ಹಾವೇರಿ: ‘ರಾಜ್ಯದಲ್ಲಿರುವ ಹಾಸ್ಟೆಲ್ ಹಾಗೂ ವಸತಿ ಶಾಲಾ–-ಕಾಲೇಜು ವಿದ್ಯಾರ್ಥಿಗಳ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಹಾವೇರಿಯಲ್ಲಿ ಅಕ್ಟೋಬರ್ 4 ಹಾಗೂ 5ರಂದು ‘ರಾಜ್ಯಮಟ್ಟದ ಸಮಾವೇಶ’ ಹಮ್ಮಿಕೊಳ್ಳಲಾಗಿದೆ’ ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ರಾಜ್ಯ ಘಟಕದ ಅಧ್ಯಕ್ಷ ಶಿವಪ್ಪ ಅಂಬ್ಲಿಕಲ್ ಹೇಳಿದರು.
ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿದ್ಯಾರ್ಥಿಗಳ ಆಹಾರ ಭತ್ಯೆ ಹೆಚ್ಚಳ, ಖಾಲಿ ಇರುವ ವಾರ್ಡನ್, ಪ್ರಾಂಶುಪಾಲರು, ಸಿಬ್ಬಂದಿ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿ, ವಸತಿ ನಿಲಯಗಳಿಗೆ ಸ್ವಂತ ಕಟ್ಟಡ, ಮೂಲ ಸೌಕರ್ಯಕಲ್ಪಿಸುವಂತೆ ಆಗ್ರಹಿಸಿ ಈ ಸಮಾವೇಶ ನಡೆಸಲಾಗುತ್ತಿದೆ’ ಎಂದು ಹೇಳಿದರು.
‘ರಾಜ್ಯದಲ್ಲಿರುವ ಎಸ್.ಸಿ. ಸಮುದಾಯದ 3.5 ಲಕ್ಷ ವಿದ್ಯಾರ್ಥಿಗಳಿಗೆ 2,400 ವಸತಿ ನಿಲಯಗಳು, ಎಸ್.ಟಿ. ಸಮುದಾಯದ 1.5 ಲಕ್ಷ ವಿದ್ಯಾರ್ಥಿಗಳಿಗೆ 1,200 ವಸತಿ ನಿಲಯಗಳು, ಹಿಂದುಳಿದ ವರ್ಗದ 2.5 ಲಕ್ಷ ವಿದ್ಯಾರ್ಥಿಗಳಿಗೆ 2500 ವಸತಿ ನಿಲಯಗಳಿವೆ. ವಿದ್ಯಾರ್ಥಿಗಳ ಎದುರಿಸುತ್ತಿರುವ ಸಮಸ್ಯೆ ಹಾಗೂ ಮೂಲ ಸೌಕರ್ಯ ಕುರಿತು ಸಮಾವೇಶದಲ್ಲಿ ಚರ್ಚಿಸಲಾಗುವುದು’ ಎಂದರು.
‘ವಿದ್ಯಾರ್ಥಿಗಳನ್ನು ಜೈಲಿನಲ್ಲಿರುವ ಕೈದಿಗಳ ರೀತಿ ನಡೆಸಿಕೊಳ್ಳಲಾಗುತ್ತಿದೆ. ಹಾಸ್ಟೆಲ್ ಸಮಸ್ಯೆಗಳ ಇತ್ಯರ್ಥಕ್ಕಾಗಿ ₹ 14 ಕೋಟಿ ನೀಡುವಂತೆ ಸಮಾಜ ಕಲ್ಯಾಣ ಇಲಾಖೆಯು ರಾಜ್ಯ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ. ಆದರೆ, ರಾಜ್ಯ ಸರ್ಕಾರ ಇದುವರೆಗೂ ಹಣ ನೀಡುತ್ತಿಲ್ಲ. ವಿದ್ಯಾರ್ಥಿಗಳಿಗೆ ಸರಿಯಾದ ಭದ್ರತೆಯಿಲ್ಲ. ಆರೋಗ್ಯ ಪರೀಕ್ಷೆಯೂ ನಡೆಯುತ್ತಿಲ್ಲ. ವಿದ್ಯಾರ್ಥಿಗಳ ಮೇಲೆ ಅಧಿಕಾರಿಗಳಿಂದ ದಬ್ಬಾಳಿಕೆ ನಡೆಯುತ್ತಿದೆ. ಸಮಸ್ಯೆ ಹೇಳಿಕೊಂಡರೆ, ಅಂಥ ವಿದ್ಯಾರ್ಥಿಗಳ ಮೇಲೆ ಅಧಿಕಾರಿಗಳು ಸೇಡು ತೀರಿಸಿಕೊಳ್ಳುತ್ತಿದ್ದಾರೆ’ ಎಂದು ದೂರಿದರು.
‘ಹಾಸ್ಟೆಲ್ ಇಲ್ಲದ ಕಾರಣ ಹಲವು ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಅರ್ಜಿ ಹಾಕಿದ ಎಲ್ಲ ವಿದ್ಯಾರ್ಥಿಗಳಿಗೆ ವಸತಿ ನಿಲಯದ ಪ್ರವೇಶ ಸಿಗುತ್ತಿಲ್ಲ. ಈ ಎಲ್ಲ ಸಮಸ್ಯೆಗಳನ್ನು ಮುಂದಿಟ್ಟುಕೊಂಡು, ಸಮಾವೇಶ ನಡೆಸಲಾಗುತ್ತಿದೆ. ಈ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ರವಾನಿಸಲಾಗುವುದು’ ಎಂದು ಹೇಳಿದರು.
ಸಮಾವೇಶದ ಸ್ವಾಗತ ಸಮಿತಿಯ ಗೌರವ ಅಧ್ಯಕ್ಷ ವಿಜಯಕುಮಾರ ಮುದಕಣ್ಣನವರ ಮಾತನಾಡಿ, ‘ವಿದ್ಯಾರ್ಥಿಗಳು ಹಾಸ್ಟೆಲ್‌ಗಳಲ್ಲಿ ಅನುಭವಿಸುತ್ತಿರುವ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಹಾವೇರಿಯಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ಹಾಗೂ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು’ ಎಂದು ಕೋರಿದರು.
ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಬಸವರಾಜ ಪೂಜಾರ ಮಾತನಾಡಿ, ‘ವಿದ್ಯಾರ್ಥಿಗಳ ಉತ್ತಮ ಶಿಕ್ಷಣದಲ್ಲಿ ಹಾಸ್ಟೆಲ್‌ಗಳು ಪ್ರಮುಖ ಪಾತ್ರ ವಹಿಸಿವೆ. ಎಸ್ಎಫ್ಐ ಹಮ್ಮಿಕೊಂಡಿರುವ ರಾಜ್ಯಮಟ್ಟದ ಹಾಸ್ಟೆಲ್ ವಿದ್ಯಾರ್ಥಿಗಳ ಸಮಾವೇಶದಲ್ಲಿ ರಾಜ್ಯದ ವಿವಿಧ ಕಡೆಯಿಂದ 200ಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಹಾಸ್ಟೆಲ್ ವ್ಯವಸ್ಥೆ ಕುರಿತು ಸಮಗ್ರ ಚರ್ಚೆಗಳು, ಉಪನ್ಯಾಸಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ’ ಎಂದರು.
ಸಾಹಿತಿ ಸತೀಶ ಕುಲಕರ್ಣಿ, ಪರಿಮಳ ಜೈನ್, ಮಲ್ಲಿಕಾರ್ಜುನ ಬಳ್ಳಾರಿ, ಬಸವರಾಜ ಪೂಜಾರ, ನಾರಾಯಣ ಕಾಳೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.