ADVERTISEMENT

ಶಿಕ್ಷಕರ ಸಮಸ್ಯೆ ಬಗೆಹರಿಸಲು ಪ್ರಯತ್ನ

ಸನ್ಮಾನ ಸಮಾರಂಭ: ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 30 ಜುಲೈ 2022, 14:36 IST
Last Updated 30 ಜುಲೈ 2022, 14:36 IST
ಹಾವೇರಿ ನಗರದ ಜಿಲ್ಲಾ ಗುರುಭವನದಲ್ಲಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಜಿಲ್ಲಾ ಘಟಕ ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಶನಿವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಅವರನ್ನು ಸನ್ಮಾನಿಸಲಾಯಿತು  –ಪ್ರಜಾವಾಣಿ ಚಿತ್ರ 
ಹಾವೇರಿ ನಗರದ ಜಿಲ್ಲಾ ಗುರುಭವನದಲ್ಲಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಜಿಲ್ಲಾ ಘಟಕ ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಶನಿವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಅವರನ್ನು ಸನ್ಮಾನಿಸಲಾಯಿತು  –ಪ್ರಜಾವಾಣಿ ಚಿತ್ರ    

ಹಾವೇರಿ:ಚುನಾವಣೆ ಸಂದರ್ಭದಲ್ಲಿ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿ ನನ್ನ ಗೆಲುವಿಗೆ ಶ್ರಮಿಸಿದ ಶಿಕ್ಷಕರ ಸೇವೆ ಮರೆಯಲು ಸಾಧ್ಯವಿಲ್ಲ. ನಿಮ್ಮ ಋಣ ನನ್ನ ಮೇಲಿದೆ. ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದುವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.

ನಗರದ ಜಿಲ್ಲಾ ಗುರುಭವನದಲ್ಲಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಜಿಲ್ಲಾ ಘಟಕ ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಶನಿವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ವಿಶ್ವ ದಾಖಲೆ:

ADVERTISEMENT

ಪಶ್ಚಿಮ ಶಿಕ್ಷಕರ ಮತಕ್ಷೇತ್ರದಿಂದ ವಿಧಾನ ಪರಿಷತ್‍ಗೆ ಸತತವಾಗಿ ಎಂಟನೇ ಬಾರಿಗೆ ಆಯ್ಕೆಯಾಗುವ ಮೂಲಕ ವಿಶ್ವ ದಾಖಲೆ ಸೃಷ್ಟಿಸಲು ಶಿಕ್ಷಕರ ಬೆಂಬಲವೇ ಕಾರಣ.ಸತತ 48 ವರ್ಷ ಒಂದೇ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದು ಇತಿಹಾಸ ಸೃಷ್ಟಿಸಿದೆ. ಅಂದಿನ ಚುನಾವಣೆಗಳು ಹಾಗೂ ಇಂದಿನ ಚುನಾವಣೆಗಳಲ್ಲಿ ಸಾಕಷ್ಟು ಬದಲಾವಣೆಯಾಗಿವೆ. ಇಂದಿನ ಚುನಾವಣೆಗಳು ಮತದಾರರನ್ನು ದಾರಿ ತಪ್ಪಿಸುವಂತ ಸ್ಥಿತಿ ನಿರ್ಮಾಣಗೊಂಡಿದೆ. ಆದರೆ, ಶಿಕ್ಷಕ ಬಾಂಧವರು ಯಾವುದೇ ಆಮಿಷಗಳಿಗೆ ಒಳಗಾಗದೇ ನನ್ನ ಮೇಲೆ ವಿಶ್ವಾಸವಿಟ್ಟು ಆಯ್ಕೆ ಮಾಡಿದ್ದಾರೆ ಎಂದು ಕೃತಜ್ಞತೆ ಸಲ್ಲಿಸಿದರು.

ಶಿಕ್ಷಕರಾದವರು ನಾಡಿದ ಭದ್ರ ಬುನಾದಿ ಹಾಕುವಂತವರು. ಮಕ್ಕಳಿಗೆ ಪ್ರಜಾಪ್ರಭುತ್ವದ ಬಗ್ಗೆ, ಮತದಾನ ಹಾಗೂ ಅದರ ಮಹತ್ವದ ಬಗ್ಗೆ ತಿಳಿಸುವ ಕೆಲಸ ಮಾಡಬೇಕು. ಶಿಕ್ಷಕರಿಗೆ ಅಸಾಧ್ಯವಾದದ್ದು ಯಾವುದು ಇಲ್ಲ. ಈ ನಿಟ್ಟಿನಲ್ಲಿ ದೇಶಕ್ಕೆ ಉತ್ತಮ ಪ್ರಜೆಗಳನ್ನು ಕೊಡುಗೆ ನೀಡುವ ಜವಾಬ್ದಾರಿ ತೋರಬೇಕು. ಕನ್ನಡ ಮಾಧ್ಯಮ ಶಾಲೆಗಳು ಉಳಿಯಬೇಕಾದರೆ, ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಶಾಲೆಗಳ ಶಿಕ್ಷಕರು ಹೆಚ್ಚಿನ ಶ್ರಮವಹಿಸಬೇಕು ಎಂದರು.

ಎಸೆಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದ ವಿದ್ಯಾರ್ಥಿಗಳಾದ ಮಧು ಶೇತಸನಿಧಿ, ಪ್ರವೀಣ್ ನೀರಲಗಿ, ಸೃಷ್ಠಿ ಕಮ್ಮಾರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

‘ರದ್ದಾಗಿರುವ ಪಿಂಚಣಿ ವ್ಯವಸ್ಥೆ ಜಾರಿಗೆ ತನ್ನಿ’

ಮಾಜಿ ಶಾಸಕ ಶಿವರಾಜ ಸಜ್ಜನರ ಮಾತನಾಡಿ, ಹೊರಟ್ಟಿಯವರುಹೋರಾಟಕ್ಕೆ ಹೆಸರಾಗಿದ್ದಾರೆ. ಶಿಕ್ಷಣ ಕ್ಷೇತ್ರದ ನೂರಾರು ಸಮಸ್ಯೆಗಳಿಗೆ ಹೊರಟ್ಟಿ ಅವರು ಸ್ಪಂದಿಸಿ, ಸಮಸ್ಯೆ ಬಗೆಹರಿಸಿದ್ದಾರೆ. ರದ್ದಾಗಿರುವ ಪಿಂಚಣಿ ವ್ಯವಸ್ಥೆಯನ್ನು ಮರು ಜಾರಿಗೆ ತರಬೇಕಾಗಿದೆ. ಅನುದಾನಿತ ಶಾಲೆಗಳಲ್ಲಿ ಇರುವ ಸಮಸ್ಯೆಗಳನ್ನು ನಿವಾರಿಸಲು ಮೊದಲ ಆದ್ಯತೆ ನೀಡಬೇಕೆಂದು ಮನವಿ ಮಾಡಿದರು.

ಶಾಸಕ ನೆಹರು ಓಲೇಕಾರ, ಬ್ಯಾಡಗಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಮಾತನಾಡಿ, ಶಿಕ್ಷಣ ಕ್ಷೇತ್ರಕ್ಕೆ ಬಸವರಾಜ ಹೊರಟ್ಟಿ ಅವರ ಕೊಡುಗೆ ಅಪಾರವಾದದ್ದು, ಸತತ 8 ಬಾರಿ ಆಯ್ಕೆಯಾಗುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾರೆ. ಭವಿಷ್ಯದ ದಿನಗಳಲ್ಲಿ ಶಿಕ್ಷಕರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ವಿಶ್ವಾಸವಿದೆ ಎಂದರು.

‌ಡಿಡಿಪಿಐ ಬಿ.ಎಸ್. ಜಗದೀಶ್ವರ, ಹಾವೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಮೌನೇಶ್ ಬಡಿಗೇರ, ರಾಣೆಬೆನ್ನೂರು ಬಿಇಓ ಗುರುಪ್ರಸಾದ, ಪರಿಸರ ಪ್ರೇಮಿ ಮಾಧುರಿ ದೇವಧರ, ಹುಬ್ಬಳ್ಳಿಯ ಮಾಧ್ಯಮಿಕ ಶಾಲಾ ಕಾರ್ಯದರ್ಶಿ ಶಾಮ್ ಮಲ್ಲನಗೌಡ್ರ, ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ ಪ್ರಧಾನ ಕಾರ್ಯದರ್ಶಿ ಜಿ.ಆರ್ ಭಟ್, ಜಯಶ್ರೀ ಕಾಳಿಕಾರ, ಅಡಿಗ, ಎನ್.ಐ.ಇಚ್ಚಂಗಿ, ಪಿ.ಟಿ.ಕಾಮನಹಳ್ಳಿ, ಮೋಹನ್ ಮೆಣಸಿನಕಾಯಿ, ಗಣೇಶ್ ಪೂಜಾರ, ಕೆಂಚನಗೌಡ್ರ, ಕಸಾಪ ಜಿಲ್ಲಾಧ್ಯಕ್ಷ ಲಿಂಗಯ್ಯ ಹಿರೇಮಠ, ವಿಜಯೇಂದ್ರ ಯತ್ತಿನಹಳ್ಳಿ, ಎನ್.ಜಿ ಹಿರೇಮಠ, ಎನ್.ಎನ್ ಕುಂದೂರು ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಶಿಕ್ಷಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.