ADVERTISEMENT

ಸರ್ವರಿಗೂ ಆರೋಗ್ಯ ಸರ್ಕಾರದ ಆಶಯ

ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2016, 6:58 IST
Last Updated 9 ಆಗಸ್ಟ್ 2016, 6:58 IST
ಕಲಬುರ್ಗಿ ತಾಲ್ಲೂಕಿನ ಕಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ ಉದ್ಘಾಟಿಸಿದರು
ಕಲಬುರ್ಗಿ ತಾಲ್ಲೂಕಿನ ಕಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ ಉದ್ಘಾಟಿಸಿದರು   

ಕಲಬುರ್ಗಿ: ಸರ್ವರಿಗೂ ಆರೋಗ್ಯ ಕಲ್ಪಿಸುವುದು ಮತ್ತು ಹಸಿವು ಮುಕ್ತ ರಾಜ್ಯ ಮಾಡುವುದು ರಾಜ್ಯ ಸರ್ಕಾರದ ಮಹತ್ತರ ಆಶಯವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಹೇಳಿದರು.

ತಾಲ್ಲೂಕಿನ ಕಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪರಿಶಿಷ್ಟ ಸಮುದಾಯದವರಿಗಾಗಿ ಸೋಮವಾರ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲಾಸ್ಪತ್ರೆ ಮತ್ತು ಜಯದೇವ ಹೃದ್ರೋಗ ಆಸ್ಪತ್ರೆಗಳಲ್ಲಿ ವಿವಿಧ ಕಾಯಿಲೆಗಳಿಗೆ ನೀಡಲಾಗುತ್ತಿರುವ ಚಿಕಿತ್ಸೆಯ ಬಗ್ಗೆ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಎಲ್ಲ ವೈದ್ಯರು, ಆರೋಗ್ಯ ಮತ್ತು ಆಶಾ ಕಾರ್ಯಕರ್ತರು ಜನರಿಗೆ ಸೂಕ್ತ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಎರಡು ತಿಂಗಳಲ್ಲಿ ಕಿದ್ವಾಯಿ ಸ್ಮಾರಕ ಗ್ರಂಥಿ ಕ್ಯಾನ್ಸರ್ ಆಸ್ಪತ್ರೆ ಸಹ ಕಲಬುರ್ಗಿಯಲ್ಲಿ ಆರಂಭವಾಗಲಿದೆ. ಬಡವರ ಆರೋಗ್ಯ ರಕ್ಷಣೆಗಾಗಿ ಹಮ್ಮಿಕೊಂಡ ಎಲ್ಲ ಯೋಜನೆಗಳನ್ನು ಗ್ರಾಮೀಣ ಭಾಗದ ಜನರಿಗೆ ತಲುಪಿಸುವ ಮಹತ್ತರ ಜವಾಬ್ದಾರಿ ಆರೋಗ್ಯ ಇಲಾಖೆಯ ವೈದ್ಯರ ಹಾಗೂ ಎಲ್ಲ ಕಾರ್ಯಕರ್ತರ ಮೇಲಿದೆ. ಜಿಲ್ಲೆಯಲ್ಲಿನ ಜಯದೇವ ಹೃದ್ರೋಗ ಮತ್ತು ಕಿದ್ವಾಯಿ ಆಸ್ಪತ್ರೆಗಳಲ್ಲಿ ಎಲ್ಲಾ ಬಿಪಿಎಲ್‌ ಕಾರ್ಡುದಾರರಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತದೆ ಎಂದು ಹೇಳಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸದೀಯ ಕಾರ್ಯದರ್ಶಿ ಡಾ. ಉಮೇಶ ಜಾಧವ ಮಾತನಾಡಿ, ಆರೋಗ್ಯ ಶಿಬಿರ ಒಂದು ದಿನಕ್ಕೆ ಸೀಮಿತವಾಗದೆ ನಿರಂತರವಾಗಿ ನಡೆಯಬೇಕು.

ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪ ಯೋಜನೆಯ ಅನುದಾನದಿಂದ ಚಿಂಚೋಳಿ ತಾಲ್ಲೂಕಿನಲ್ಲಿ ಸಂಚಾರಿ ಆರೋಗ್ಯ ಘಟಕ ಸೇವೆ ಈಗಾಗಲೇ ಪ್ರಾರಂಭಿಸಿದ್ದು, ಚಿತ್ತಾಪುರ ತಾಲ್ಲೂಕಿನಲ್ಲೂ ಈ ಸೇವೆ ಇಷ್ಟರಲ್ಲೇ ಪ್ರಾರಂಭವಾಗಲಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಜನರು ಎದುರಿಸುತ್ತಿರುವ ಆರೋಗ್ಯ ಸಮಸ್ಯೆಗಳ ತೀವ್ರ ಪರಿಹಾರಕ್ಕೆ ಆರೋಗ್ಯಾಧಿಕಾರಿ ಹಾಗೂ ಎಲ್ಲ ಸಿಬ್ಬಂದಿ ಕ್ರಿಯಾಶೀಲರಾಗಿ ಕೆಲಸ ಮಾಡಬೇಕು ಎಂದು ಸೂಚಿಸಿದರು.

ಶಾಸಕ ಜಿ. ರಾಮಕೃಷ್ಣ ಅಧ್ಯಕ್ಷತೆ ವಹಿಸಿದ್ದರು.  ಜಿಲ್ಲಾಧಿಕಾರಿ ಉಜ್ವಲಕುಮಾರ್ ಘೋಷ್, ವೈಜನಾಥ ತಡಕಲ್, ಕಮಲಾಬಾಯಿ ಚಿಕ್ಕೇಗೌಡ, ಗ್ರಾಮ ಪಂಚಾಯಿತಿ ಅಧ್ಯಕ್ಷ ಅಬ್ದುಲ್ ಸತ್ತಾರ್, ಬಾಬಾ ಸೇಟ್ ಚವಾಣ್, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ನೋಡಲ್ ಅಧಿಕಾರಿ ಡಾ. ಕೋರಧಾನ್ಯ ಮಠ ಇದ್ದರು.  ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಿವರಾಜ ಸಜ್ಜನಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.