ADVERTISEMENT

ಶಿಕ್ಷಣ ಅಭಿವೃದ್ಧಿಗೆ ಶೇ 30ರಷ್ಟು ಅನುದಾ: ಶಾಸಕರ ಕಚೇರಿ ಎದುರು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2026, 2:54 IST
Last Updated 21 ಫೆಬ್ರುವರಿ 2026, 2:54 IST
‘ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಶೇ 30ರಷ್ಟು ಅನುದಾನ ಮೀಸಲಿಡಬೇಕು’ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಾಸಕ ರುದ್ರಪ್ಪ ಲಮಾಣಿ ಅವರ ಕಚೇರಿ ಎದುರು ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು
‘ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಶೇ 30ರಷ್ಟು ಅನುದಾನ ಮೀಸಲಿಡಬೇಕು’ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಾಸಕ ರುದ್ರಪ್ಪ ಲಮಾಣಿ ಅವರ ಕಚೇರಿ ಎದುರು ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು   

ಹಾವೇರಿ: ‘ಶಿಕ್ಷಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ಬಜೆಟ್‌ನಲ್ಲಿ ಶೇ 30ರಷ್ಟು ಅನುದಾನವನ್ನು ಮೀಸಲಿಡಬೇಕು. ವಿದ್ಯಾರ್ಥಿ ಸಮುದಾಯದ ಬೇಡಿಕೆಗಳನ್ನು ಈಡೇರಿಸಬೇಕು’ ಎಂದು ಆಗ್ರಹಿಸಿ ಶಾಸಕ ರುದ್ರಪ್ಪ ಲಮಾಣಿ ಅವರ ಕಚೇರಿ ಎದುರು ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.

ಇಲ್ಲಿಯ ತಾಲ್ಲೂಕು ಪಂಚಾಯಿತಿ ಆವರಣದಲ್ಲಿರುವ ಶಾಸಕರ ಕಚೇರಿ ಎದುರು ಸೇರಿದ್ದ ವಿದ್ಯಾರ್ಥಿಗಳು, ಬೇಡಿಕೆ ಈಡೇರಿಕೆಗಾಗಿ ಘೋಷಣೆ ಕೂಗಿದರು. ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಹಾವೇರಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

‘ರಾಜ್ಯದ ಶಿಕ್ಷಣ ವ್ಯವಸ್ಥೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಬೇಕು. ಇದಕ್ಕಾಗಿ ರಾಜ್ಯ ಬಜೆಟ್‌ನಲ್ಲಿ ವಿದ್ಯಾರ್ಥಿಗಳ ಬೇಡಿಕೆ ಈಡೇರಿಸುವ ಯೋಜನೆಗಳನ್ನು ಘೋಷಿಸಬೇಕು. ಇದುವರೆಗಿನ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸರಾಸರಿ ಕೇವಲ ಶೇ 11ರಷ್ಟು ಅನುದಾನ ನೀಡುತ್ತಿರುವುದು ಖಂಡನೀಯ. ಇದರಿಂದಾಗಿ ಶಿಕ್ಷಣ ಕ್ಷೇತ್ರ ಸಾಕಷ್ಟು ಸೌಲಭ್ಯಗಳಿಂದ ವಂಚಿತವಾಗಿದೆ. ಕೊಠಾರಿ ಆಯೋಗದ ಶಿಫಾರಸಿನಂತೆ ಶೇ 30ರಷ್ಟು ಅನುದಾನವನ್ನು ಶಿಕ್ಷಣ ಕ್ಷೇತ್ರಕ್ಕೆ ನೀಡಬೇಕು’ ಎಂದು ಆಗ್ರಹಿಸಿದರು.

ADVERTISEMENT

‘ಇಡೀ ದೇಶದಲ್ಲಿ ಉತ್ತಮ ಗುಣಮಟ್ಟದ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಹೊಂದಿರುವ ಕೇರಳ ರಾಜ್ಯ, ಬಜೆಟ್‌ನಲ್ಲಿ ಶೇ 27ರಷ್ಟು ಹಣವನ್ನು ಶಿಕ್ಷಣಕ್ಕೆ ನೀಡುತ್ತಿದೆ. ರಾಜ್ಯದಲ್ಲಿಯೇ ಸರ್ಕಾರಿ ಶಾಲಾ–ಕಾಲೇಜು, ಹಾಸ್ಟೆಲ್, ವಿಶ್ವವಿದ್ಯಾಲಯಗಳ ಸಮಗ್ರ ಅಭಿವೃದ್ಧಿಗಾಗಿ ಕನಿಷ್ಠ ಶೇ 30ರಷ್ಟು ಅನುದಾನ ಅಗತ್ಯವಾಗಿದೆ. ಗ್ಯಾರಂಟಿ ಯೋಜನೆಗಳ ಪಟ್ಟಿಗೆ ಶಿಕ್ಷಣವನ್ನೂ ಸೇರಿಸಬೇಕು’ ಎಂದು ಒತ್ತಾಯಿಸಿದರು.

‘ಪ್ರತಿ ತಾಲ್ಲೂಕಿನಲ್ಲಿ ಸರ್ಕಾರಿ ಡಿಪ್ಲೊ ಕಾಲೇಜು, ಸರ್ಕಾರಿ ಐಟಿಐ ಕಾಲೇಜು, ಸರ್ಕಾರಿ ಜಿಟಿಟಿಸಿ ಕಾಲೇಜು ಮಂಜೂರು ಮಾಡಬೇಕು.  ವೃತಿಪರ ಶಿಕ್ಷಣ ಪಡೆದ ಯುವಕರಿಗೆ ಉದ್ಯೋಗ ಒದಗಿಸಬೇಕು. ಪ್ರತಿ ಜಿಲ್ಲೆಗೆ ಹೆಚ್ಚುವರಿಯಾಗಿ ಕನಿಷ್ಟ 10 ಹಾಸ್ಟೆಲ್ ಮಂಜೂರು ಮಾಡಬೇಕು. ಎಲ್.ಕೆ.ಜಿ ಯಿಂದ ಪಿಎಚ್.ಡಿವರೆಗಿನ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕು. ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ಕಿರುಕುಳ ತಡೆಯಲು ಶಾಲಾ-ಕಾಲೇಜುಗಳಲ್ಲಿ ಲೈಂಗಿಕ ಕಿರುಕುಳ ತಡೆ ಸಮಿತಿ ರಚಿಸಬೇಕು. ವಿದ್ಯಾರ್ಥಿ ಸಂಘದ ಚುನಾವಣೆ ನಡೆಸಬೇಕು. ಖಾಲಿ ಇರುವ ಶಿಕ್ಷಕ- ಉಪನ್ಯಾಸಕ ಹುದ್ದೆಗಳನ್ನು ಭರ್ತಿ ಮಾಡಬೇಕು’ ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.

ಎಸ್ಎಫ್ಐ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಎಸ್., ಅರುಣ್ ನಾಗವತ್, ಭರತ ಮಡಿವಾಳ ಹಾಗೂ ಇತರರು ಇದ್ದರು. 

‘ವಿದ್ಯಾರ್ಥಿಗಳಿಗೆ ಮೂಲ ಸೌಕರ್ಯ ಒದಗಿಸಿ’

‘ಶೇ. 46ರಷ್ಟು ಸರ್ಕಾರಿ ಶಾಲಾ–ಕಾಲೇಜುಗಳು ಮೂಲ ಸೌಕರ್ಯವಿಲ್ಲದೇ ನರಳುತ್ತಿವೆ. ಶೇ. 38ರಷ್ಟು ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯಗಳಿಲ್ಲ. ಶಿಕ್ಷಣ ಹಕ್ಕು ಕಾಯ್ದೆ ಸಮರ್ಪಕವಾಗಿ ಜಾರಿಯಾಗುತ್ತಿಲ್ಲ. ಉನ್ನತ ಶಿಕ್ಷಣ ಓದುತ್ತಿದ್ದ 37 ಲಕ್ಷ ವಿದ್ಯಾರ್ಥಿಗಳು ಶಿಕ್ಷಣವನ್ನು ತೊರೆದಿದ್ದಾರೆ.

ಶೇ 46ರಷ್ಟು ಸರ್ಕಾರಿ ಪದವಿ ಕಾಲೇಜುಗಳು ಉಪನ್ಯಾಸಕರ ಕೊರತೆ ಎದುರಿಸುತ್ತಿವೆ. ಸರ್ಕಾರಿ ಎಂಜಿನಿಯರಿಂಗ್ ವೈದ್ಯಕೀಯ ಪ್ಯಾರಾಮೆಡಿಕಲ್ ನರ್ಸಿಂಗ್ ಹಾವೇರಿ ವಿಶ್ವವಿದ್ಯಾಲಯ ಜಾನಪದ ವಿವಿ ಹನುಮನಮಟ್ಟಿ ಕೃಷಿ ವಿವಿ ಅನುದಾನವಿಲ್ಲದೇ ಆರ್ಥಿಕವಾಗಿ ಸೊರಗುತ್ತಿವೆ’ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.