ADVERTISEMENT

ವೇತನ ಬಾಕಿ: 26ರಿಂದ ಆಂಬುಲೆನ್ಸ್ ಸೇವೆ ಸ್ಥಗಿತ

​ಪ್ರಜಾವಾಣಿ ವಾರ್ತೆ
Published 23 ಮೇ 2021, 7:39 IST
Last Updated 23 ಮೇ 2021, 7:39 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಕಲಬುರ್ಗಿ: ರಾಜ್ಯದಾದ್ಯಂತ ಆರೋಗ್ಯ ಕವಚ ಯೋಜನೆಯಡಿ ಕೆಲಸ ಮಾಡುತ್ತಿರುವ 108 ಆಂಬುಲೆನ್ಸ್ ಸಿಬ್ಬಂದಿಗೆ ಮಾರ್ಚ್‌ ಹಾಗೂ ಏಪ್ರಿಲ್ ತಿಂಗಳ ವೇತನವನ್ನು ನೀಡದಿರುವುದನ್ನು ಖಂಡಿಸಿ ಇದೇ 26ರಿಂದ ಆಂಬುಲೆನ್ಸ್‌ನ ಕೋವಿಡ್‌ ಸೇವೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಕರ್ನಾಟಕ ರಾಜ್ಯ ಆರೋಗ್ಯ ಕವಚ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಘವೇಂದ್ರ ನಾಟೀಕಾರ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ 3 ಸಾವಿರ 108 ಆಂಬುಲೆನ್ಸ್‌ ಸಿಬ್ಬಂದಿ ಇದ್ದು, ಕರೆ ಮಾಡಿದ ತಕ್ಷಣ ಸ್ಥಳಕ್ಕೆ ತೆರಳಿ ಉಚಿತ ಸೇವೆ ಸಲ್ಲಿಸುತ್ತಿದ್ದೇವೆ. ಕೋವಿಡ್‌ ರೋಗಿಗಳನ್ನು ಕರೆದುಕೊಂಡು ಆಸ್ಪತ್ರೆಗೆ ದಾಖಲಿಸುತ್ತಿದ್ದೇವೆ. ಅಂಥದರಲ್ಲಿ ಸರ್ಕಾರ ನಮ್ಮ ಎರಡು ತಿಂಗಳ ವೇತನ ನೀಡಿಲ್ಲ. ಬಾಕಿ ಇರುವ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 108 ಆಂಬುಲೆನ್ಸ್ ಸಿಬ್ಬಂದಿಯನ್ನು ಕೊರೊನಾ ವಾರಿಯರ್ಸ್ ಎಂದು ಘೋಷಿಸಿ ಆರೋಗ್ಯ ವಿಮೆ ಮತ್ತಿತರ ಸೌಲಭ್ಯ ಕಲ್ಪಿಸಬೇಕು. ಇಲ್ಲದಿದ್ದರೆ ಆಂಬುಲೆನ್ಸ್ ಸೇವೆಯನ್ನು ಜಿಲ್ಲೆಯಲ್ಲಿಯೂ ಸ್ಥಗಿತಗೊಳಿಸುವುದು ಅನಿವಾರ್ಯ ಎಂದು ಹೇಳಿದ್ದಾರೆ.

ಬೆಂಬಲ: ಆಂಬುಲೆನ್ಸ್ ಚಾಲಕರು ನಡೆಸುತ್ತಿರುವ ಮುಷ್ಕರಕ್ಕೆ ಕರ್ನಾಟಕ ರಕ್ಷಣಾ ವೇದಿಕೆ (ಎಚ್. ಶಿವರಾಮೇಗೌಡ ಬಣ) ಬೆಂಬಲ ನೀಡಲಿದೆ ಎಂದು ವೇದಿಕೆ ರಾಜ್ಯ ಸಂಚಾಲಕ ಹಾಗೂ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ ನಾಲವಾರಕರ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.