ADVERTISEMENT

ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ | ‘ಕಲ್ಯಾಣ’ದ ಖಾಲಿ ಹುದ್ದೆ ಭರ್ತಿಗೆ ಕ್ರಮ: ಸಿಎಂ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2023, 3:51 IST
Last Updated 18 ಸೆಪ್ಟೆಂಬರ್ 2023, 3:51 IST
ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವದ ಅಂಗವಾಗಿ ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಕೆಆರ್‌ಟಿಸಿಯ ನೂತನ ಬಸ್‌ಗಳಿಗೆ ಹಸಿರು ನಿಶಾನೆ ತೋರಿಸಿದರು. ಕೆಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಎಂ. ರಾಚಪ್ಪ, ಸಚಿವ ಪ್ರಿಯಾಂಕ್ ಖರ್ಗೆ, ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್, ಶಾಸಕರಾದ ಎಂ.ವೈ. ಪಾಟೀಲ, ಬಿ.ಆರ್.ಪಾಟೀಲ ಇದ್ದರು.
–ಪ್ರಜಾವಾಣಿ ಚಿತ್ರ
ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವದ ಅಂಗವಾಗಿ ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಕೆಆರ್‌ಟಿಸಿಯ ನೂತನ ಬಸ್‌ಗಳಿಗೆ ಹಸಿರು ನಿಶಾನೆ ತೋರಿಸಿದರು. ಕೆಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಎಂ. ರಾಚಪ್ಪ, ಸಚಿವ ಪ್ರಿಯಾಂಕ್ ಖರ್ಗೆ, ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್, ಶಾಸಕರಾದ ಎಂ.ವೈ. ಪಾಟೀಲ, ಬಿ.ಆರ್.ಪಾಟೀಲ ಇದ್ದರು. –ಪ್ರಜಾವಾಣಿ ಚಿತ್ರ   

ಕಲಬುರಗಿ: ‘ಕಲ್ಯಾಣ ಕರ್ನಾಟಕವನ್ನು ಅಕ್ಷರಶಃ ಕಲ್ಯಾಣ ರಾಜ್ಯವಾಗಿ ಮಾಡುವ ನಮ್ಮ ಸಂಕಲ್ಪ ಪ್ರಶ್ನಾತೀತ. ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇದ್ದ 70,738 ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗಿದ್ದು, 23,101 ಜನರಿಗೆ ಮುಂಬಡ್ತಿ ನೀಡಲಾಗಿದೆ. ಖಾಲಿ ಇರುವ ಉಳಿದ ಹುದ್ದೆಗಳ ನೇರ ನೇಮಕಾತಿ ಹಾಗೂ ಮುಂಬಡ್ತಿಗೆ ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಕಲ್ಯಾಣ ಕರ್ನಾಟಕವು ಹೈದರಾಬಾದ್ ನಿಜಾಮನ ಆಳ್ವಿಕೆಯಿಂದ ಮುಕ್ತಿ ಪಡೆದ ನೆನಪಿನಲ್ಲಿ ಭಾನುವಾರ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವದಲ್ಲಿ ಪಾಲ್ಗೊಂಡು, ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

‘ಸಂವಿಧಾನದ 371 (ಜೆ) ಕಲಂ ಜಾರಿಯ ಮೂಲಕ ಈ ಭಾಗದಲ್ಲಿ ಅಭಿವೃದ್ಧಿಯ ಶಕೆ ಪ್ರಾರಂಭವಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ (ಕೆಕೆಆರ್‌ಡಿಬಿ) ₹5,000 ಕೋಟಿ ವೆಚ್ಚದ ಕಾಮಗಾರಿ ಕೈಗೆತ್ತಿಕೊಳ್ಳಲು ಅನುಮೋದನೆ ನೀಡಲಾಗಿದೆ’ ಎಂದು ಅವರು ಹೇಳಿದರು.

ADVERTISEMENT
ಕಲಬುರಗಿಯಲ್ಲಿ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಾತಂತ್ರ್ಯ ಹೋರಾಟಗಾರರೊಬ್ಬರಿಗೆ ಚರಕದ ಸ್ಮರಣಿಕೆ ನೀಡಿ ಸನ್ಮಾನಿಸಿದರು. ಸಚಿವ ಪ್ರಿಯಾಂಕ್ ಖರ್ಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಶಾಸಕ ಅಲ್ಲಮಪ್ರಭು ಪಾಟೀಲ ಇದ್ದರು –ಪ್ರಜಾವಾಣಿ ಚಿತ್ರ

‘ಐತಿಹಾಸಿಕ ಹಾಗೂ ಧಾರ್ಮಿಕ ಪ್ರವಾಸಿ ಕೇಂದ್ರಗಳಾದ ಕಲಬುರಗಿ ಜಿಲ್ಲೆಯ ದತ್ತಾತ್ರೇಯನ ಪುಣ್ಯಕ್ಷೇತ್ರ ಗಾಣಗಾಪೂರ, ಬೌದ್ಧ ಧರ್ಮದ ನೆಲೆಯಾಗಿರುವ ಸನ್ನತಿ ಕ್ಷೇತ್ರದ ಸಮಗ್ರ ಅಭಿವೃದ್ಧಿ ಮಾಡಲಾಗುವುದು. ಕಲಬುರಗಿ ಕೋಟೆ, ಮಳಖೇಡ ಕೋಟೆಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು’ ಎಂದು ಘೋಷಿಸಿದರು.

ಮಂಡಳಿಗೆ 2013–14ರಿಂದ 2023–24ರವರೆಗೆ ಸರ್ಕಾರದಿಂದ ಒಟ್ಟಾರೆ ₹14,878 ಕೋಟಿ ಅನುದಾನ ಹಂಚಿಕೆ ಮಾಡಲಾಗಿದ್ದು, ₹10,228 ಕೋಟಿ ಬಿಡುಗಡೆ ಮಾಡಿದೆ. ಇದರಲ್ಲಿ ₹8,520 ಕೋಟಿ ಖರ್ಚು ಮಾಡಲಾಗಿದೆ’ ಎಂದು ಹೇಳಿದರು.

‘371 (ಜೆ) ಕಲಂ ಜಾರಿಯಾಗದಿದ್ದರೆ ಕಲ್ಯಾಣ ಕರ್ನಾಟಕ ಭಾಗವು ಅಭಿವೃದ್ಧಿಗೆ ತೆರೆದುಕೊಳ್ಳುತ್ತಿರಲಿಲ್ಲ. ಯುಪಿಎ ಸರ್ಕಾರದಲ್ಲಿ ಈ ಹಿಂದೆ ಸಚಿವರಾಗಿದ್ದ ಮಲ್ಲಿಕಾರ್ಜುನ ಖರ್ಗೆ ಅವರು ವಿಶೇಷ ಪ್ರಯತ್ನ ಮಾಡಿ ಸಂಸತ್ತಿನ ಅನುಮೋದನೆ ಪಡೆದು ಸಂವಿಧಾನ ತಿದ್ದುಪಡಿಯಾಗುವಂತೆ ನೋಡಿಕೊಂಡರು. ಮುಖ್ಯಮಂತ್ರಿಯಾಗಿದ್ದ ಧರ್ಮಸಿಂಗ್ ಅವರು ಹೈದರಾಬಾದ್ ಕರ್ನಾಟಕ (ಈಗ ಕಲ್ಯಾಣ ಕರ್ನಾಟಕ) ಪ್ರದೇಶ ಅಭಿವೃದ್ಧಿ ಮಂಡಳಿ ರಚಿಸುವ ಮೂಲಕ ರಾಜ್ಯದಿಂದ ವಿಶೇಷ ಅನುದಾನ ಬಿಡುಗಡೆ ಮಾಡಲಾರಂಭಿಸಿದರು’ ಎಂದು ಸಿದ್ದರಾಮಯ್ಯ ಅವರು ವಿಶೇಷವಾಗಿ ಇಬ್ಬರೂ ನಾಯಕರನ್ನು ಸ್ಮರಿಸಿದರು.

ಮಹೋತ್ಸವದ ಅಂಗವಾಗಿ ಕಲ್ಯಾಣ ಕರ್ನಾಟಕದ ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬೀದರ್‌, ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲೂ ರಾಷ್ಟ್ರಧ್ವಜಾರೋಹಣ ಮಾಡಲಾಯಿತು.

ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವದ ಅಂಗವಾಗಿ ಕಲಬುರಗಿಯ ಡಿ.ಎ.ಆರ್‌. ಪೊಲೀಸ್ ಮೈದಾನದಲ್ಲಿ ಭಾನುವಾರ ವಿವಿಧ ಜಾನಪದ ಕಲಾ ತಂಡಗಳು ನೃತ್ಯ ಪ್ರರ್ದಶನವನ್ನು ನೀಡಿದವು –ಪ್ರಜಾವಾಣಿ ಚಿತ್ರ/ತಾಜುದ್ದೀನ ಆಜಾದ್‌
ಅಪಾಯಕಾರಿ ಸ್ಥಿತಿಯಲ್ಲಿರುವ ವಾಕ್ ಸ್ವಾತಂತ್ರ್ಯ ಧಾರ್ಮಿಕ ಸ್ವಾತಂತ್ರ್ಯಗಳ ರಕ್ಷಣೆಗೆ ಪ್ರತಿಯೊಬ್ಬನೂ ಮುಂದಾಗಬೇಕು. ಸೌಹಾರ್ದ ಕದಡುವ ಶಕ್ತಿಗಳ ವಿರುದ್ಧ ಒಗ್ಗಟ್ಟಿನಿಂದ ಹೋರಾಡಬೇಕು.
-ಸಿದ್ದರಾಮಯ್ಯ ಮುಖ್ಯಮಂತ್ರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.