ಹಾವೇರಿ: ಜಿಲ್ಲೆಯ ಹಲವು ಕಡೆಗಳಲ್ಲಿ ಯೂರಿಯಾ ಗೊಬ್ಬರವನ್ನು ಅಕ್ರಮವಾಗಿ ದಾಸ್ತಾನು ಮಾಡಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಅವರು ಗುರುವಾರ ದಿಢೀರ್ ಪರಿಶೀಲನೆ ನಡೆಸಿದರು.
ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರ ಜೊತೆಯಲ್ಲಿ ಜಿಲ್ಲೆಯ ಹಲವು ಗೋದಾಮುಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ, ದಾಸ್ತಾನು ಬಗ್ಗೆ ಮಾಹಿತಿ ಪಡೆದುಕೊಂಡರು. ಪೂರೈಕೆ, ಸಂಗ್ರಹ ಹಾಗೂ ಮಾರಾಟದ ಬಗ್ಗೆ ದಾಖಲೆ ಸಮೇತ ವಿವರಣೆ ಪಡೆದರು.
ಜಿಲ್ಲೆಯಲ್ಲಿ ಯೂರಿಯಾ ಗೊಬ್ಬರದ ಅಭಾವ ಇರುವುದಾಗಿ ರೈತರು ದೂರುತ್ತಿದ್ದರು. ಕೆಲವರು ಯೂರಿಯಾವನ್ನು ಅಕ್ರಮವಾಗಿ ಖರೀದಿಸಿ ದಾಸ್ತಾನು ಇರಿಸಿ ದುಪ್ಪಟ್ಟು ಬೆಲೆಗೆ ಮಾರುತ್ತಿರುವ ಬಗ್ಗೆ ದೂರುಗಳಿದ್ದವು. ಹೀಗಾಗಿ, ಹಲವು ಗೋದಾಮುಗಳಲ್ಲಿ ದಿಢೀರ್ ಭೇಟಿ ನೀಡಿ ಪರಿಶೀಲಿಸಲಾಯಿತು’ ಎಂದು ಜಿಲ್ಲಾ ಮಟ್ಟದ ಅಧಿಕಾರಿಯೊಬ್ಬರು ಹೇಳಿದರು.
‘ಪರಿಶೀಲನೆ ಸಂದರ್ಭದಲ್ಲಿ ಯಾವುದೇ ಅಕ್ರಮ ದಾಸ್ತಾನು ಕಂಡುಬಂದಿಲ್ಲ. ಮುಂದಿನ ದಿನಗಳಲ್ಲಿ ಪುನಃ ದಿಢೀರ್ ಭೇಟಿ ಇರಲಿದೆ’ ಎಂದರು.
ಜಿಲ್ಲಾಧಿಕಾರಿ ಜೊತೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಲ್ಲಿಕಾರ್ಜುನ, ಹೆಚ್ಚುವರಿ ಎಸ್‌ಪಿ ಲಕ್ಷ್ಮಣ ಶಿರಕೋಳ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.