ADVERTISEMENT

ಕಲಬುರಗಿ: ಉಪನ್ಯಾಸಕರ ನೇಮಕಾತಿಗೆ ಎಬಿವಿಪಿ ಆಗ್ರಹ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2025, 4:54 IST
Last Updated 23 ಆಗಸ್ಟ್ 2025, 4:54 IST
ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಲು ಆಗ್ರಹಿಸಿ ಶುಕ್ರವಾರ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿನಿಯರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದರು
ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಲು ಆಗ್ರಹಿಸಿ ಶುಕ್ರವಾರ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿನಿಯರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದರು   

ಕಲಬುರಗಿ: ‘ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಸಮಸ್ಯೆ ಇತ್ಯರ್ಥಪಡಿಸಿ ಪೂರ್ಣ ಪ್ರಮಾಣದಲ್ಲಿ ತರಗತಿ ನಡೆಯುವಂತೆ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ನೇತೃತ್ವದಲ್ಲಿ ವಿದ್ಯಾರ್ಥಿನಿಯರು ಶುಕ್ರವಾರ ಪ್ರತಿಭಟಿಸಿದರು. 

ನಗರದ ಹಳೆ ಜೇವರ್ಗಿ ರಸ್ತೆಯ ಸರ್ಕಾರಿ ಮಹಿಳಾ ಕಾಲೇಜಿನಿಂದ ಹೊರಟ ವಿದ್ಯಾರ್ಥಿನಿಯರ ಪ್ರತಿಭಟನಾ ಮೆರವಣೆಗೆ, ಎಸ್‌ವಿಪಿ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಿತು. ನಂತರ ಅಲ್ಲಿ ಪ್ರತಿಭಟಿಸಿ, ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ರವಾನಿಸಿದರು.

‘ರಾಜ್ಯದಲ್ಲಿ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಈವರೆಗೆ ಅತಿಥಿ ಉಪನ್ಯಾಸಕರ ನೇಮಕಾತಿಯಾಗದ ಕಾರಣ ವಿದ್ಯಾರ್ಥಿಗಳಿಗೆ ಸರಿಯಾಗಿ ತರಗತಿಗಳು ನಡೆಯುತ್ತಿಲ್ಲ. ಇದರಿಂದ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

‘ಪ್ರತಿವರ್ಷ ನೇಮಕಾತಿ ಸಂದರ್ಭದಲ್ಲಿ ಈ ರೀತಿ ಗೊಂದಲವಾಗುತ್ತಿದೆ. ಶೇ 50ರಷ್ಟು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿರುವ ಸರ್ಕಾರಿ ಕಾಲೇಜುಗಳಿಗೆ ಸರ್ಕಾರ ಅನ್ಯಾಯ ಮಾಡಿದಂತಾಗಿದೆ. ಕೂಡಲೇ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಖಾಲಿ ಇರುವ ಎಲ್ಲ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ಮಾಡಬೇಕು’ ಎಂದು ಒತ್ತಾಯಿಸಿದರು.

‘ಸರ್ಕಾರಿ ಕಾಲೇಜಿನಲ್ಲಿ ಬಡ ಕೂಲಿ ಕಾರ್ಮಿಕರ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಾರೆ. ಸರ್ಕಾರಿ ಕಾಲೇಜುಗಳಿಗೆ ಮೂಲಸೌಕರ್ಯಕ್ಕೆ ಹೆಚ್ಚಿನ ಅನುದಾನ ಒದಗಿಸಬೇಕು. ಕಾಲೇಜಿನಲ್ಲಿ ಪ್ರಯೋಗಾಲಯ ಸಲಕರಣೆಗಳು, ಕಂಪ್ಯೂಟರ್‌ ಹಾಗೂ ಇನ್ನಿತರ ಸಲಕರಣೆಗಳನ್ನು ಒದಗಿಸಬೇಕು’ ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಎಬಿವಿಪಿ ಜಿಲ್ಲಾ ಸಂಚಾಲಕ ಮಂಜಜುನಾಥ ಕೋಣ್ಣೂರ, ರಾಜ್ಯ ಸಹ ಕಾರ್ಯದರ್ಶಿ ಹನುಮಂತ ಬಗಲಿ, ವಿಭಾಗ ಸಂಘಟನಾ ಕಾರ್ಯದರ್ಶಿ ಹೇಮಂತ, ಬಸವರಾಜ, ಸಂದೇಶ, ಸಾಗರ, ಶ್ರೀನಿವಾಸ ಪಾಲ್ಗೊಂಡಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.