ADVERTISEMENT

ಬಡವರಿಗೆ ಪ್ಯಾಕೇಜ್‌: ಸಿ.ಎಂ. ಸಮಾಲೋಚನೆ

ಲಾಕ್‍ಡೌನ್ ವಿಸ್ತರಣೆ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ: ಗೃಹ ಸಚಿವ

​ಪ್ರಜಾವಾಣಿ ವಾರ್ತೆ
Published 17 ಮೇ 2021, 15:40 IST
Last Updated 17 ಮೇ 2021, 15:40 IST
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಶಿಗ್ಗಾವಿಯಿಂದ ವಿಡಿಯೊ ಸಂವಾದದಲ್ಲಿ ಭಾಗವಹಿಸಿದ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಜಿಲ್ಲೆಯ ಕೋವಿಡ್ ಸ್ಥಿತಿಗತಿ ಬಗ್ಗೆ ವಿವರ ನೀಡಿದರು 
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಶಿಗ್ಗಾವಿಯಿಂದ ವಿಡಿಯೊ ಸಂವಾದದಲ್ಲಿ ಭಾಗವಹಿಸಿದ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಜಿಲ್ಲೆಯ ಕೋವಿಡ್ ಸ್ಥಿತಿಗತಿ ಬಗ್ಗೆ ವಿವರ ನೀಡಿದರು    

ಹಾವೇರಿ: ‘ರಾಜ್ಯದಲ್ಲಿ ಜಾರಿಯಲ್ಲಿರುವ ಲಾಕ್‌ಡೌನ್‌ ವಿಸ್ತರಣೆಗೆ ಸಂಬಂಧಪಟ್ಟಂತೆ ಕೋವಿಡ್ ಕಾರ್ಯಪಡೆಯು ಸಂಪೂರ್ಣ ವಿವರವನ್ನು ಅಂಕಿ-ಅಂಶಗಳ ಸಮೇತ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಒಂದೆರಡು ದಿನಗಳಲ್ಲಿ ನೀಡಲಿದೆ. ಅದರ ಆಧಾರದ ಮೇಲೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳುತ್ತಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಸೋಮವಾರ ಶಿಗ್ಗಾವಿಯಿಂದ ವಿಡಿಯೊ ಸಂವಾದದಲ್ಲಿ ಭಾಗವಹಿಸಿ ಹಾವೇರಿ ಜಿಲ್ಲೆಯ ಕೋವಿಡ್ ಸ್ಥಿತಿಗತಿ ಕುರಿತು ವಿವರಿಸಿದ ನಂತರ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ಮುಖ್ಯಮಂತ್ರಿಯವರು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿ ಮತ್ತು ಮತ್ತು ಇತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದಿದ್ದಾರೆ.ಲಾಕ್‌ಡೌನ್‌ ಜಾರಿಯಾಗಿರುವ ಹಿನ್ನೆಲೆಯಲ್ಲಿ ಬಡವರಿಗೆ ಪ್ಯಾಕೇಜ್ ಘೋಷಣೆ ಸಂಬಂಧಪಟ್ಟಂತೆ ಸಿ.ಎಂ. ಆರ್ಥಿಕ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಅವರು ಹೇಳಿದರು.

ADVERTISEMENT

ಗ್ಲೋಬಲ್‌ ಟೆಂಡರ್‌

2 ಕೋಟಿ ಲಸಿಕೆಗಾಗಿ ಗ್ಲೋಬಲ್ ಟೆಂಡರ್ ಕರೆಯಲಾಗಿದೆ. ಅದು ಬಂದ ನಂತರ ಲಸಿಕೆ ಅಭಿಯಾನವನ್ನು ತೀವ್ರಗೊಳಿಸ ಲಾಗುವುದು. ಅವರು ಹೋಮ್‌ ಐಸೋಲೇಶನ್ ಆಗಿರುವ ಕೋವಿಡ್ ಸೋಂಕಿತರ ಮೇಲೆ ನಿಗಾ ಇರಿಸಲು ಸೂಚಿಸಲಾಗಿದೆ. ಸೋಂಕಿತರ ಆರೋಗ್ಯವನ್ನು ಗಮನಿಸಿ ಅವರನ್ನು ಕೋವಿಡ್ ಕೇರ್ ಸೆಂಟರ್ಗೆ‌ ಕರೆತರುವಂತೆ ಸೂಚಿಸಲಾಗಿದೆ. ಶಿಗ್ಗಾವಿ ತಾಲ್ಲೂಕು ಆಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ ನೂರಕ್ಕೂ ಹೆಚ್ಚು ಆಕ್ಸಿಜನ್ ವ್ಯವಸ್ಥೆ ಇರುವ ಹಾಸಿಗೆಗಳನ್ನು ಸಿದ್ಧಪಡಿಸುವಂತೆ ಸೂಚಿಸಲಾಗಿದೆ. ಸರ್ಕಾರದ ವತಿಯಿಂದ 25 ಆಕ್ಸಿಜನ್ ಕಾನ್ಸಂಟ್ರೇಟರ್‌ಗಳನ್ನು ತಾಲ್ಲೂಕು ಆಸ್ಪತ್ರೆಗೆ ಹಸ್ತಾಂತರಿಸಲಾಯಿತು ಎಂದು ಅವರು ತಿಳಿಸಿದರು.

ಆಕ್ಸಿಜನ್ ಪ್ರಮಾಣ ಹೆಚ್ಚಳಕ್ಕೆ ಮನವಿ

ಜಿಲ್ಲೆಗೆ ಎರಡು ಮೆಟ್ರಿಕ್ ಟನ್ ಹೆಚ್ಚುವರಿ ಆಕ್ಸಿಜನ್ ನಿರಂತರ ಪರೈಕೆಗೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿಕೊಳ್ಳಲಾಗಿದೆ. ಜಿಲ್ಲೆಗೆ 8.18 ಎಂ.ಟಿ. ಆಕ್ಸಿಜನ್ ಅವಶ್ಯಕತೆಯಿದ್ದು, ಜಿಲ್ಲೆಗೆ 6.5 ಕೆ.ಎಲ್ ಆಕ್ಸಿಜನ್ ಸರಬರಾಜಾಗುತ್ತಿದೆ. 2 ಕೆ.ಎಲ್. ಪ್ರಮಾಣದ ಆಕ್ಸಿಜನ್ ನಿರಂತರವಾಗಿ ಪೂರೈಕೆ ಮಾಡಿದರೆ ಯಾವುದೇ ತೊಂದರೆ ಯಾಗುವುದಿಲ್ಲ. ಇದರೊಂದಿಗೆ ಒಂದು ಡೆಡಿಕೆಟೆಡ್ ಆಕ್ಸಿಜನ್ ಟ್ಯಾಂಕರ್ ಒದಗಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ. ಸದ್ಯ ಆಕ್ಸಿಜನ್ ಹಾಗೂ ಈವರೆಗೆ ಆಕ್ಸಿಜನ್ ಹಾಗೂ ರೆಮ್‍ಡಿಸಿವಿರ್ ಕೊರತೆಯಾಗಿಲ್ಲ. ಕಳೆದ ಮೂರ್ನಾಲ್ಕು ದಿನದಿಂದ ದಿನಪ್ರತಿ ರೆಮ್‍ಡಿಸಿವಿರ್ ಸರಬರಾಜಾಗುತ್ತಿದೆ ಎಂದು ತಿಳಿಸಿದರು.

ಮರಣ ಪ್ರಮಾಣ ಏರಿಕೆ

ಜಿಲ್ಲೆಯಲ್ಲಿ ಪಾಜಿಟಿವ್ ಪ್ರಕರಣಗಳು ಕಡಿಮೆ ಇದ್ದು, ‘ಡೆತ್‌ ರೇಟ್’ ಹೆಚ್ಚಾಗಿದೆ. 141 ಜನ ಕೋವಿಡ್ ಕಾರಣದಿಂದ ಮರಣ ಹೊಂದಿವರ ಪೈಕಿ ಶೇ 70ರಷ್ಟು ಕೋಮಾರ್ಬಿಡಿಟಿ ಪ್ರಕರಣಗಳಾಗಿವೆ. ಈ ಹಿನ್ನೆಲೆಯಲ್ಲಿ ತಾಲ್ಲೂಕುವಾರು ವೈದ್ಯರ ತಂಡ ರಚಿಸಿ ಹೋಂ ಐಸೋಲೇಷನ್‍ನಲ್ಲಿ ಇರುವವರನ್ನು ಕಡ್ಡಾಯವಾಗಿ ತಪಾಸಣೆ ನಡೆಸಬೇಕು. ಐಸೋಲೇಷನ್‍ನಲ್ಲಿ ಇದ್ದವರಿಗೆ ಹೆಚ್ಚು ಸಂಖ್ಯೆಯಲ್ಲಿ ಔಷಧ ಕಿಟ್‍ಗಳನ್ನು ನೀಡಬೇಕು. ಒಂದು ವೇಳೆ ಸೋಂಕು ಉಲ್ಬಣವಾದಲ್ಲಿ ಕೋವಿಡ್ ಕೇರ್ ಸೆಂಟರ್ ಅಥವಾ ಆಸ್ಪತ್ರೆಗೆ ದಾಖಲಿಸಲು ಕ್ರಮವಹಿಸಬೇಕು ಎಂದು ಸಚಿವ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.

100 ಆಕ್ಸಿಜನ್ ಬೆಡ್ ಹೆಚ್ಚಳ

ಜಿಲ್ಲೆಯ ಎಲ್ಲ ತಾಲ್ಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಬೆಡ್‍ಗಳ ಸಂಖ್ಯೆ ಹೆಚ್ಚಳ ಮಾಡಲು ಸೂಚನೆ ನೀಡಲಾಗಿದೆ. 100 ಆಕ್ಸಿಜನ್ ಬೆಡ್‍ಗಳ ಸಂಖ್ಯೆ ಹೆಚ್ಚಳ ಮಾಡಲಾಗುವುದು. ಕೋವಿಡ್ ಪ್ರಮಾಣದಷ್ಟೇ ‘ಸಾರಿ’ ಪ್ರಕರಣಗಳಿಗೆ ಆಕ್ಸಿಜನ್ ವ್ಯವಸ್ಥೆ ಇರಿಸಲಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಕಡಿಮೆ ಇದೆ. ಆದರೆ ತಾಲ್ಲೂಕುವಾರು ಆಕ್ಸಿಜನ್ ಬೆಡ್‍ಗಳ ಹೆಚ್ಚಳ ಮಾಡಲು ಸೂಚನೆ ನೀಡಲಾಗಿದೆ ಎಂದು ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಲ್ಹಾದ ಜೋಶಿ, ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮೊಹಮ್ಮದ್‌ ರೋಶನ್‌, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ. ದೇವರಾಜು, ಹೆಚ್ಚುವರಿ ಜಿಲ್ಲಾಧಿಕಾರಿ ಯೋಗೇಶ್ವರ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಜಯಕುಮಾರ ಸಂತೋಷ್, ಸವಣೂರ ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪಿ.ಆರ್. ಹಾವನೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.