ADVERTISEMENT

ಹಾವೇರಿ | ಒಳ್ಳೆಯ ಕೆಲಸ ಮಾಡುವವರಿಗೆ ಮತ ಹಾಕಿ: ದೇವೇಂದ್ರಪ್ಪ ಎನ್.

​ಪ್ರಜಾವಾಣಿ ವಾರ್ತೆ
Published 26 ಜನವರಿ 2026, 4:47 IST
Last Updated 26 ಜನವರಿ 2026, 4:47 IST
ಹಾವೇರಿ ಜಿಲ್ಲಾ ಗುರುಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ‘ರಾಷ್ಟ್ರೀಯ ಮತದಾರರ ದಿನಾಚರಣೆ’ ಕಾರ್ಯಕ್ರಮದಲ್ಲಿ ಚುನಾವಣೆಯಲ್ಲಿ ಅತ್ಯುತ್ತಮ ಕೆಲಸ ಮಾಡಿದ ಅಧಿಕಾರಿಗಳನ್ನು ಸನ್ಮಾನಿಸಲಾಯಿತು
ಹಾವೇರಿ ಜಿಲ್ಲಾ ಗುರುಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ‘ರಾಷ್ಟ್ರೀಯ ಮತದಾರರ ದಿನಾಚರಣೆ’ ಕಾರ್ಯಕ್ರಮದಲ್ಲಿ ಚುನಾವಣೆಯಲ್ಲಿ ಅತ್ಯುತ್ತಮ ಕೆಲಸ ಮಾಡಿದ ಅಧಿಕಾರಿಗಳನ್ನು ಸನ್ಮಾನಿಸಲಾಯಿತು   

ಹಾವೇರಿ: ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಬಗ್ಗೆ ಯುವಜನತೆಯಲ್ಲಿ ಜಾಗೃತಿ ಮೂಡಿಸಬೇಕಾದ ಅಗತ್ಯವಿದೆ. ಯುವಜನತೆ ಮತದಾನ ಪ್ರಕ್ರಿಯೆಯಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕು. ಲೋಕಸಭೆ, ವಿಧಾನಸಭೆ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಸಮಾಜಕ್ಕೆ ಒಳ್ಳೆಯ ಕೆಲಸ ಮಾಡುವ ವ್ಯಕ್ತಿಗೆ ಮತ ಹಾಕಬೇಕು’ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರೂ ಆಗಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿರಾದಾರ ದೇವೇಂದ್ರಪ್ಪ ಎನ್. ಅವರು ಹೇಳಿದರು.

ನಗರದ ಜಿಲ್ಲಾ ಗುರುಭವನದಲ್ಲಿ ಚುನಾವಣಾ ಆಯೋಗ, ಜಿಲ್ಲಾಡಳಿತ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ‘ರಾಷ್ಟ್ರೀಯ ಮತದಾರರ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಮತದಾನ ಮಾಡಲು ಮೊದಲಿಗೆ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮುಖ್ಯವಾಗಿದೆ. ಈ ಹಿನ್ನಲೆಯಲ್ಲಿ 18 ವರ್ಷ ಪೂರೈಸಿದ ಎಲ್ಲರೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿಕೊಳ್ಳಬೇಕು. ಪ್ರಜಾಪ್ರಭುತ್ವ ನಮಗೆ ಹಕ್ಕು ಮತ್ತು ಕರ್ತವ್ಯಗಳನ್ನು ನೀಡಿದೆ. ಅವುಗಳ ಬಗ್ಗೆ ತಿಳಿದುಕೊಂಡು ಸದುಪಯೋಗಪಡೆದುಕೊಳ್ಳಬೇಕು’ ಎಂದರು.

ADVERTISEMENT

‘ಭಾರತ ಚುನಾವಣಾ ಆಯೋಗದ ಮಹತ್ವವೇನು ಎಂಬುದನ್ನು ಶೇಷನ್ ಅವರು ತಿಳಿಸಿಕೊಟ್ಟಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆ ಇರದಿದ್ದರೆ, ವ್ಯವಸ್ಥಿತ ಜೀವನ ನಡೆಸುವುದು ಕಷ್ಟವಾಗುತ್ತಿತ್ತು. ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ಯುವಜನತೆ ಪಾತ್ರ ಪ್ರಮುಖವಾಗಿದೆ. ವಿದ್ಯಾರ್ಥಿಗಳು ಜೀವನದಲ್ಲಿ ಬಸವಣ್ಣನವರ ವಚನ, ಡಿವಿಜಿಯವರ ಕಗ್ಗ, ಕುವೆಂಪು ಅವರ ಸಾಹಿತ್ಯ ಹಾಗೂ ಜಿ.ಎಸ್. ಶಿವರುದ್ರಪ್ಪ ಅವರ ಕವನಗಳ ಪುಸ್ತಕ ಓದಿ ಬದುಕು ರೂಪಿಸಿಕೊಳ್ಳಬೇಕು’ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾ ಎಸ್‌.ಪಿ. ಎಲ್‌.ವೈ. ಶಿರಕೋಳ ಮಾತನಾಡಿ, ‘ಇಂದಿನ ವಿದ್ಯಾರ್ಥಿಗಳು, ಬರುವ ದಿನಗಳಲ್ಲಿ ಉದ್ಯೋಗವಂತರಾಗಬಹುದು. ರಾಜಕೀಯಕ್ಕೂ ಬರಬಹುದು. ಆಗ ತಾವು ಯೋಗ್ಯ ರಾಜಕಾರಣಿಗಳಾಗಬೇಕು. 18 ವರ್ಷ ಪೂರೈಸಿದವರು, ಮೊದಲು ಮತದಾರರ ಪಟ್ಟಿಯಲ್ಲಿ ಹೆಸರು ನೊಂದಣಿ ಮಾಡಿಕೊಳ್ಳಬೇಕು. ಚುನಾವಣೆ ಸಮಯದಲ್ಲಿ ಯೋಗ್ಯ ವ್ಯಕ್ತಿಗೆ ಮತದಾನ ಮಾಡಬೇಕು. ಜಿಲ್ಲೆಯ ಯಾವುದೇ ಸ್ಥಳದಲ್ಲಿ ಗಲಾಟೆಗಳು ನಡೆಯುತ್ತಿದ್ದರೆ ಹಾಗೂ ತೊಂದರೆಯಾದರೆ 1098 ಹಾಗೂ 112 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬಹುದು’ ಎಂದರು.

ಅಧ್ಯಕ್ಷತೆ ವಹಿಸಿದ್ದ ಹೆಚ್ಚುವರಿ ಜಿಲ್ಲಾಧಿಕಾರಿ ಎಲ್. ನಾಗರಾಜ ಮಾತನಾಡಿ, ‘ಯುವ ಹಾಗೂ ಭಾವಿ ಮತದಾರರನ್ನು ಮತದಾನದ ಪ್ರಕ್ರಿಯೆ ಬಗ್ಗೆ ಜಾಗೃತಿ ಮೂಡಿಸುವುದು ಇಂದಿನ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಜಿಲ್ಲೆಯಲ್ಲಿ 6,84,459 ಪುರುಷ ಹಾಗೂ 6,69,002 ಮಹಿಳಾ ಮತದಾರರಿದ್ದಾರೆ. ಜಿಲ್ಲೆಯ ಜನಸಂಖ್ಯೆಗೆ ಮತದಾರರ ಅನುಪಾತ ಶೇ. 72ರಷ್ಟಿದೆ. ಲಿಂಗಾನುಪಾತ 977 ಇದೆ’ ಎಂದರು.

‘ಮತಗಟ್ಟೆ ಅಧಿಕಾರಿಗಳು ಹಾಗೂ ಚುನಾವಣಾ ಆ್ಯಪ್ ಮೂಲಕ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಿಕೊಳ್ಳಬಹುದು. ಚುನಾವಣೆ ಪ್ರಕ್ರಿಯೆಗಳು ವರ್ಷದ 12 ತಿಂಗಳು ನಿರಂತರ ನಡೆಯುತ್ತವೆ. ಆದರೆ, ಸಾರ್ವಜನಿಕರಿಗೆ ಚುನಾವಣೆ ಸಂದರ್ಭದಲ್ಲಿ ಮಾತ್ರ ಕಾಣುತ್ತದೆ. ಜಾತಿ, ಧರ್ಮ, ಪುರುಷ–ಮಹಿಳೆ ಎನ್ನದೇ ಎಲ್ಲರಿಗೂ ಮತದಾನದ ಸಮಾನ ಹಕ್ಕು ನೀಡಲಾಗಿದೆ’ ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯೂ ಆಗಿರುವ ನ್ಯಾಯಾಧೀಶರಾದ ಶ್ರೀಶೈಲಜಾ ಎಚ್.ವಿ., ಜಿ.ಪಂ. ಉಪ ಕಾರ್ಯದರ್ಶಿ ಪುನಿತ್, ಉಪ ವಿಭಾಗಾಧಿಕಾರಿ ಕಲ್ಯಾಣಿ ಕಾಂಬ್ಳೆ, ಡಿವೈಎಸ್‌ಪಿ ಗಿರೀಶ ತಳಕಟ್ಟಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಚಂದ್ರಪ್ಪ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮೋಹನ ದಂಡಿನ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಅಶೋಕ ಶಾಸ್ತ್ರಿ, ತಹಶೀಲ್ದಾರ ಶರಣಮ್ಮ, ಚುನಾವಣಾ ತಹಶೀಲ್ದಾರ ಅಮೃತಗೌಡ ಪಾಟೀಲ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ಪಾಟೀಲ ಇದ್ದರು.

ಜಾಗೃತಿ ಜಾಥಾ ಮತದಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ವಿಶೇಷ ಜಾಥಾ ನಡೆಸಲಾಯಿತು. ಹುತಾತ್ಮ ಮೈಲಾರ ಮಹದೇವ ವೃತ್ತದಿಂದ ಗುರುಭವನವರೆಗೂ ಮತದಾನ ಜಾಗೃತಿ ಜಾಥಾ ನಡೆಸಲಾಯಿತು. ಮತದಾರರ ದಿನಾಚರಣೆ ಅಂಗವಾಗಿ ಪ್ರೌಢಶಾಲೆ ಪದವಿ ಪೂರ್ವ ಹಾಗೂ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಪ್ರಬಂಧ ಭಿತ್ತಿಪತ್ರ ಹಾಗೂ ವಿವಿಧ ಸ್ಪರ್ಧೆಗಳ ವಿಜೇತರಿಗೆ ಕಾರ್ಯಕ್ರಮದಲ್ಲಿ ಪ್ರಮಾಣಪತ್ರ ವಿತರಿಸಲಾಯಿತು. ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆಯಾದ ಮತದಾರರಿಗೆ ಮತದಾನ ಗುರುತಿನ ಪತ್ರ ವಿತರಿಸಲಾಯಿತು. ಅತ್ಯುತ್ತಮ ಕಾರ್ಯನಿರ್ವಹಿಸಿದ ಇ.ಎಲ್.ಸಿ. ನೋಡಲ್ ಅಧಿಕಾರಿಗಳನ್ನು ಸನ್ಮಾನಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.