ADVERTISEMENT

ಕಲಬುರಗಿಯಲ್ಲಿ ರಾಜ್ಯ ಸಮ್ಮೇಳನ: ಆಶಾ ಕಾರ್ಯಕರ್ತೆಯರ ಶಕ್ತಿ ಪ್ರದರ್ಶನ

ಸರ್ಕಾರಿ ನೌಕರರೆಂದು ಪರಿಗಣಿಸಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2024, 14:01 IST
Last Updated 13 ಸೆಪ್ಟೆಂಬರ್ 2024, 14:01 IST
ಕಲಬುರಗಿಯಲ್ಲಿ ಶುಕ್ರವಾರ ನಡೆದ ಕರ್ನಾಟಕ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘಟನೆಯ ಪ್ರಥಮ ರಾಜ್ಯಮಟ್ಟದ ಸಮ್ಮೇಳನದ ಅಂಗವಾಗಿ ಆಶಾ ಕಾರ್ಯಕರ್ತೆಯರು ಬೃಹತ್ ಮೆರವಣಿಗೆ ನಡೆಸಿದರು.   ಪ್ರಜಾವಾಣಿ ಚಿತ್ರ: ತಾಜುದ್ದೀನ್‌ ಆಜಾದ್‌
ಕಲಬುರಗಿಯಲ್ಲಿ ಶುಕ್ರವಾರ ನಡೆದ ಕರ್ನಾಟಕ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘಟನೆಯ ಪ್ರಥಮ ರಾಜ್ಯಮಟ್ಟದ ಸಮ್ಮೇಳನದ ಅಂಗವಾಗಿ ಆಶಾ ಕಾರ್ಯಕರ್ತೆಯರು ಬೃಹತ್ ಮೆರವಣಿಗೆ ನಡೆಸಿದರು.   ಪ್ರಜಾವಾಣಿ ಚಿತ್ರ: ತಾಜುದ್ದೀನ್‌ ಆಜಾದ್‌   

ಕಲಬುರಗಿ: ರಾಜ್ಯದ ಮೂಲೆ ಮೂಲೆಯಿಂದ ಬಂದಿದ್ದ ಸಾವಿರಾರು ಆಶಾ ಕಾರ್ಯಕರ್ತೆಯರು ನಗರದಲ್ಲಿ ಶುಕ್ರವಾರ ಬೃಹತ್ ಮೆರವಣಿಗೆ ನಡೆಸುವ ಮೂಲಕ ಶಕ್ತಿ ಪ್ರದರ್ಶಿಸಿ ತಮ್ಮ ಬೇಡಿಕೆಗಳ ಈಡೇರಿಕೆಗೆ ಹಕ್ಕೊತ್ತಾಯ ಮಂಡಿಸಿದರು.

ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿದ್ದ ಆಶಾ ಕಾರ್ಯಕರ್ತೆಯರು ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಸ್ಟೇಶನ್ ರಸ್ತೆ, ಎಸ್.ಎಂ. ಪಂಡಿತ್ ರಂಗಮಂದಿರದ ಮಾರ್ಗವಾಗಿ ಪಬ್ಲಿಕ್ ಗಾರ್ಡನ್ ಸಮೀಪದ ವೀರಶೈವ ಕಲ್ಯಾಣ ಮಂಟಪ ತಲುಪಿದರು. ಅಲ್ಲಿ ಆಶಾ ಕಾರ್ಯಕರ್ತೆಯರ ರಾಜ್ಯಮಟ್ಟದ ಪ್ರಥಮ ಸಮ್ಮೇಳನ ನಡೆಸಲಾಯಿತು.

ಸಮ್ಮೇಳನದಲ್ಲಿ ಮಾತನಾಡಿದ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ರಾಜ್ಯ ಕಾರ್ಯದರ್ಶಿ ಕೆ. ಉಮಾ, ‘ಆಶಾ ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ಅಲ್ಲಿಯವರೆಗೆ ಅವರನ್ನು ಕಾರ್ಮಿಕರು ಎಂದು ಪರಿಗಣಿಸಿ ಎಲ್ಲಾ ಶಾಸನಬದ್ಧ ಸೌಲಭ್ಯಗಳನ್ನು ಒದಗಿಸಬೇಕು. ಸಾಮಾಜಿಕ ಭದ್ರತೆಯನ್ನು ಖಾತ್ರಿಪಡಿಸಬೇಕು. ಈಗ ನೀಡುತ್ತಿರುವ ಗೌರವಧನ ಯಾವುದಕ್ಕೂ ಸಾಲುತ್ತಿಲ್ಲ. ಹೀಗಾಗಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆಶಾ ಕಾರ್ಯಕರ್ತೆಯರಿಗೆ ಕನಿಷ್ಠ ವೇತನ ಕಾಯ್ದೆಯಡಿ ಮಾಸಿಕ ₹ 15 ಸಾವಿರ ಪ್ರೋತ್ಸಾಹ ಧನ ನೀಡಬೇಕು’ ಎಂದು ಒತ್ತಾಯಿಸಿದರು.

ADVERTISEMENT

‘ಆಶಾ ಕಾರ್ಯಕರ್ತೆಯರ ಸೇವೆ ಇಲ್ಲದ ದಿನಗಳಲ್ಲಿ ಪ್ರತಿ ಲಕ್ಷಕ್ಕೆ 5 ಸಾವಿರ ಮಕ್ಕಳು ಹೆರಿಗೆ ಸಂಬಂಧಿ ತೊಂದರೆಯಿಂದ ಸಾವಿಗೀಡಾಗುತ್ತಿದ್ದರು. ಇಂದು ಮಕ್ಕಳ ಸಾವಿನ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಆಶಾ ಕಾರ್ಯಕರ್ತೆಯರ ಸೇವೆಯನ್ನು ಸರ್ಕಾರ ಗಮನಿಸಿ ಬೇಡಿಕೆಗಳನ್ನು ಈಡೇರಿಸಬೇಕು’ ಎಂದರು.

ಎಐಯುಟಿಯಿಸಿ ಕಾರ್ಮಿಕ ಸಂಘಟನೆಯ ರಾಜ್ಯ ಅಧ್ಯಕ್ಷ ಕೆ. ಸೋಮಶೇಖರ್, ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಅಧ್ಯಕ್ಷ ಕೆ. ಸೋಮಶೇಖರ್ ಯಾದಗಿರಿ, ಕಾರ್ಯದರ್ಶಿ ಡಿ. ನಾಗಲಕ್ಷ್ಮಿ, ಉಪಾಧ್ಯಕ್ಷೆ ರಮಾ ಟಿ.ಸಿ, ಮೆಡಿಕಲ್ ಸರ್ವಿಸ್ ಸೆಂಟರ್ ರಾಷ್ಟ್ರೀಯ ಉಪಾಧ್ಯಕ್ಷೆ ಡಾ. ಸುಧಾ ಕಾಮತ್ ಅವರು ಮಾತನಾಡಿ ಆಶಾ ಕಾರ್ಯಕರ್ತೆರು ಎದುರಿಸುತ್ತಿರುವ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.