಲಿ ಸಿ.ಸಿ.ಟಿ.ವಿ. ಕ್ಯಾಮೆರಾ ಅಳವಡಿಸಿರುವ ಬಗ್ಗೆ ಮಾಹಿತಿ ನೀಡಿದ್ದೀರಾ. ಈ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವೆ’ ಎಂದು ಎಂ.ಎಂ. ಹಿರೇಮಠ ಅವರು ಅಧಿಕಾರಿಗಳಿಗೆ ಹೇಳಿದರು.

‘ಹೋಬಳಿ ಮಟ್ಟದ ಬಸ್‌ ನಿಲ್ದಾಣಗಳಲ್ಲಿ ಶೌಚಾಲಯ ಸ್ವಚ್ಛಗೊಳಿಸಲು ತಿಂಗಳಿಗೆ ಕೇವಲ ₹2,500 ವೇತನ ನೀಡುತ್ತಿದ್ದೀರಾ. ಇದು ಕಡಿಮೆ ವೇತನ. ಇಷ್ಟು ಕಡಿಮೆ ಸಂಬಳದಲ್ಲಿ ಯಾರು ಕೆಲಸ ಮಾಡುತ್ತಾರೆ. ಅದನ್ನು ಪರಿಶೀಲಿಸಿ ವೇತನ ಹೆಚ್ಚಿಸಬೇಕು. ಜಿಲ್ಲೆಯ ಯಾವೆಲ್ಲ ಭಾಗಕ್ಕೆ ಬಸ್‌ ಅವಶ್ಯಕತೆ ಇದೆಯೋ ಅಂಥ ಊರುಗಳ ಪಟ್ಟಿ ಕೊಡುತ್ತೇವೆ. ಅಲ್ಲೆಲ್ಲ ಬಸ್‌ ಸಂಚರಿಸುವಂತೆ ನೋಡಿಕೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

‘ಗ್ರಾಮೀಣ ಭಾಗಗಳಲ್ಲಿ ವಿದ್ಯುತ್ ದೀಪಗಳನ್ನು ಹಗಲು ಹೊತ್ತಿನಲ್ಲಿ ಆಫ್ ಮಾಡುತ್ತಿಲ್ಲ. ಇದರಿಂದ ವಿದ್ಯುತ್ ವ್ಯರ್ಥವಾಗುತ್ತಿದೆ. ಈ ಬಗ್ಗೆ ಗಮನ ಹರಿಸಬೇಕು. ಹೆಸ್ಕಾಂನಿಂದ ಶೇ 50ರಷ್ಟು ಹಾಗೂ ಗ್ರಾಮ ಪಂಚಾಯಿತಿಯಿಂದ ಶೇ 50ರಷ್ಟು ಪಾಲುದಾರಿಕೆಯಲ್ಲಿ ದೀಪಗಳನ್ನು ನಿರ್ವಹಣೆ ಮಾಡಬೇಕು. ಜಿಲ್ಲೆಯ ಹಲವು ಕಡೆಗಳಲ್ಲಿ ಟ್ರಾನ್ಸ್‌ಫಾರ್ಮರ್‌ಗಳು ಹಾಳಾಗಿದ್ದು, ಅವುಗಳನ್ನು ತುರ್ತಾಗಿ ಪರಿಹರಿಸಬೇಕು’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಸಿಇಒ ರುಚಿ ಬಿಂದಲ್, ಉಪ ಕಾರ್ಯದರ್ಶಿ ಪುನೀತ್ ಹಾಗೂ ಇತರರು ಇದ್ದರು.

‘ಗೃಹಲಕ್ಷ್ಮಿ: ಖಾತೆ ಏಕಾಏಕಿ ಜಪ್ತಿ’ ‘ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿಗೆ ಪ್ರತಿ ತಿಂಗಳು ₹2 ಸಾವಿರ ನೀಡಲಾಗುತ್ತಿದೆ. ಆದರೆ ಬ್ಯಾಂಕ್‌ನವರು ಮಹಿಳೆಯರ ಖಾತೆಗೆ ಹಣ ಬರುತ್ತಿದ್ದಂತೆ ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿದ್ದಾರೆ. ಹಣ ಡ್ರಾ ಮಾಡಿಕೊಳ್ಳದ ರೀತಿಯಲ್ಲಿ ಏಕಾಏಕಿ ಖಾತೆಗಳನ್ನು ಜಪ್ತಿ ಮಾಡುತ್ತಿದ್ದಾರೆ’ ಎಂದು ಎಂ.ಎಂ. ಹಿರೇಮಠ ಹೇಳಿದರು. ‘ಸರ್ಕಾರದ ಯೋಜನೆಗಳು ನೇರವಾಗಿ ಫಲಾನುಭವಿಗಳಿಗೆ ತಲುಪಬೇಕು. ಇದರ ಮಧ್ಯೆದಲ್ಲಿ ಸಮಸ್ಯೆಯಾದರೆ ಸಹಿಸುವುದಿಲ್ಲ. ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಸಂಬಂಧಪಟ್ಟ ಬ್ಯಾಂಕ್‌ ಅಧಿಕಾರಿಗಳುಗೆ ಕಠಿಣ ಸೂಚನೆ ನೀಡಬೇಕು’ ಎಂದು ಅವರು ಸೂಚಿಸಿದರು.