ADVERTISEMENT

ಮಹಿಳಾ ಉದ್ಯಮಿಗಳಿಗೆ ಶೇ 35ರಷ್ಟು ಸಹಾಯಧನ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2017, 7:09 IST
Last Updated 29 ಅಕ್ಟೋಬರ್ 2017, 7:09 IST

ಕಲಬುರ್ಗಿ: ‘ಮಹಿಳಾ ಉದ್ಯಮಿಗಳಿಗೆ ಪ್ರೋತ್ಸಾಹ ನೀಡಲು ಶೇ 35ರಿಂದ 40ರಷ್ಟು ಸಹಾಯಧನ ನೀಡಲಾಗುತ್ತಿದೆ’ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಆರ್‌.ವಿ.ದೇಶಪಾಂಡೆ ಹೇಳಿದರು. ಇಲ್ಲಿನ ಹೈದರಾಬಾದ್ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಎಚ್‌ಕೆಸಿಸಿಐ) ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಮಹಿಳಾ ಉದ್ಯಮಶೀಲತಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಸಾಮಾನ್ಯ ಮಹಿಳೆಯರಿಗೆ ಶೇ 35 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮಹಿಳೆಯರಿಗೆ ಶೇ 40ರಷ್ಟು ಸಹಾಯಧನ ನೀಡಲಾಗುತ್ತಿದೆ. ಕಲಬುರ್ಗಿ ಜಿಲ್ಲೆಯಲ್ಲಿ 200 ಮಹಿಳೆಯರು ಉದ್ಯಿಮೆ ಆರಂಭಿಸಲು ಹೆಸರು ನೋಂದಾಯಿಸಿಕೊಂಡಿದ್ದಾರೆ. ಇವರಿಗಾಗಿ ನಂದೂರ–ಕೆಸರಟಗಿ ಕೈಗಾರಿಕಾ ಪ್ರದೇಶದಲ್ಲಿ 50 ಎಕರೆ ಜಾಗ ಮೀಸಲಿರಿಸಲಾಗಿದೆ. 58 ಮಹಿಳೆಯರಿಗೆ ನಿವೇಶನದ ಹಕ್ಕುಪತ್ರ ವಿತರಿಸಲಾಗಿದೆ’ ಎಂದು ತಿಳಿಸಿದರು.

‘ಮಹಿಳಾ ಪಾರ್ಕ್‌ಗೆ ₹7.31 ಕೋಟಿ ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ. ಕೈಗಾರಿಕೆ ಆರಂಭಿಸುವುದು ಕಷ್ಟದ ಕೆಲಸ. ಹಾಗಂತ ಮಹಿಳೆಯರು ಹಿಂಜರಿಯಬಾರದು. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳನ್ನು ಆರಂಭಿಸುವುದರಿಂದ ಮಹಿಳೆಯರು ಆರ್ಥಿಕವಾಗಿ ಸಬಲರಾಗಬಹುದು. ಜಿಲ್ಲೆಯಲ್ಲಿ 200 ಮಹಿಳೆಯರು ಉದ್ಯಮ ಆರಂಭಿಸಲು ಮುಂದೆ ಬಂದಿರುವುದು ಉತ್ತಮ ಬೆಳವಣಿಗೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ADVERTISEMENT

‘ಹಿಂದುಳಿದ ಪ್ರದೇಶದ ಮಹಿಳಾ ಉದ್ಯಮಿಗಳಿಗೆ ಹೆಚ್ಚು ಉತ್ತೇಜನ ನೀಡಬೇಕು ಎಂಬುದು ನಮ್ಮ ಸರ್ಕಾರದ ಆಶಯವಾಗಿದೆ. ಕಡಿಮೆ ಬೆಲೆಯಲ್ಲಿ ನಿವೇಶನ ಹಂಚಿಕೆ, ಬ್ಯಾಂಕ್ ಸಾಲಸೌಲಭ್ಯ ಹಾಗೂ ಸಹಾಯಧನ ನೀಡುವ ಮೂಲಕ ಅವರನ್ನು ಕೈಗಾರಿಕೆಗಳತ್ತ ಆಕರ್ಷಿಸಲಾಗುತ್ತಿದೆ. ನವೋದ್ಯಮ ಸ್ಥಾಪಿಸುವ ಮಹಿಳೆಯರಿಗಾಗಿ ಐಟಿ ಬಿಟಿ ಇಲಾಖೆಯಿಂದ ₹10 ಕೋಟಿ ಆರ್ಥಿಕ ನೆರವು ನೀಡಲಾಗುತ್ತಿದೆ. ಯುವ ಉದ್ಯಮಿಗಳು ಇದರ ಸದುಪಯೋಗಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.

‘ಬೆಂಗಳೂರಿನಲ್ಲಿ ಮಹಿಳಾ ಉದ್ಯಮಿಗಳು ಬಹಳಷ್ಟು ಸಂಖ್ಯೆಯಲ್ಲಿದ್ದಾರೆ. ಕಿರಣ್ ಮಜುಂದಾರ್‌ ಷಾ ಅವರು ಇಡೀ ವಿಶ್ವದಲ್ಲಿ ನಂ.1 ಉದ್ಯಮಿ ಎಂದು ಗುರುತಿಸಿಕೊಂಡಿದ್ದಾರೆ. ಅವರಂತೆಯೇ ಎಲ್ಲರೂ ಸಾಧನೆ ಮಾಡಬೇಕು. ಸರ್ಕಾರ ಎಲ್ಲ ರೀತಿಯ ನೆರವು ನೀಡಲು ಬದ್ಧವಿದೆ’ ಎಂದು ತಿಳಿಸಿದರು.

ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಐಟಿ ಬಿಟಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ, ಶಾಸಕರಾದ ಡಾ. ಉಮೇಶ ಜಾಧವ್, ಡಾ. ಅಜಯಸಿಂಗ್, ದತ್ತಾತ್ರೇಯ ಪಾಟೀಲ ರೇವೂರ, ಮೇಯರ್ ಶರಣಕುಮಾರ ಮೋದಿ, ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಿ.ವಿ.ಪ್ರಸಾದ್, ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್, ಎಚ್‌ಕೆಸಿಸಿಐ ಅಧ್ಯಕ್ಷ ಸೋಮಶೇಖರ ಟೆಂಗಳಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ದೊಡ್ಡಬಸವರಾಜ ಇದ್ದರು. ಕಲಬುರ್ಗಿ ಲೇಡಿಸ್ ಅಸೋಸಿಯೇಷನ್ ಮ್ಯಾನುಫ್ಯಾಕ್ಚರರ್ಸ್‌ ಪಾರ್ಕ್ (ಕೆ-ಲ್ಯಾಂಪ್) ಅಧ್ಯಕ್ಷೆ ಜ್ಯೋತಿ ಕಾಡಾದಿ ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.