ADVERTISEMENT

ಕಲಬುರ್ಗಿ: 11ರಂದು ಕಾಂಗ್ರೆಸ್ ಕಾರ್ಯಕರ್ತರ ಸಭೆ

​ಪ್ರಜಾವಾಣಿ ವಾರ್ತೆ
Published 9 ಜನವರಿ 2018, 5:47 IST
Last Updated 9 ಜನವರಿ 2018, 5:47 IST
ಕಲಬುರ್ಗಿ: 11ರಂದು ಕಾಂಗ್ರೆಸ್ ಕಾರ್ಯಕರ್ತರ ಸಭೆ
ಕಲಬುರ್ಗಿ: 11ರಂದು ಕಾಂಗ್ರೆಸ್ ಕಾರ್ಯಕರ್ತರ ಸಭೆ   

ಕಲಬುರ್ಗಿ: ಕಲಬುರ್ಗಿ ಗ್ರಾಮೀಣ ಮತಕ್ಷೇತ್ರ ವ್ಯಾಪ್ತಿಯ ಸಿರಗಾಪುರ ಕ್ರಾಸ್ ಬಳಿ ಜ.11ರಂದು ಮಧ್ಯಾಹ್ನ 12ಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಹೇಳಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಾ. ಜಿ.ಪರಮೇಶ್ವರ, ಸಂಸದ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ ಭಾಗವಹಿಸುವರು ಎಂದರು.

ಮಧ್ಯಾಹ್ನ 2.30ಕ್ಕೆ ಇಲ್ಲಿನ ವೀರಶೈವ ಕಲ್ಯಾಣ ಮಂಟಪ ಎದುರು ಕಲಬುರ್ಗಿ ಉತ್ತರ ಮತ್ತು ದಕ್ಷಿಣ ಮತಕ್ಷೇತ್ರಗಳ ಕಾರ್ಯಕರ್ತರ ಸಭೆ ನಡೆಯಲಿದೆ ಎಂದು ತಿಳಿಸಿದರು.

ADVERTISEMENT

ನಮ್ಮ ಸರ್ಕಾರ ನುಡಿದಂತೆ ನಡೆದಿದೆ. 2013ರ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ್ದ ಎಲ್ಲ ಭರವಸೆಗಳನ್ನು ಈಡೇರಿಸಿದ್ದೇವೆ. ಪರಮೇಶ್ವರ ಅವರು ಈ ಬಾರಿಯೂ ಅಧ್ಯಕ್ಷರಾಗಿ ಮುಂದುವರಿಯುತ್ತಿದ್ದಾರೆ. ಕೆಪಿಸಿಸಿ ಚುಣಾವಣೆ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಎಂ.ವೀರಪ್ಪ ಮೊಯಿಲಿ ನಗರಕ್ಕೆ ಭೇಟಿ ನೀಡಿ ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಹೀಗಾಗಿ ಈ ಬಾರಿಯೂ ನಮ್ಮ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಸಾಕಷ್ಟು ಅಭ್ಯರ್ಥಿಗಳು ಚುನಾವಣಾ ಆಕಾಂಕ್ಷಿಗಳಾಗಿದ್ದಾರೆ. ಯಾರಿಗೆ ಟಿಕೆಟ್ ಕೊಡಬೇಕು ಎಂಬುದನ್ನು ಪಕ್ಷ ತೀರ್ಮಾನಿಸಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಜಿಲ್ಲೆಯಾದ್ಯಂತ 113 ತೊಗರಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಹೆಸರು ನೋಂದಣಿಗೆ ಜ.14 ಕೊನೆಯ ದಿನವಾಗಿದೆ. ಈ ದಿನಾಂಕವನ್ನು ವಿಸ್ತರಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗುವುದು. ಪಹಣಿ ಪಡೆಯಲು ರೈತರು ಪರದಾಡುತ್ತಿರುವುದು ಗಮನಕ್ಕೆ ಬಂದಿದ್ದು, ಈ ಬಗ್ಗೆ ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರರಿಗೆ ಸೂಚಿಸಲಾಗುವುದು ಎಂದರು.

ವೈದ್ಯರ ಮಗ ವೈದ್ಯ, ಎಂಜಿನಿಯರ್ ಮಗ ಎಂಜಿನಿಯರ್ ಆದಂತೆ ರಾಜಕಾರಣದಲ್ಲೂ ಕುಟುಂಬ ರಾಜಕಾರಣ ಸಾಮಾನ್ಯ ಎಂಬಂತಾಗಿದೆ. ಪಕ್ಷದಲ್ಲಿ ಎಲ್ಲರಿಗೂ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು.

ದಕ್ಷ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ವರ್ಗಾವಣೆ ಸಾಮಾನ್ಯ. ಮೇಲಾಧಿಕಾರುಗಳು ಈ ಬಗ್ಗೆ ತೀರ್ಮಾನ ಕೈಗೊಳ್ಳುತ್ತದೆ. ಇದರಲ್ಲಿ ಪಕ್ಷದ ಅಥವಾ ರಾಜಕೀಯ ಪಾತ್ರವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳ್ಳಿ ತಟ್ಟೆಯಲ್ಲಿ ಊಟ ಮಾಡಿಲ್ಲ. ಅದು ಬೆಳ್ಳಿ ಲೇಪಿತ ತಟ್ಟೆ ಎಂದು ಸಮಜಾಯಿಷಿ ನೀಡಿದರು.

ಸೇಡಂ ತಾಲ್ಲೂಕಿನ 30 ಗ್ರಾಮಗಳು ಗುರುಮಠಕಲ್ ಸೇರ್ಪಡೆಗೆ ಸಂಬಂಧಿಸಿದ ನಮ್ಮ ವಿರೋಧ ಇಲ್ಲ. ಜನರಿಗೆ ಅನುಕೂಲ ಆಗುವುದು ಮುಖ್ಯ. ಜನರಿಗೆ ಒಳ್ಳೆಯದಾಗಬೇಕು ಎಂಬುದು ನಮ್ಮ ಅಭಿಲಾಶೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.