ADVERTISEMENT

ಶೇ 7.5 ಮೀಸಲಾತಿಗೆ ಸ್ವಾಮೀಜಿ ಆಗ್ರಹ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2020, 15:12 IST
Last Updated 13 ಅಕ್ಟೋಬರ್ 2020, 15:12 IST
ಹಾವೇರಿಯಲ್ಲಿ ಜಿಲ್ಲಾ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಪ್ರಸನ್ನಾನಂದಪುರಿ ಸ್ವಾಮೀಜಿ ಸಾನ್ನಿಧ್ಯದಲ್ಲಿ ಜಿಲ್ಲಾ ಜನಜಾಗೃತಿ ಸಭೆ ನಡೆಯಿತು
ಹಾವೇರಿಯಲ್ಲಿ ಜಿಲ್ಲಾ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಪ್ರಸನ್ನಾನಂದಪುರಿ ಸ್ವಾಮೀಜಿ ಸಾನ್ನಿಧ್ಯದಲ್ಲಿ ಜಿಲ್ಲಾ ಜನಜಾಗೃತಿ ಸಭೆ ನಡೆಯಿತು   

ಹಾವೇರಿ: ‘ಕೇಂದ್ರ ಸರ್ಕಾರ ಎಲ್ಲ ರಂಗಗಳಲ್ಲಿಯೂ ಶೇ 7.5 ಮೀಸಲಾತಿಯನ್ನು ನೀಡಿದೆ. ಆದರೆ ರಾಜ್ಯ ಸರ್ಕಾರ ಮಾತ್ರ ಕೇಂದ್ರ ಸರ್ಕಾರ ನೀಡಿರುವ ಮೀಸಲಾತಿಯನ್ನು ನೀಡುತ್ತಿಲ್ಲ. ಕೇವಲ ಶೇ 3ರಷ್ಟು ಮೀಸಲಾತಿಯನ್ನು ಮಾತ್ರ ನೀಡುತ್ತಿದೆ’ ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.

ನಗರದ ಶಿವಶಕ್ತಿ ಪ್ಯಾಲೇಸ್‍ನಲ್ಲಿ ಜಿಲ್ಲಾ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ಜನಜಾಗೃತಿ ಸಭೆಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ 7.5 ಮೀಸಲಾತಿ ದೊರೆಯದ ಹಿನ್ನೆಲೆಯಲ್ಲಿ ವಾಲ್ಮೀಕಿ ಸಮಾಜಕ್ಕೆ ದೊಡ್ಡ ಅನ್ಯಾಯವಾಗುತ್ತಿದೆ. 42 ವರ್ಷಗಳಿಂದ ಜನಸಂಖ್ಯೆಗೆ ಅನುಗುಣವಾಗಿ 7.5 ಮೀಸಲಾತಿ ಹೆಚ್ಚಿಸುವಂತೆ ಹೋರಾಟ ಮಾಡುತ್ತಾ ಬರುತ್ತಿದ್ದೇವೆ. ಈ ಹೋರಾಟ ನಿರ್ಣಾಯವಾಗಿದ್ದು, ಸರ್ಕಾರ ಸಂಪುಟ ಸಭೆಯಲ್ಲಿ ಅಂಗೀಕರಿಸಿ ಮೀಸಲಾತಿ ನೀಡಬೇಕು ಎಂದು ಶ್ರೀಗಳು ಆಗ್ರಹಿಸಿದರು.

ADVERTISEMENT

ತನಿಖೆಗೆ ಆಗ್ರಹ: ಶ್ರೀಮಠಕ್ಕೆ ಸೇರಿದ ಸರ್ವೋದಯ ಶಿಕ್ಷಣ ಟ್ರಸ್ಟ್ ಧಾರವಾಡ ಇದರ ಅಂಗ ಸಂಸ್ಥೆಗಳ ನಕಲಿ ದಾಖಲೆಗಳನ್ನು ಸೃಷ್ಟಿಸಿ ಬಸವರಾಜ ಹೊರಟ್ಟಿಯವರು ಮಾಡಿರುವ ಅಕ್ರಮಗಳನ್ನು ನ್ಯಾಯಾಂಗ ತನಿಖೆಗೆ ಆದೇಶಿಸಬೇಕು.ಚುನಾವಣೆ ಬಂದಾಗ ರಾಜಕೀಯ ಪಕ್ಷಗಳು ವಾಲ್ಮೀಕಿ ಸಮಾಜದ ಬಗ್ಗೆ ಕಣ್ಣೀರು ಸುರಿಸುತ್ತವೆ ಎಂದು ಕಿಡಿಕಾರಿದರು.

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆದವರನ್ನು ಹಾಗೂ ನೀಡಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಜೊತೆ ಶ್ರೀಮಹರ್ಷಿ ವಾಲ್ಮೀಕಿ ಮಂದಿರವನ್ನು ನಿರ್ಮಿಸಬೇಕು ಎಂದು ಆಗ್ರಹಿಸಿದರು.

ಸಭೆಯಲ್ಲಿ ವಿಧಾನಪರಿಷತ್ ಮಾಜಿ ಸದಸ್ಯ ಡಿ.ಎಂ. ಸಾಲಿ, ಜಿಲ್ಲಾ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಆನವಟ್ಟಿ, ಮುಖಂಡರಾದ ಸೋಮನಗೌಡ ಪಾಟೀಲ, ಅಮೃತಗೌಡ ಪಾಟೀಲ, ಮಂಜುಳಾ ಕರಬಸಮ್ಮನವರ, ಹನುಮಂತಪ್ಪ ಯಮುನಕ್ಕನವರ, ರಮೇಶ ತೆವರಿ, ಪ್ರಮೋದ ನಲವಾಗಿಲ, ಚಂದ್ರಣ್ಣ ಬೇಡರ, ಕೆ.ಮಂಜಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.