ADVERTISEMENT

ಹಾವೇರಿ: ‘ಕುಷ್ಠರೋಗ ಮುಕ್ತ ಜಿಲ್ಲೆಗೆ ಶ್ರಮಿಸಿ'

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2022, 13:59 IST
Last Updated 3 ಫೆಬ್ರುವರಿ 2022, 13:59 IST
ಹಾವೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ‘ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ’ದ ಭಿತ್ತಿಪತ್ರಗಳನ್ನು ಜಿಲ್ಲಾ ಪಂಚಾಯಿತಿ ಸಿಇಒ ಮೊಹಮ್ಮದ್‌ ರೋಶನ್‌ ಬಿಡುಗಡೆಗೊಳಿಸಿದರು 
ಹಾವೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ‘ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ’ದ ಭಿತ್ತಿಪತ್ರಗಳನ್ನು ಜಿಲ್ಲಾ ಪಂಚಾಯಿತಿ ಸಿಇಒ ಮೊಹಮ್ಮದ್‌ ರೋಶನ್‌ ಬಿಡುಗಡೆಗೊಳಿಸಿದರು    

ಹಾವೇರಿ: ‘ಕುಷ್ಠರೋಗದ ಬಗ್ಗೆ ಸಮರ್ಪಕ ಮಾಹಿತಿಯ ಕೊರತೆಯಿಂದ ರೋಗಿಗಳು ಅಂಗವಿಕಲತೆಗೆ ಒಳಗಾಗುತ್ತಿದ್ದಾರೆ. ಸಾರ್ವಜನಿಕರಿಗೆ ಕುಷ್ಠರೋಗದ ಕುರಿತು ಅರಿವು ಮೂಡಿಸುವ ಮೂಲಕ ಕುಷ್ಠರೋಗ ಮುಕ್ತ ಹಾವೇರಿ ಜಿಲ್ಲೆಯನ್ನಾಗಿ ಮಾಡಲು ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಶ್ರಮಿಸಬೇಕು’ ಎಂದು ಹಾವೇರಿ ಜಿಲ್ಲಾ ಪಂಚಾಯಿತಿ ಸಿಇಒ ಮೊಹಮ್ಮದ್‌ ರೋಶನ್‌ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ ಘಟಕದ ಸಹಯೋಗದಲ್ಲಿ ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ‘ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕುಷ್ಠರೋಗದ ಆರಂಭಿಕ ಹಂತದಲ್ಲೇ ಸೂಕ್ತ ಚಿಕಿತ್ಸೆ ಪಡೆದು ಅಂಗವಿಕಲತೆಯನ್ನು ತಪ್ಪಿಸಬಹುದು. ಜಿಲ್ಲೆಯಾದ್ಯಂತ 63 ಸಕ್ರಿಯ ಕುಷ್ಠರೋಗ ಪೀಡಿತರನ್ನು ಗುರುತಿಸಲಾಗಿದೆ. ರೋಗಿಗಳಿಗೆ ಸರ್ಕಾರ ಸಂಪೂರ್ಣ ಉಚಿತ ಚಿಕಿತ್ಸೆ ನೀಡುತ್ತಿದ್ದು, ರೋಗದ ಲಕ್ಷಣಗಳು ಕಂಡುಬಂದ ವ್ಯಕ್ತಿಗಳನ್ನು ವೈದ್ಯರ ಬಳಿ ಕರೆದೊಯ್ದು ಸೂಕ್ತ ಚಿಕಿತ್ಸೆ ಕೊಡಿಸಬೇಕು ಎಂದು ಹೇಳಿದರು.

ADVERTISEMENT

ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಚನ್ನಯ್ಯ ವಿರಕ್ತಮಠ ಪ್ರತಿಜ್ಞಾವಿಧಿ ಬೋಧಿಸಿದರು. ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ದೇವರಾಜ ಸಾರಥಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಚನ್ನಪ್ಪ ಲಮಾಣಿ, ಜಿಲ್ಲಾ ಆಶಾ ಸಮನ್ವಯಾಧಿಕಾರಿ ರತ್ನಾ ಮಾಳಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.