ADVERTISEMENT

ಕಲಬುರ್ಗಿ: ಉದ್ಯಾನ ಒತ್ತುವರಿ ತೆರವಿಗೆ ಆಗ್ರಹ

ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಆಮ್‌ ಆದ್ಮಿ ಪಕ್ಷದ ಮುಖಂಡರು

​ಪ್ರಜಾವಾಣಿ ವಾರ್ತೆ
Published 6 ಜುಲೈ 2020, 11:57 IST
Last Updated 6 ಜುಲೈ 2020, 11:57 IST
ಜೇವರ್ಗಿ ಪಟ್ಟಣದ ಉದ್ಯಾನಗಳ ಒತ್ತುವರಿ ತೆರವುಗೊಳಿಸುವಂತೆ ಆಗ್ರಹಿಸಿ ಕಲಬುರ್ಗಿಯಲ್ಲಿ ಸೋಮವಾರ ಆಮ್‌ ಆದ್ಮಿ ಪಕ್ಷದ ಮುಖಂಡರು ಪ್ರತಿಭಟನೆ ನಡೆಸಿದರು
ಜೇವರ್ಗಿ ಪಟ್ಟಣದ ಉದ್ಯಾನಗಳ ಒತ್ತುವರಿ ತೆರವುಗೊಳಿಸುವಂತೆ ಆಗ್ರಹಿಸಿ ಕಲಬುರ್ಗಿಯಲ್ಲಿ ಸೋಮವಾರ ಆಮ್‌ ಆದ್ಮಿ ಪಕ್ಷದ ಮುಖಂಡರು ಪ್ರತಿಭಟನೆ ನಡೆಸಿದರು   

ಕಲಬುರ್ಗಿ: ಜಿಲ್ಲೆಯ ಜೇವರ್ಗಿ ಪಟ್ಟಣದ ಉದ್ಯಾನಗಳನ್ನು ಅತಿಕ್ರಮಣ ಮಾಡಿ ಕಟ್ಟಿದ ಕಟ್ಟಡಗಳನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ಆಮ್‌ ಆದ್ಮಿ ಪಕ್ಷದ ಜೇವರ್ಗಿ ತಾಲ್ಲೂಕು ಘಟಕದ ಮುಖಂಡರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುದು ಸೋಮವಾರ ಪ್ರತಿಭಟನೆ ನಡೆಸಿದರು.

ಪುರಸಭೆ ವ್ಯಾಪ್ತಿಯಲ್ಲಿ ಬರುವ 18 ಉದ್ಯಾನಗಳನ್ನು ಅತಿಕ್ರಮಣ ಮಾಡಿಕೊಂಡು 176 ಕಟ್ಟಡ ಕಟ್ಟಲಾಗಿದೆ. ಇವುಗಳಿಗೆ ಯಾವುದೇ ದಾಖಲೆಗಳಿಲ್ಲ. ಈ ಬಗ್ಗೆ ಪುರಸಭೆ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಅಲ್ಲಿನ ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಮಣಿದು ಮೌನವಾಗಿದ್ದಾರೆ. ಅನಿವಾರ್ಯವಾಗಿ ಜಿಲ್ಲಾಧಿಕಾರಿ ಕಚೇರಿಗೆ ಬರಬೇಕಾಯಿತು ಎಂದು ಪ್ರತಿಭಟನಾಕಾರರು ದೂರಿದರು.

ಪುರಸಭೆಯ ಆರು ಸಿಬ್ಬಂದಿಯೂ ಇದರಲ್ಲಿ ಶಾಮೀಲಾಗಿ ಭ್ರಷ್ಟಾಚಾರ ಮಾಡಿದ್ದಾರೆ. ಈ ಬಗ್ಗೆ ಹಿಂದೆ 65 ದಿನಗಳ ಕಾಲ ನಿರಂತರ ಧರಣಿ ನಡೆಸಿದ್ದೇವೆ. ಅಲ್ಲದೇ, ಪೌರಾಡಳಿತ ನಿರ್ದೇಶನಾಲಯಕ್ಕೂ ಪತ್ರ ಬರೆಯಲಾಗಿತ್ತು. ಕೂಲಂಕಶವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ನಿರ್ದೇಶನಾಲಯವು ಜಿಲ್ಲಾಧಿಕಾರಿಗೆ ಸೂಚನೆ ನೀಡಿದೆ. ನಾಲ್ಕು ತಿಂಗಳಾದರೂ ಜಿಲ್ಲಾಧಿಕಾರಿಗಳು ಏನನ್ನೂ ಮಾಡಿಲ್ಲ ಎಂದು ಆಕ್ರೋಶ ಹೊರಹಾಕಿದರು.

ADVERTISEMENT

15 ದಿನಗಳಲ್ಲಿ ಮನವಿಗೆ ಸ್ಪಂದಿಸದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಈರಣ್ಣಗೌಡ ಆರ್‌. ಪಾಟೀಲ ಗುಳ್ಯಾಳ ಹೇಳಿದರು.

ಮುಖಂಡರಾದ ಜಗದೀಶ ಬಳ್ಳಾರಿ, ದೌಲತರಾಯ ಕುಂಬಾರ, ಶೇಖರ್‌ ಸಿಂಗ್‌, ಕಿರಣ ರಾಠೋಡ, ಶಿವುಕುಮಾರ, ದೌಲಾ ಮಲಿಕ್‌, ಸಂದೇಶ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.