ADVERTISEMENT

ಸೇವಾಲಾಲರ ತತ್ವಾದರ್ಶ ಅನುಕರಣೀಯ

ಸಮಾಜದ ಉದ್ಧಾರಕ್ಕಾಗಿ ಶ್ರಮಿಸಿದ ಸಂತ: ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2023, 13:50 IST
Last Updated 22 ಫೆಬ್ರುವರಿ 2023, 13:50 IST
ಹಾವೇರಿ ತಾಲ್ಲೂಕಿನ ದೇವಗಿರಿ ಯಲ್ಲಾಪೂರ ಜಿಲ್ಲಾ ಬಂಜಾರ ಭವನದಲ್ಲಿ ಬುಧವಾರ ನಡೆದ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಉದ್ಘಾಟಿಸಿದರು. ಮಾಜಿ ಸಚಿವ ರುದ್ರಪ್ಪ ಲಮಾಣಿ, ತಿಪ್ಪೇರುದ್ರ ಸ್ವಾಮೀಜಿ ಇದ್ದಾರೆ  –ಪ್ರಜಾವಾಣಿ ಚಿತ್ರ 
ಹಾವೇರಿ ತಾಲ್ಲೂಕಿನ ದೇವಗಿರಿ ಯಲ್ಲಾಪೂರ ಜಿಲ್ಲಾ ಬಂಜಾರ ಭವನದಲ್ಲಿ ಬುಧವಾರ ನಡೆದ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಉದ್ಘಾಟಿಸಿದರು. ಮಾಜಿ ಸಚಿವ ರುದ್ರಪ್ಪ ಲಮಾಣಿ, ತಿಪ್ಪೇರುದ್ರ ಸ್ವಾಮೀಜಿ ಇದ್ದಾರೆ  –ಪ್ರಜಾವಾಣಿ ಚಿತ್ರ    

ಹಾವೇರಿ: ‘ಸಂತ ಸೇವಾಲಾಲ್ ಅವರು ಪವಾಡ ಪುರುಷರು, ಸತ್ಯ, ಅಹಿಂಸೆಯ ಮೂಲಕ ಸಮಾಜಕ್ಕೆ ಉತ್ತಮ ಸಂದೇಶಗಳನ್ನು ನೀಡಿದ್ದಾರೆ. ಸಮಾಜದ ಏಳಿಗೆಗಾಗಿ ನಿರಂತರ ಶ್ರಮಿಸಿದ್ದಾರೆ’ ಎಂದು ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಹೇಳಿದರು.

ದೇವಗಿರಿ ಯಲ್ಲಾಪೂರ ಜಿಲ್ಲಾ ಬಂಜಾರ ಭವನದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಆಲ್ ಇಂಡಿಯಾ ಬಂಜಾರ ಸೇವಾ ಸಂಘದ ಜಿಲ್ಲಾ ಘಟಕದ ಸಹಯೋಗದಲ್ಲಿ ನಡೆದ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಂತ ಸೇವಾಲಾಲ್ ಅವರು ಕೇವಲ ಒಂದು ಸಮುದಾಯಕ್ಕೆ ಸೀಮಿತರಾಗಿಲ್ಲ. ಜಾತಿ, ಧರ್ಮ ಎಂಬ ಬೇಧ ಭಾವವಿಲ್ಲದೆ ಎಲ್ಲರು ಸಮಾನರು ಎಂದು ವಿಶ್ವ ಮಾನವ ಸಂದೇಶ ಸಾರುವ ಮೂಲಕ ಸಮಾಜದಲ್ಲಿ ಅನೇಕ ಒಳ್ಳೆಯ ಕಾರ್ಯಗಳನ್ನು ಮಾಡಿದ್ದಾರೆ. ಬಂಜಾರ ಸಮುದಾಯದವರು ವೀರರು, ಶೂರರು ಮಾತ್ರವಲ್ಲದೇ ವ್ಯಾಪಾರ ಮಾಡುವುದರಲ್ಲಿ ನಿಪುಣರಾಗಿದ್ದಾರೆ. ಸೇವಾಲಾಲ್ ಅವರ ಪವಾಡ, ಜೀವನ ಚರಿತ್ರೆಯ ಕುರಿತು ಎಲ್ಲರೂ ತಿಳಿದುಕೊಳ್ಳಬೇಕು ಎಂದರು.

ADVERTISEMENT

ಮಾಜಿ ಸಚಿವ ಹಾಗೂ ಆಲ್ ಇಂಡಿಯಾ ಬಂಜಾರ ಸೇವಾ ಸಂಘದ ಗೌರವಾಧ್ಯಕ್ಷ ರುದ್ರಪ್ಪ ಲಮಾಣಿ ಮಾತನಾಡಿ, ಸಂತ ಸೇವಾಲಾಲ್ ಅವರು ಸಮಾಜದ ಏಳಿಗೆಗೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ತತ್ವಾದರ್ಶಗಳನ್ನು ಇಂದಿನ ಯುವ ಪೀಳಿಗೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಮಾಜ ಬಾಂಧವರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಅವರಿಗೆ ಉತ್ತಮ ಜೀವನ ಕಟ್ಟಿಕೊಡಬೇಕು ಎಂದರು.

ಸಾಮಾಜಿಕ ಕಳಕಳಿ ವೇದಿಕೆ ಸಂಸ್ಥಾಪಕ ಡಾ.ಆರ್.ಎನ್. ರಾಜಾನಾಯಕ್ ಉಪನ್ಯಾಸ ನೀಡಿ, ಸಂತ ಸೇವಾಲಾಲ್ ಅವರು ಬಿಳಿ ಕುದುರೇಯನ್ನೇರಿ ಇಡಿ ದೇಶವನ್ನು ಸುತ್ತಾಡಿ ಸಮಾಜದ ಉದ್ಧಾರಕ್ಕಾಗಿ ಶ್ರಮಿಸಿದ್ದಾರೆ. ಅವರ ಬದುಕಿನ ಕುರಿತು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಯುವಕರು ತಾಂಡಾದಿಂದ ಹೊರಬಂದು ಜೀವನ ರೂಪಿಸಿಕೊಳ್ಳಬೇಕು. ಶಿಕ್ಷಣವೇ ಶಕ್ತಿಯಾಗಿದೆ, ಹಾಗಾಗಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು. ಬಂಜಾರ ಸಮುದಾಯದ ಭಾಷೆ, ಕಲೆ, ಸಂಸ್ಕೃತಿ ವಿಶೇಷವಾಗಿದೆ. ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ಸಮಾಜ ಮುಖ್ಯ ವಾಹಿನಿಗೆ ಬರಬೇಕು ಎಂದು ಕರೆ ನೀಡಿದರು.

ತಿಪ್ಪೇರುದ್ರ ಸ್ವಾಮೀಜಿ ಸಾನ್ನಿಧ್ಯವಹಿಸಿ ಆಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ನಿರ್ದೇಶಕಿ ಕೌಸರ್, ತಾಂಡಾ ಅಭಿವೃದ್ಧಿ ನಿಗಮದ ಅಧಿಕಾರಿ ಪ್ರಕಾಶ ನಾಯಕ್, ತಹಶೀಲ್ದಾರ್‌ ಗಿರೀಶ ಸ್ವಾದಿ, ಸರೋಜಿನಿ ಎರೇಸಿಮಿ, ಮಂಜುಳಾ ಅಕ್ಕಿ, ಹಸನ್ ಅಲ್ತಾಫ್, ಹ್ಯಾಂಡ್ ಕ್ರಾಫ್ಟ್ ಇಲಾಖೆ ನಿರ್ದೇಶಕ ಮೈಕಲ್, ಸಮಾಜದ ಮುಖಂಡರು ಇದ್ದರು. ಆಲ್ ಇಂಡಿಯಾ ಬಂಜಾರ ಸೇವಾ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಈರಪ್ಪ ಲಮಾಣಿ ಸ್ವಾಗತಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.