ADVERTISEMENT

ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಶ್ರಮಿಸಿ

ಕಾರ್ಯಾಗಾರ ಉದ್ಘಾಟಿಸಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಏಕನಾಥ ಭಾನುವಳ್ಳಿ ಸಲಹೆ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2021, 15:55 IST
Last Updated 10 ಫೆಬ್ರುವರಿ 2021, 15:55 IST
ಹಾವೇರಿಯ ಗುರುಭವನದಲ್ಲಿ ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆ ಕುರಿತು ಪ್ರೌಢಶಾಲಾ ಮುಖ್ಯಶಿಕ್ಷಕರಿಗೆ ಬುಧವಾರ ಆಯೋಜಿಸಿದ್ದ ಕಾರ್ಯಾಗಾರವನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಏಕನಾಥ ಬಾನುವಳ್ಳಿ ಉದ್ಘಾಟಿಸಿದರು 
ಹಾವೇರಿಯ ಗುರುಭವನದಲ್ಲಿ ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆ ಕುರಿತು ಪ್ರೌಢಶಾಲಾ ಮುಖ್ಯಶಿಕ್ಷಕರಿಗೆ ಬುಧವಾರ ಆಯೋಜಿಸಿದ್ದ ಕಾರ್ಯಾಗಾರವನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಏಕನಾಥ ಬಾನುವಳ್ಳಿ ಉದ್ಘಾಟಿಸಿದರು    

ಹಾವೇರಿ: ‘ಕೋವಿಡ್‍ನಿಂದಾಗಿ ವಿದ್ಯಾರ್ಥಿಗಳು ಒಂಬತ್ತು ತಿಂಗಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಈ ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಸುಧಾರಿಸುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ. ಜಿಲ್ಲೆಯ ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆ ನಿಟ್ಟಿನಲ್ಲಿ ಎಲ್ಲರೂ ಒಟ್ಟಾಗಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಏಕನಾಥ ಭಾನುವಳ್ಳಿ ಹೇಳಿದರು.

ನಗರದ ಗುರುಭವನದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಎಸ್.ಎಸ್.ಎಲ್.ಸಿ. ಫಲಿತಾಂಶದ ಸುಧಾರಣೆ ಕುರಿತು ಪ್ರೌಢಶಾಲಾ ಮುಖ್ಯಶಿಕ್ಷಕರಿಗೆ ಆಯೋಜಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ರಜೆ ನೀಡಬೇಡಿ:‘ಕೋವಿಡ್ ಹಿನ್ನೆಲೆಯಲ್ಲಿ ತರಗತಿಗಳು ನಡೆದಿಲ್ಲ. ಇಂತಹ ಸಂದರ್ಭದಲ್ಲಿ ಜಾತ್ರೆ ಹಾಗೂ ಅನಗತ್ಯ ಸಂದರ್ಭಗಳಲ್ಲಿ ಶಾಲೆಗಳಿಗೆ ರಜೆ ನೀಡಿದರೆ ವಿದ್ಯಾರ್ಥಿಗಳ ಕಲಿಕೆಗೆ ಹಿನ್ನೆಡೆ ಉಂಟಾಗುತ್ತದೆ. ಹಾಗಾಗಿ ಶಾಲೆಗಳಿಗೆ ಸಣ್ಣಪುಟ್ಟ ಕಾರಣಗಳಿಗೆ ರಜೆ ನೀಡಬೇಡಿ. ಒಂದು ವೇಳೆ ರಜೆ ನೀಡಿದರೆ ಪರ್ಯಾಯವಾಗಿ ಭಾನುವಾರ ಶಾಲೆ ನಡೆಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸಲಹೆ ನೀಡಿದರು.

ADVERTISEMENT

ಗುಣಾತ್ಮಕ ಶಿಕ್ಷಣ ನೀಡಿ:ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಮಾತನಾಡಿ, ‘ಶಿಕ್ಷಣ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಉತ್ತಮ ಸಮಾಜ ನಿರ್ಮಾಣ ಮಾಡಬೇಕಾಗಿದೆ. ಶಿಕ್ಷಕರು ಮಕ್ಕಳಿಗೆ ಗುಣಾತ್ಮಕ ಕಲಿಕೆಗೆ ಮುಂದಾಗಬೇಕು. ಸರ್ಕಾರಿ ಶಾಲೆಗಳಲ್ಲಿ ಮೊದಲಿಗಿಂತ ಈಗ ವ್ಯವಸ್ಥೆ ಸುಧಾರಿಸಿದೆ. ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಬೇಕು, ಶಿಕ್ಷಣದ ಕಡೆಗೆ ಮಕ್ಕಳನ್ನು ಆಕರ್ಷಿತರನ್ನಾಗಿ ಮಾಡಬೇಕು’ ಎಂದು ಸಲಹೆ ನೀಡಿದರು.

ಡಿಡಿಪಿಐ ಅಂದಾನೆಪ್ಪ ವಡಗೇರಿ ಅವರು ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಹಾಕಿಕೊಂಡ ರೂಪರೇಷೆಗಳ ತಿಳಿಸಿದರು. ಶಿಕ್ಷಕರು ಇನ್ನುಮುಂದೆ ರಜೆ ಪಡೆಯದೇ ಬೋಧನೆಗೆ ವಿಶೇಷ ಒತ್ತು ನೀಡಬೇಕು. ಸಾಧ್ಯವಾದರೇ ರಜೆ ದಿನಗಳಲ್ಲಿ ವಿಶೇಷ ತರಗತಿ ನಡೆಸುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಡಯಟ್ ಉಪನಿರ್ದೇಶಕ ಡಿ.ಎಂ.ಬಸವರಾಜ, ಡಯಟ್ ಹಿರಿಯ ಪ್ರಾಚಾರ್ಯ ಖಾಜಿ, ಅಕ್ಷರ ದಾಸೋಹ ಅಧಿಕಾರಿ ಅಡಿಗ, ಸುನಿತಾ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಬೆನಕಪ್ಪ, ಎಂ.ಎಚ್.ಪಾಟೀಲ, ಚಿಕ್ಕಮಠ, ಶ್ರೀನಿವಾಸ, ಗುರುಪ್ರಸಾದ ಹಾಗೂ ಸಿದ್ದಲಿಂಗಪ್ಪ, ಜಿಲ್ಲೆಯ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಮುಖ್ಯಸ್ಥರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.