ADVERTISEMENT

ಕೋವಿಡ್‌ ಗೆದ್ದು, ಚುನಾವಣೆ ಯಶಸ್ವಿಗೊಳಿಸಿ

ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ: ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2020, 15:25 IST
Last Updated 21 ಅಕ್ಟೋಬರ್ 2020, 15:25 IST
ಸಂಜಯ ಶೆಟ್ಟೆಣ್ಣವರ, ಜಿಲ್ಲಾಧಿಕಾರಿ
ಸಂಜಯ ಶೆಟ್ಟೆಣ್ಣವರ, ಜಿಲ್ಲಾಧಿಕಾರಿ   

ಹಾವೇರಿ: ‘ಕೋವಿಡ್‍ನಂತಹ ಸಂದಿಗ್ಧ ಸಂದರ್ಭದಲ್ಲಿ ನಡೆಯುತ್ತಿರುವ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ನಿಯೋಜಿತ ಅಧಿಕಾರಿಗಳು, ಸಿಬ್ಬಂದಿ ಹಾಗೂ ಮತದಾರರ ಆರೋಗ್ಯ ರಕ್ಷಣೆಗಾಗಿ ಪ್ರತಿ ಮತಗಟ್ಟೆಗಳಲ್ಲಿ ಜಿಲ್ಲಾಡಳಿತ ಎಲ್ಲ ಮುನ್ನೆಚ್ಚರಿಕೆ ಕೈಗೊಂಡಿದೆ’ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಹೇಳಿದರು.

ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ ಮತದಾನದ ದಿನ ಕೋವಿಡ್ ಮಾರ್ಗಸೂಚಿಗಳ ಕುರಿತಂತೆ ತಹಶೀಲ್ದಾರ್, ತಾಲ್ಲೂಕು ಆರೋಗ್ಯಾಧಿಕಾರಿಗಳು, ಶಿಕ್ಷಣಾಧಿಕಾರಿಗಳು, ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಚುನಾವಣೆಗೆ ನಿಯೋಜಿತ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾರದರ್ಶಕ ಹಾಗೂ ಸುಗಮ ಚುನಾವಣೆ ನಡೆಸಲು ಬದ್ಧರಾಗಬೇಕು, ತಮ್ಮ ಆರೋಗ್ಯದ ಮುನ್ನೆಚ್ಚರಿಕೆ ವಹಿಸಿ ಕೋವಿಡ್ ಗೆಲ್ಲುವುದರೊಂದಿಗೆ ಚುನಾವಣೆ ಯಶಸ್ವಿಗೊಳಿಸಿ, ತಾವೆಲ್ಲ ಪ್ರಾಮಾಣಿಕವಾಗಿ ಕಾರ್ಯ ಹಾಗೂ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ ಎಂದು ಸಲಹೆ ನೀಡಿದರು.

ADVERTISEMENT

ಮಾರ್ಗಸೂಚಿ ಪಾಲಿಸಿ:ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಯೋಗೇಶ್ವರ ಅವರು ಚುನಾವಣಾ ಆಯೋಗದ ಕೋವಿಡ್ ಮಾರ್ಗಸೂಚಿಗಳ ಅನ್ವಯ ವಿವಿಧ ಹಂತದ ಸಿಬ್ಬಂದಿ ನಿರ್ವಹಿಸಬೇಕಾದ ಕರ್ತವ್ಯಗಳ ಬಗ್ಗೆ ವಿವರಿಸಿದರು. ಮತಗಟ್ಟೆ ಮುನ್ನಾ ದಿನ ಹಾಗೂ ಮತದಾನದ ದಿನ ಮತಗಟ್ಟೆಯಲ್ಲಿ ವಹಿಸಬೇಕಾದ ಕ್ರಮಗಳ ಕುರಿತಂತೆ ವಿವಿರಿಸಿದರು.

ಮತಗಟ್ಟೆಗಳನ್ನು ಪೂರ್ಣ ಸ್ವಚ್ಛಗೊಳಿಸಿ ಸ್ಯಾನಿಟೈಜೇಶನ್ ಮಾಡಬೇಕು, ಮತದಾರರು ಹಾಗೂ ಮತದಾನ ಸಿಬ್ಬಂದಿ ಕಡ್ಡಾಯವಾಗಿ ಕನಿಷ್ಟ ಆರು ಅಡಿ ಅಂತರ ಕಾಪಾಡಬೇಕು, ಈ ನಿಟ್ಟಿನಲ್ಲಿ ಮಾರ್ಕಿಂಗ್ ವ್ಯವಸ್ಥೆ ಮಾಡಬೇಕು. ಥರ್ಮಲ್ ಗನ್, ಮಾಸ್ಕ್ ಹಾಗೂ ಗ್ಲೌಸ್ ಧರಿಸಬೇಕು, ಆರೋಗ್ಯ ಸೇತು ಆ್ಯಪ್‌ ಡೌನ್‍ಲೋಡ್ ಮಾಡಿಕೊಳ್ಳಬೇಕು. ಮಾಸ್ಕ್ ಇಲ್ಲದವರಿಗೆ ಮಾಸ್ಕ್ ವಿತರಿಸಬೇಕು, ಪ್ರತಿ ಮತದಾರರಿಗೆ ಕೊಠಡಿ ಪ್ರವೇಶ ಮುನ್ನ ಪಲ್ಸ್ ಆಕ್ಸಿಮೀಟರ್ ಮೂಲಕ ಜ್ವರ ತಪಾಸಣೆ ನಡೆಸಬೇಕು ಎಂದು ಸೂಚನೆ ನೀಡಿದರು.

ಉಪವಿಭಾಗಾಧಿಕಾರಿಗಳಾದ ಅನ್ನಪೂರ್ಣ ಮುದಕಮ್ಮನವರ, ಡಾ.ದಿಲೀಷ್ ಶಶಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಂದ್ರ ದೊಡ್ಡಮನಿ ವಿವಿಧ ತಾಲ್ಲೂಕು ತಹಶೀಲ್ದಾರ್‌ಗಳು, ತಾಲ್ಲೂಕು ಆರೋಗ್ಯಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.