ADVERTISEMENT

ಎಐಡಿಎಸ್‌ಒ 7ನೇ ರಾಜ್ಯಮಟ್ಟದ ಸಮ್ಮೇಳನ ಆ 24ರಿಂದ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2019, 11:59 IST
Last Updated 20 ಆಗಸ್ಟ್ 2019, 11:59 IST

ಕಲಬುರ್ಗಿ: ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಜಾರಿಗೆ ತರುವ ವಿದ್ಯಾರ್ಥಿ ವಿರೋಧಿ ನೀತಿಗಳ ವಿರುದ್ಧ ಹೋರಾಡುತ್ತಾ ಬಂದಿರುವ ಆಲ್‌ ಇಂಡಿಯಾ ಡೆಮಾಕ್ರೆಟಿಕ್‌ ಸ್ಟೂಡೆಂಟ್ಸ್‌ ಆರ್ಗನೈಸೇಶನ್‌ (ಎಐಡಿಎಸ್‌ಒ)ನ 7ನೇ ರಾಜ್ಯಮಟ್ಟದ ಸಮ್ಮೇಳನ ಇದೇ 24ರಿಂದ 26ರವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದುಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷಹಣಮಂತ ಎಸ್.ಎಚ್. ಹಾಗೂ ಕಾರ್ಯದರ್ಶಿ ಈರಣ್ಣ ಇಸಬಾ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘24ರಂದು ಬೆಳಿಗ್ಗೆ ಮೆಜೆಸ್ಟಿಕ್‌ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೆ ವಿದ್ಯಾರ್ಥಿಗಳು ಬೃಹತ್‌ ಮೆರವಣಿಗೆ ನಡೆಯಲಿದೆ.ರಾಜ್ಯದ ಮೂಲೆ ಮೂಲೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಫ್ರೀಡಂ ಪಾರ್ಕ್‍ನಲ್ಲಿ ನಡೆಯುವ ಸಮ್ಮೇಳನದ ಬಹಿರಂಗ ಸಭೆಯನ್ನು ಸರ್ಕಾರದ ಮಾಜಿ ಅಡ್ವೊಕೇಟ್‌ ಜನರಲ್‌ ಪ್ರೊ.ರವಿರ್ಮ ಕುಮಾರ್‌ ಉದ್ಘಾಟಿಸಲಿದ್ದಾರೆ’ ಎಂದರು.

ಮುಖ್ಯ ಭಾಷಣಕಾರರಾಗಿ ಎಸ್.ಯು.ಸಿ.ಐ (ಕಮ್ಯುನಿಸ್ಟ್) ಪಕ್ಷದ ಪಾಲಿಟ್ ಬ್ಯೂರೊ ಸದಸ್ಯ ಕೆ.ರಾಧಾಕೃಷ್ಣ, ಭಾಷಣಕಾರಾಗಿ ಎಐಡಿಎಸ್‍ಒ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ಅಶೋಕ್ ಮಿಶ್ರಾ ಆಗಮಿಸಲಿದ್ದಾರೆ. ಪ್ರತಿನಿಧಿ ಅಧಿವೇಶನದ ಉದ್ಘಾಟನೆಯನ್ನು ಎಸ್.ಯು.ಸಿ.ಐ (ಸಿ) ಪಕ್ಷದ ರಾಜ್ಯ ಕಾರ್ಯದರ್ಶಿ ಕೆ.ಉಮಾ ನೆರವೇರಿಸಲಿದ್ದು, ಎಐಡಿಎಸ್‍ಒ ಅಖಿಲ ಭಾರತ ಅಧ್ಯಕ್ಷ ಕಮಲ್ ಸೈನ್ ಪಾಲ್ಗೊಳ್ಳಲಿದ್ದಾರೆ. ಶಿಕ್ಷಣದ ಜ್ವಲಂತ ಸಮಸ್ಯೆಗಳಾದ ವ್ಯಾಪಾರೀಕರಣ, ಖಾಸಗೀಕರಣ ಕುರಿತು, ಸರ್ಕಾರಿ ಶಿಕ್ಷಣ ಸಂಸ್ಥೆಗಳು ಅಧೋಗತಿಗೆ ತಲುಪಿರುವ ಕುರಿತು, ಸರ್ಕಾರಿ ಹಾಸ್ಟೆಲ್‍ಗಳ ಸಮಸ್ಯೆಗಳ ಕುರಿತು, ಕೇಂದ್ರ–ರಾಜ್ಯ ಸರ್ಕಾರಗಳ ಶಿಕ್ಷಣದ ಬಗೆಗಿನ ನಿರ್ಲಕ್ಷ್ಯ ಧೋರಣೆ ಕುರಿತು ಮುಂದಿನ ಹೋರಾಟದ ರೂಪುರೇಷೆಯನ್ನು ನಿರ್ಧರಿಸಲಾಗುವುದು ಎಂದು ಹೇಳಿದರು.

ADVERTISEMENT

ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿ–2019ರ ಅಪಾಯಗಳ ಬಗ್ಗೆಯೂ ಸಮಗ್ರವಾಗಿ ಚರ್ಚಿಸಿ ಹೋರಾಟದ ಕಾರ್ಯಕ್ರಮಗಳ ಬಗ್ಗೆಯೂ ನಿರ್ಧರಿಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ಉಪಾಧ್ಯಕ್ಷೆ ಸ್ನೇಹಾ ಕಟ್ಟಿಮನಿ, ಜಿಲ್ಲಾ ಸಮಿತಿ ಸದಸ್ಯರುಗಳಾದ ಗೌತಮ, ಶಿಲ್ಪಾ ಬಿ.ಕೆ, ಅರುಣ ಎಚ್, ಕರಣ, ವೆಂಕಟೇಶ, ಪ್ರೀತಿ ಬಿ, ಪ್ರೀತಿ ಡಿ, ಭೀಮು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.