ADVERTISEMENT

ಶಾಲೆಗಳ ವಿಲೀನ ಪ್ರಕ್ರಿಯೆ ನಿಲ್ಲಿಸಿ

ಹಾವೇರಿಯಲ್ಲಿ ಎಸ್‌ಎಫ್‌ಐ ನೇತೃತ್ವದಲ್ಲಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 31 ಜುಲೈ 2022, 5:08 IST
Last Updated 31 ಜುಲೈ 2022, 5:08 IST
ಶಾಲೆಗಳ ವಿಲೀನ ಪ್ರಕ್ರಿಯೆ ವಿರೋಧಿಸಿ ಎಸ್‌ಎಫ್‌ಐ ನೇತೃತ್ವದಲ್ಲಿ ಹಾವೇರಿ ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಯಿತು 
ಶಾಲೆಗಳ ವಿಲೀನ ಪ್ರಕ್ರಿಯೆ ವಿರೋಧಿಸಿ ಎಸ್‌ಎಫ್‌ಐ ನೇತೃತ್ವದಲ್ಲಿ ಹಾವೇರಿ ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಯಿತು    

ಹಾವೇರಿ: ‘ರಾಜ್ಯ ಸರಕಾರ ಇಡೀ ರಾಜ್ಯದಲ್ಲಿ 13,800 ಸರಕಾರಿ ಪ್ರಾಥಮಿಕ ಶಾಲೆಗಳನ್ನು ವಿಲೀನ ಹೆಸರಿನಲ್ಲಿ ಮುಚ್ಚುವ ನಿರ್ಧಾರ ಮಾಡಿರುವುದು ಬಡವರ, ಕಾರ್ಮಿಕರ, ಕೂಲಿಕಾರರ, ದಲಿತರ ಮಕ್ಕಳಿಗೆ ಶಿಕ್ಷಣವನ್ನು ವಂಚಿಸುವ ಮತ್ತು ಕನ್ನಡ ವಿರೋಧಿ ನಿಲುವು ಎಂದುಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಆರೋಪಿಸಿದರು.

ನಗರದ ಮೈಲಾರ ಮಹದೇವಪ್ಪ ವೃತ್ತದಲ್ಲಿರುವ ನಂ.2 ಸರ್ಕಾರಿ ಶಾಲೆ ಎದುರಿಗೆ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಹಾವೇರಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳನ್ನು ಮುಚ್ಚುವ ನಿರ್ಧಾರ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

2011ರಲ್ಲಿ ಪ್ರೊ.ಗೋವಿಂದ ಅವರ ವರದಿ ತರಿಸಿಕೊಂಡು ಸುಮಾರು 12,000 ಸಾವಿರ ಸರಕಾರಿ ಶಾಲೆಗಳನ್ನು ಮುಚ್ಚಲು ಚಿಂತನೆ ಮಾಡಿತ್ತು. ಅಂದಿನ ಮುಖ್ಯಮಂತ್ರಿ ಸದಾನಂದಗೌಡ ಅವರ ನಿಲುವನ್ನು ವಿರೋಧಿಸಿ ಎಸ್ಎಫ್ಐ ಸಂಘಟನೆ ರಾಜ್ಯದಾದ್ಯಂತ ಬೃಹತ್ ಪ್ರತಿಭಟನೆ ಮಾಡಿತ್ತು. ಅಷ್ಟೇ ಅಲ್ಲದೆ ಗಂಗಾವತಿ ನಗರದಲ್ಲಿ ಅಂದು ನಡೆದ 78ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬಂದ ಮುಖ್ಯಮಂತ್ರಿಗಳ ವಿರುದ್ಧ ಸಮ್ಮೇಳನದಲ್ಲಿ ಪ್ರತಿಭಟನೆ ಮಾಡಿ, ಕಾರ್ಯಕರ್ತರು ಬಂಧನಕೊಳಗಾಗಿದ್ದರು. ಈ ಹೋರಾಟದಿಂದ ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗಿತ್ತು ಎಂದು ಹೇಳಿದರು.

ADVERTISEMENT

ತಕ್ಷಣವೇ ಪ್ರಾಥಮಿಕ ಶಾಲೆಗಳನ್ನು ಮುಚ್ಚುವ ನಿರ್ಧಾರವನ್ನು ಹಿಂಪಡೆಯಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಎಸ್ಎಫ್ಐ ಜಿಲ್ಲಾ ಸಹಕಾರ್ಯದರ್ಶಿ ಬಸವರಾಜ ಭೋವಿ ಮಾತನಾಡಿ, ರಾಜ್ಯದಲ್ಲಿ ಕನ್ನಡ ಶಾಲೆಗಳು ಮುಚ್ಚುವಂತಹ ದುಸ್ಥಿತಿಗೆ ರಾಜ್ಯ ಸರ್ಕಾರವೇ ನೇರ ಹೊಣೆ. ಮೂಲಸೌಕರ್ಯಗಳಿಲ್ಲದೇ ಸೊರಗಿರುವ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಸರ್ಕಾರ ಮುಂದಾಗಬೇಕು. ಮಕ್ಕಳನ್ನು ಆಕರ್ಷಿಸುವ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಡಿವೈಎಫ್ಐ ಮುಖಂಡರಾದ ರೇಣುಕಾ ಕಹಾರ, ಎಸ್ಎಫ್ಐ ತಾಲ್ಲೂಕು ಸಹಕಾರ್ಯದರ್ಶಿ ಅರುಣ್ ಕಡಕೋಳ, ಮುಖಂಡರಾದ ಮನೋಜ್ ಅಣ್ಣಗೇರಿ, ಮುಬಾರಕ್ ಎಸ್, ಮನೋಜ್ ಮುದುಕಣ್ಣನವರ, ನಾಗರಾಜ ಎನ್ ಕೆ, ಅಸ್ಲಾಂ, ಮಾಲತೇಶ ಎಸ್ ಡಿ, ಪ್ರಜ್ವಲ್ ಎಚ್ ಕೆ, ಸುಲೇಮಾನ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.