ADVERTISEMENT

ಕ್ಷಯರೋಗ ಆಂದೋಲನ ಡಿ.1ರಿಂದ

ಪ್ರಚಾರ ಸಾಮಗ್ರಿ ಬಿಡುಗಡೆಗೊಳಿಸಿದ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2020, 15:13 IST
Last Updated 27 ನವೆಂಬರ್ 2020, 15:13 IST
ಸಂಜಯ ಶೆಟ್ಟೆಣ್ಣವರ, ಜಿಲ್ಲಾಧಿಕಾರಿ
ಸಂಜಯ ಶೆಟ್ಟೆಣ್ಣವರ, ಜಿಲ್ಲಾಧಿಕಾರಿ   

ಹಾವೇರಿ: ಕ್ಷಯರೋಗ ಪತ್ತೆ ಹಾಗೂ ಸೂಕ್ತ ಚಿಕಿತ್ಸೆ ನೀಡಲು ಇದೇ ಡಿ.1ರಿಂದ ಜಿಲ್ಲೆಯಲ್ಲಿ ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ ಆಂದೋಲನ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆ ಪರಿಶೀಲನೆ ನಡೆಸಿ ಪ್ರಚಾರ ಸಾಮಗ್ರಿಗಳನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

2020-25ರ ವೇಳೆಗೆ ಕ್ಷಯರೋಗವನ್ನು ನಿರ್ಮೂಲನೆ ಮಾಡುವ ಗುರಿ ಹಾಕಿಕೊಳ್ಳಲಾಗಿದ್ದು, ಸಾಮಾಜಿಕ ಹಾಗೂ ಆರ್ಥಿಕ ದುರ್ಬಲ ವರ್ಗದವರನ್ನು ಕೇಂದ್ರೀಕೃತವಾಗಿಸಿಕೊಂಡು ಮನೆ– ಮನೆ ಭೇಟಿಯ ಮೂಲಕ ಸಕ್ರಿಯವಾಗಿ ಕ್ಷಯರೋಗ ಪ್ರಕರಣಗಳನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡಲಾಗುತ್ತದೆ ಎಂದರು.

ADVERTISEMENT

ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ನೀಲೇಶ್‌ ಮಾತನಾಡಿ, ಜಿಲ್ಲೆಯಲ್ಲಿ 2017ರಲ್ಲಿ ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ ಆಂದೋಲವನ್ನು ಪ್ರಪ್ರಥಮ ಬಾರಿಗೆ ಮಾಡಲಾಯಿತು. ಈವರೆಗೆ ಐದು ಸುತ್ತುಗಳನ್ನು ಪೂರೈಸಲಾಗಿದೆ. ಇದೇ ಡಿಸೆಂಬರ್ 1ರಿಂದ ಆರನೇ ಸುತ್ತಿನ ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ ಆಂದೋಲನ ಕಾರ್ಯಕ್ರಮ ಜರುಗಲಿದೆ ಎಂದರು.

ಜಿಲ್ಲೆಯಲ್ಲಿ ಸಿಬಿನ್ಯಾಟ್ ಯಂತ್ರವನ್ನು 2016ರಂದು ಜಿಲ್ಲಾ ಆಸ್ಪತ್ರೆಯಲ್ಲಿ ಹಾಗೂ 2020ನೇ ಸಾಲಿನಲ್ಲಿ ಟ್ರೂನ್ಯಾಟ್ ಯಂತ್ರಗಳನ್ನು ಹಾನಗಲ್ ಹಾಗೂ ಹಿರೇಕೆರೂರು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಅಳವಡಿಸಲಾಗಿದೆ. ತ್ವರಿತಗತಿಯಲ್ಲಿ ಕ್ಷಯರೋಗಿಗಳನ್ನು ಪತ್ತೆ ಹಚ್ಚಲು ಸಹಕಾರಿಯಾಗಿದೆ ಎಂದು ಅವರು ತಿಳಿಸಿದರು.

ಜಿಲ್ಲೆಯ ಏಳು ತಾಲ್ಲೂಕುಗಳಲ್ಲಿ ಡಿಸೆಂಬರ್ ತಿಂಗಳಲ್ಲಿ ಬೇರೆ ಬೇರೆ ದಿನಾಂಕಗಳಂದು ಆಂದೋಲನ ನಡೆಯಲಿದೆ. ಜಿಲ್ಲೆಯಲ್ಲಿ 2,86,637 ಜನರನ್ನು ಸಮೀಕ್ಷೆ ಒಳಪಡಿಸವ ಗುರಿಯನ್ನು ಹೊಂದಲಾಗಿದೆ. ಇದಕ್ಕಾಗಿ 615 ತಂಡಗಳನ್ನು ರಚಿಸಲಾಗಿದೆ. ಸುಮಾರು 1230 ಕಾರ್ಯಕರ್ತರು ಕಾರ್ಯನಿರ್ವಹಿಸಲಿದ್ದಾರೆ ಅವರು ವಿವರಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ರಮೇಶ ದೇಸಾಯಿ, ಡಾ.ಜಯಾನಂದ, ಡಾ.ಹಂಸವೇಣಿ ಮುಂತಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.