ADVERTISEMENT

ನಕಲಿ, ನಾಟಿ ವೈದ್ಯರ ವಿರುದ್ಧ ಕ್ರಮಕೈಗೊಳ್ಳಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ಸೂಚನೆ

ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಸೂಚನೆ

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2025, 6:22 IST
Last Updated 25 ಆಗಸ್ಟ್ 2025, 6:22 IST
   

ಕಲಬುರಗಿ: ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಆಸ್ಪತ್ರೆಗಳು ಹಾಗೂ ನಕಲಿ/ ನಾಟಿ ಔಷಧ ನೀಡುವವರನ್ನು ಗುರುತಿಸಿ ಅವರ ವಿರುದ್ಧ ಕ್ರಮಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಆರೋಗ್ಯ ಅಭಿಯಾನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೆ.ಪಿ.ಎಂ.ಇ ಕಾಯ್ದೆ ಉಲ್ಲಂಘನೆ ಹಾಗೂ ನಕಲಿ ವೈದ್ಯರ ವಿರುದ್ಧ ಕ್ರಮಕೈಗೊಂಡು ದಂಡ ವಿಧಿಸಬೇಕು. ದಂಡದ ಹಣ ಸಂದಾಯ ಮಾಡದೇ ಇದ್ದಲ್ಲಿ ಅವರಿಗೆ ಅಂತಿಮ ನೋಟಿಸ್ ನೀಡಬೇಕು ಎಂದು ಸಂಬಂಧಪಟ್ಟ ವೈದ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ADVERTISEMENT

‘ಈ ಸಂಬಂಧ ಜಿಲ್ಲಾಮಟ್ಟದ ಹಾಗೂ ತಾಲ್ಲೂಕು ಮಟ್ಟದ ಸಮಿತಿ ರಚಿಸಲಾಗಿದ್ದು, ಒಟ್ಟು 18 ಆಸ್ಪತ್ರೆಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ’ ಎಂದು ಡಿಎಚ್‌ಒ ಡಾ.ಶರಣಬಸಪ್ಪ ಕ್ಯಾತನಾಳ ಸಭೆಗೆ ತಿಳಿಸಿದರು.

‘ಗರ್ಭಿಣಿಯರ ಸಾವು ಆಗದಂತೆ ಕ್ರಮವಹಿಸಬೇಕು. ಗರ್ಭಿಣಿಯರನ್ನು 12 ವಾರಕ್ಕಿಂತ ಮೊದಲು ನೋಂದಣಿ ಮಾಡಿ ಗಂಡಾಂತರ ಪ್ರಕರಣಗಳು ಕಂಡು ಬಂದಲ್ಲಿ ಸೂಕ್ತ ಹಾಗೂ ನಿಗದಿತ ಸಮಯದಲ್ಲಿ ತಜ್ಞವೈದ್ಯರಿಂದ ಚಿಕಿತ್ಸೆ ನೀಡಿ ಆಸ್ಪತ್ರೆಯಲ್ಲಿ ಹೆರಿಗೆಯಾಗುವಂತೆ ಕ್ರಮ ಕೈಗೊಳ್ಳಬೇಕು. ತಾಯಿ ಮರಣ ಹಾಗೂ ಶಿಶು ಮರಣ ತಡೆಗಟ್ಟಲು ವಿಶೇಷ ಕಾಳಜಿ ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಗೃಹ ಆರೋಗ್ಯ ಅಭಿಯಾನ:

ಆಶಾ ಕೈಪಿಡಿ ಹಾಗೂ ಪೋಸ್ಟರ್ ಬಿಡುಗಡೆ ಮೂಲಕ ಗೃಹ ಆರೋಗ್ಯ ಅಭಿಯಾನಕ್ಕೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ಜಿಲ್ಲಾ ಪಂಚಾಯಿತಿ ಸಿಇಒ ಭಂವರ್‌ಸಿಂಗ್ ಮೀನಾ, ಉಪವಿಭಾಗಾಧಿಕಾರಿ ಸಾಹಿತ್ಯಾ ಆಲದಕಟ್ಟಿ, ಡಿಎಚ್‌ಒ ಡಾ.ಶರಣಬಸಪ್ಪ ಕ್ಯಾತನಾಳ ಸೇರಿದಂತೆ ಹಲವರು ಚಾಲನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಸರ್ಜನ್ ರೂಖಿಯಾ ಅಸ್ನ ರಬಾ, ಆರ್‌ಸಿಎಚ್ ಅಧಿಕಾರಿ ಡಾ.ಸಿದ್ದು ಪಾಟೀಲ, ಕುಟುಂಬ ಕಲ್ಯಾಣಾಧಿಕಾರಿ ಡಾ.ಶಿವಶರಣಪ್ಪ ಭೂಸನೂರ, ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಚಂದ್ರಕಾಂತ ನರಬೋಳಿ, ಕುಷ್ಠರೋಗ ಕಾರ್ಯಕ್ರಮ ಅಧಿಕಾರಿ ಡಾ.ವಿವೇಕಾನಂದ ರೆಡ್ಡಿ, ಸ್ತ್ರೀರೋಗ ತಜ್ಞರು, ಜಿಲ್ಲೆಯ ಎಲ್ಲ ಟಿಎಚ್‌ಒಗಳು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.