ADVERTISEMENT

ಗ್ಯಾರಂಟಿಗೆ ಎಸ್‌ಸಿಎಸ್‌ಪಿ, ಟಿಎಸ್‌ಪಿ ಹಣ: ಸಿಎಂ ಬಳಿ ನಿಯೋಗ; ಅರ್ಜುನ ಭದ್ರೆ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2025, 7:11 IST
Last Updated 1 ಆಗಸ್ಟ್ 2025, 7:11 IST
ಅರ್ಜುನ ಭದ್ರೆ
ಅರ್ಜುನ ಭದ್ರೆ   

ಕಲಬುರಗಿ: ‘ಪರಿಶಿಷ್ಟರ ಅಭಿವೃದ್ಧಿಗೆ ವಿನಿಯೋಗಿಸಲು ನೀಡಿದ್ದ ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನದಲ್ಲಿ ₹12 ಸಾವಿರ ಕೋಟಿಗಳಷ್ಟು ಗ್ಯಾರಂಟಿ ಯೋಜನೆಗಳಿಗೆ ಬಳಸಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ಖಂಡನೀಯ. ಇದನ್ನು ತಡೆಯುವಂತೆ ಒತ್ತಡ ಹೇರಲು ಆಗಸ್ಟ್‌ 4ರಂದು ನಿಯೋಗದೊಂದಿಗೆ ಮುಖ್ಯಮಂತ್ರಿ ಭೇಟಿಗೆ ನಿರ್ಧರಿಸಲಾಗಿದೆ’ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ರಾಜ್ಯ ಸಂಚಾಲಕ ಅರ್ಜುನ ಭದ್ರೆ ಹೇಳಿದರು.

‘ಅಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌.ಸಿ.ಮಹಾದೇವಪ್ಪ ಸೇರಿದಂತೆ ಸಚಿವರು, ಶಾಸಕರನ್ನು ಭೇಟಿಯಾಗಿ ಪರಿಶಿಷ್ಟರ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನ ಗ್ಯಾರಂಟಿಗೆ ಬಳಸದಂತೆ ಒತ್ತಾಯಿಸಲಾಗುವುದು’ ಎಂದು ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ನಮ್ಮ ಬೇಡಿಕೆಗೆ ಸರ್ಕಾರ ಸ್ಪಂದಿಸದಿದ್ದರೆ ಆಗಸ್ಟ್‌ 5ರಂದು ಬೆಂಗಳೂರಿನಲ್ಲಿ ಸಮಾನ ಮನಸ್ಕ ಮುಖಂಡರ ಸಭೆ ನಡೆಸಿ, ಮುಂದಿನ ಹೋರಾಟ ರೂಪಿಸುವ ಕುರಿತು ಚರ್ಚಿಸಲಾಗುವುದು’ ಎಂದು ತಿಳಿಸಿದರು.

ADVERTISEMENT

‘ರಾಜ್ಯ ಸರ್ಕಾರ ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನವನ್ನು ಅರ್ಹ ದಲಿತರ ಸಬಲೀಕರಣಕ್ಕೇ ಬಳಸಬೇಕು. ಸರ್ಕಾರ ಈ ನಿಟ್ಟಿನಲ್ಲಿ ಇಚ್ಛಾಶಕ್ತಿ ತೋರಬೇಕು. ದಲಿತ ಸಂಘಟನೆಗಳು ಕೂಡ ಏಕತೆಯಿಂದ, ತಾತ್ವಿಕ ನೀತಿಯ ಆಧಾರದಲ್ಲಿ ಧ್ವನಿ ಎತ್ತಬೇಕು. ಇಲ್ಲದಿದ್ದರೆ, ಈ ಯೋಜನೆಯ ಮೂಲ ಉದ್ದೇಶವೇ ಬುಡಮೇಲಾಗುವ ಸಾಧ್ಯತೆ ಇದೆ’ ಎಂದು ಆತಂಕ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಮಲ್ಲಿಕಾರ್ಜುನ ಕ್ರಾಂತಿ, ಸೂರ್ಯಕಾಂತ ಅಜಾದಪುರ, ಮಹೇಶ ಗೋಖಲೆ, ವೀರಭದ್ರಪ್ಪ ಸೇರಿದಂತೆ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.