ADVERTISEMENT

10 ಸಾವಿರ ಶಿಕ್ಷಕರ ನೇಮಕಾತಿಗೆ ಕ್ರಮ: ಸಚಿವ ಮಧು ಬಂಗಾರಪ್ಪ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2024, 0:49 IST
Last Updated 9 ಮಾರ್ಚ್ 2024, 0:49 IST
ಮಧು ಬಂಗಾರಪ್ಪ
ಮಧು ಬಂಗಾರಪ್ಪ   

ಕಲಬುರಗಿ: ‘ರಾಜ್ಯದಲ್ಲಿ ಶೀಘ್ರದಲ್ಲೇ ಮತ್ತೆ 10 ಸಾವಿರ ಶಿಕ್ಷಕರ ನೇಮಕಾತಿಗೆ ಅನುಮೋದನೆ ಕೋರಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಿದ್ದು, ಅನುಮೋದನೆ ದೊರೆತ ತಕ್ಷಣ ನೇಮಿಸಲು ಕ್ರಮಕೈಗೊಳ್ಳಲಾಗುವುದು’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಕಳೆದ ವರ್ಷ 14 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿತ್ತು ಎಂದು ತಿಳಿಸಿದರು.

ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸದ್ಯ, ಖಾಲಿ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಬೋಧನೆಗೆ ಯಾವುದೇ ಸಮಸ್ಯೆ ಇಲ್ಲ. ಉಳಿದ ಹುದ್ದೆಗಳನ್ನು ಹಂತ–ಹಂತವಾಗಿ ಭರ್ತಿ ಮಾಡಲಾಗುವುದು’ ಎಂದರು.

ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಸರಾಸರಿ ನಾಲ್ಕು ಪಬ್ಲಿಕ್ ಶಾಲೆಗಳನ್ನು ಆರಂಭಿಸುವ ಗುರಿ ಇದೆ. ಶಿಕ್ಷಣ ಇಲಾಖೆಗೆ ಈ ಬಾರಿ ಬಜೆಟ್‌ನಲ್ಲಿ ₹ 44,400 ಕೋಟಿ ಒದಗಿಸಲಾಗಿದೆ. ಹೆಚ್ಚುವರಿ ಹಣ ದೊರೆತಿದ್ದು, ಶಾಲೆಗಳ ಶಿಥಿಲ ಕಟ್ಟಡಗಳನ್ನು ಉತ್ತಮಪಡಿಸಲಾಗುವುದು’ ಎಂದರು.

ADVERTISEMENT

ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯು ವಿದ್ಯಾರ್ಥಿಗಳು ಶೈಕ್ಷಣಿಕ ವರ್ಷದಲ್ಲಿ ಮೂರು ಬಾರಿ ಪರೀಕ್ಷೆ ಬರೆಯುವುದನ್ನು ಸಮರ್ಥಿಸಿಕೊಂಡ ಸಚಿವರು, ‘ಉತ್ತಮ ಅಂಕ ಹೊಂದಲು ಮತ್ತು ಉತ್ತೀರ್ಣರಾಗಿ ಮುಂದಿನ ತರಗತಿಗೆ ಪ್ರವೇಶ ಪಡೆಯಲು ಅನುಕೂಲವಾಗಲಿ ಎಂದು ಈ ಪದ್ಧತಿ ಜಾರಿಗೆ ತರಲಾಗಿದೆ. ಮಕ್ಕಳಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.