ADVERTISEMENT

ಹಾವೇರಿ: ಸ್ಟೂಡೆಂಟ್‌ ಪೊಲೀಸ್ ಕೆಡೆಟ್ ಕಾರ್ಯಕ್ರಮಕ್ಕೆ ಚಾಲನೆ

ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಪೊಲೀಸ್ ಹಾಗೂ ಆಡಳಿತ ವ್ಯವಸ್ಥೆ ಬಗ್ಗೆ ಪರಿಚಯ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2022, 13:38 IST
Last Updated 15 ನವೆಂಬರ್ 2022, 13:38 IST
ಹಾವೇರಿ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.2ರಲ್ಲಿ ಮಂಗಳವಾರ ಪೊಲೀಸ್ ಇಲಾಖೆಯಿಂದ ಆಯೋಜಿಸಿದ್ದ ಸ್ಟೂಡೆಂಟ್‌ ಪೊಲೀಸ್ ಕೆಡೆಟ್ ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ ಉದ್ಘಾಟಿಸಿದರು 
ಹಾವೇರಿ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.2ರಲ್ಲಿ ಮಂಗಳವಾರ ಪೊಲೀಸ್ ಇಲಾಖೆಯಿಂದ ಆಯೋಜಿಸಿದ್ದ ಸ್ಟೂಡೆಂಟ್‌ ಪೊಲೀಸ್ ಕೆಡೆಟ್ ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ ಉದ್ಘಾಟಿಸಿದರು    

ಹಾವೇರಿ: ‘ಜನಸ್ನೇಹಿ ಪೊಲೀಸ್ ವ್ಯವಸ್ಥೆ ಹಿನ್ನೆಲೆಯಲ್ಲಿ ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಪೊಲೀಸ್ ವ್ಯವಸ್ಥೆ ಹಾಗೂ ಸರ್ಕಾರದ ಆಡಳಿತ ವ್ಯವಸ್ಥೆ ಮಾಹಿತಿ ನೀಡಲು ಸರ್ಕಾರ ಸ್ಟೂಡೆಂಟ್‌ ಪೊಲೀಸ್ ಕೆಡೆಟ್ ಕಾರ್ಯಕ್ರಮ (ಎಸ್.ಪಿ.ಸಿ) ರೂಪಿಸಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಹೇಳಿದರು.

ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.2ರಲ್ಲಿ ಮಂಗಳವಾರ ಪೊಲೀಸ್ ಇಲಾಖೆಯಿಂದ ಆಯೋಜಿಸಿದ್ದ ಸ್ಟೂಡೆಂಟ್‌ ಪೊಲೀಸ್ ಕೆಡೆಟ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಇಂದಿನಿಂದ ವಿದ್ಯಾರ್ಥಿ ಪೊಲೀಸ್ ಕೆಡೆಟ್ ಕಾರ್ಯಕ್ರಮ ಆರಂಭಗೊಂಡಿದೆ. ಮೊದಲ ಹಂತದಲ್ಲಿ ಜಿಲ್ಲೆಯ 11 ಶಾಲೆಗಳಲ್ಲಿ ಈ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.

ಪ್ರಾಥಮಿಕ ಹಂತದಲ್ಲಿ ಜಿಲ್ಲೆಯ 11 ಶಾಲೆಗಳನ್ನು ಆಯ್ಕೆ ಮಾಡಲಾಗಿದ್ದು, ಹೆಚ್ಚುವರಿಯಾಗಿ ನಾಲ್ಕು ಶಾಲೆಗಳ ಸೇರ್ಪಡೆಗೆ ಕ್ರಮವಹಿಸಲಾಗಿದೆ. ಪ್ರೌಢಶಾಲಾ ವಿದ್ಯಾರ್ಥಿಗಳನ್ನು ಈ ಕಾರ್ಯಕ್ರಮಕ್ಕೆ ಆಯ್ಕೆ ಮಾಡಲಾಗಿದೆ. ಶಾಲಾ ಚಟುವಟಿಕೆಗಳೊಂದಿಗೆ ಹೆಚ್ಚಿನ ಹೊರೆಯಾಗದಂತೆ ಜನಸ್ನೇಹಿ ಪೊಲೀಸ್ ಆಡಳಿತ ವ್ಯವಸ್ಥೆ ಹಾಗೂ ಸರ್ಕಾರದ ವಿವಿಧ ಇಲಾಖೆಯ ಕಾರ್ಯಕ್ರಮಗಳ ಕುರಿಂತೆ ವಿದ್ಯಾರ್ಥಿಗಳಿಗೆ ಪರಿಚಯಿಸಲಾಗುವುದು. ವಾರಾಂತ್ಯದಲ್ಲಿ ಅರ್ಧ ದಿನ ಒಳಾಂಗಣ ಹಾಗೂ ತಿಂಗಳಲ್ಲಿ ಎರಡು ದಿನ ಹೊರಾಂಗಣ ಕಾರ್ಯಕ್ರಮ ಆಯೋಜಿಸಿ ಮಾಹಿತಿ ನೀಡಲಾಗುವುದು ಎಂದರು.

ADVERTISEMENT

ಒಳಾಂಗಣ ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಕಾನೂನು ಅರಿವು, ಸಾಮಾಜಿಕ ಜಾಲತಾಣ, ಸೈಬರ್ ಕ್ರೈಂ, ನಾರ್ಕೋಟಿಕ್ ಡ್ರಗ್ಸ್, ಫೋಕ್ಸೋ ಬಗ್ಗೆ ಜಾಗೃತಿ ಮೂಡಿಸಲಾಗುವುದು. ಹೊರಾಂಗಣ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ, ನ್ಯಾಯಾಲಯ, ತಹಶೀಲ್ದಾರ್‌ಕಚೇರಿ ಹಾಗೂ ಕಾರಾಗೃಹಕ್ಕೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಿ ಅಲ್ಲಿನ ವ್ಯವಸ್ಥೆ ಹಾಗೂ ಕಾರ್ಯವೈಖರಿಯನ್ನು ಪರಿಚಯಿಸಲಾಗುವುದು. ಇದರೊಂದಿಗೆ ಯೋಗಾ ತರಬೇತುದಾರರಿಂದ ಪ್ರಾಥಮಿಕ ಯೋಗದ ಕ್ರಮಗಳ ಕುರಿತು ಮಾಹಿತಿ ನೀಡಲಾಗುವುದು ಎಂದು ವಿವರಿಸಿದರು.

ಆಯ್ಕೆಯಾದ ಪ್ರತಿ ಶಾಲೆಗೆ ₹50 ಸಾವಿರ ನೀಡಲಾಗುವುದು. ಆಯಾ ಶಾಲೆಗಳು ಎರಡು ತಿಂಗಳಲ್ಲಿ ಕಾರ್ಯಕ್ರಮ ಆಯೋಜಿಸಿ ವರದಿ ನೀಡಬೇಕು. ಆಯ್ಕೆಯಾದ ಶಾಲೆಗಳು ತಮ್ಮ ಶಾಲಾ ವ್ಯಾಪ್ತಿಯ ಪೊಲೀಸ್ ಇಲಾಖೆ ಡಿವೈಎಸ್‍ಪಿ, ಪೊಲೀಸ್ ಇನ್‌ಸ್ಪೆಕ್ಟರ್‌ ಅವರ ಸಹಯೋಗದೊಂದಿಗೆ ಕಾರ್ಯಕ್ರಮ ಆಯೋಜಿಸುವಂತೆ ಸಲಹೆ ನೀಡಿದರು.

ಡಿಡಿಪಿಐ ಜಗದೀಶ್ವರ ಮಾತನಾಡಿ, ಭಾವಿ ಪ್ರಜೆಗಳನ್ನು ಉತ್ತಮ ನಾಗರಿಕರನ್ನಾಗಿಸುವ ಉದ್ದೇಶದಿಂದ 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳನ್ನು ಈ ಕಾರ್ಯಕ್ರಮದ ಸದಸ್ಯರನ್ನಾಗಿ ಮಾಡಲಾಗಿದೆ. ಈ ಕಾರ್ಯಕ್ರಮಕ್ಕೆ ಆಯ್ಕೆಯಾದ ಎಲ್ಲ ಶಾಲೆಗಳು ಡಿಸೆಂಬರ್ ಹಾಗೂ ಜನವರಿಯಲ್ಲಿ ಯಾವುದೇ ಲೋಪವಾಗದಂತೆ ಸಕಾರಾತ್ಮಕವಾಗಿ ಕಾರ್ಯಕ್ರಮ ಆಯೋಸಲಾಗುವುದು ಎಂದರು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಜಯಕುಮಾರ ಸಂತೋಷ್, ಡಿವೈಎಸ್‍ಪಿಗಳಾದ ಶಿವಾನಂದ ಚಲವಾದಿ, ಹೇಮಂತ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಸ್.ಎಸ್. ಅಡಿಗ, ಶಿಕ್ಷಣ ಇಲಾಖೆಯ ಈರಪ್ಪ ಲಮಾಣಿ, ಪೊಲೀಸ್ ಇನ್‌ಸ್ಪೆಕ್ಟರ್‌ ಸಗರಿ, ಜಯಶ್ರೀ ಪಾಟೀಲ, ಪೊಲೀಸ್ ಇಲಾಖೆ ವಿವಿಧ ಅಧಿಕಾರಿಗಳು ಇದ್ದರು. ನಂಜರಾಜ ಸ್ವಾಗತಿಸಿದರು. ಮುಖ್ಯ ಶಿಕ್ಷಕ ಎಸ್.ಪಿ.ಮೂಡಲ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.