ADVERTISEMENT

ಕಲಬುರ್ಗಿ: ವೇತನ ಬಿಡುಗಡೆಗಾಗಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

10 ದಿನಗಳಲ್ಲಿ ಸಮಸ್ಯೆ ಬಗೆಹರಿಸಲು ಜಿಲ್ಲಾ ಆರೋಗ್ಯಾಧಿಕಾರಿ ಭರವಸೆ

​ಪ್ರಜಾವಾಣಿ ವಾರ್ತೆ
Published 10 ಜನವರಿ 2020, 10:00 IST
Last Updated 10 ಜನವರಿ 2020, 10:00 IST
ಆಶಾ ಕಾರ್ಯಕರ್ತೆಯರು ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು
ಆಶಾ ಕಾರ್ಯಕರ್ತೆಯರು ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು   

ಕಲಬುರ್ಗಿ:ಎಂ.ಸಿ.ಟಿ.ಎಸ್. ನ 15 ತಿಂಗಳ ಬಾಕಿ ಪ್ರೋತ್ಸಾಹಧನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಆಶಾ ಕಾರ್ಯಕರ್ತೆಯರು ಇಲ್ಲಿನ ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿ ಎದುರು ಗುರುವಾರ ಕೆಲಸ ಸ್ಥಗಿತಗೊಳಿಸಿ ಹೋರಾಟ ನಡೆಸಿದರು.

ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಬಂದಿದ್ದ ಆಶಾ ಕಾರ್ಯಕರ್ತೆಯರು ನಗರದ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ವೃತ್ತದಿಂದ ಡಿಎಚ್‌ಒ ಕಚೇರಿವರೆಗೆ ಮೆರವಣಿಗೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವಿ.ಜಿ.ದೇಸಾಯಿ, ‘ಬಾಕಿ ಇರುವ ಸಂಬಳ ನೀಡುವಂತೆ ಮನವಿ ಸಲ್ಲಿಸಲಾಗಿತ್ತು. ಅಲ್ಲದೆ ಕಳೆದ ಜನವರಿ 3ರಂದು ರಾಜ್ಯದ ಎಲ್ಲಾ ಆಶಾಗಳು ಬೆಂಗಳೂರಿನ ಫ್ರೀಡಮ್ ಪಾರ್ಕ್‌ನಲ್ಲಿ ಪ್ರತಿಭಟನೆ ಮಾಡಿ ಸರ್ಕಾರದ ಗಮನಕ್ಕೆ ತಂದಿದ್ದಾರೆ. ಆದರೆ ಸರ್ಕಾರದಿಂದ ಸ್ಪಷ್ಟ ಉತ್ತರ ಬರದೇ ಇರುವುದರಿಂದ ಅನಿವಾರ್ಯವಾಗಿ ಕೆಲಸ ಬಂದ್ ಚಳುವಳಿಯನ್ನು ಪ್ರಾರಂಭಿಸಲಾಗಿದೆ. ಆದರೂ ಬಾಕಿ ವೇತನ ಸಮಸ್ಯೆ ಇನ್ನು ಪರಿಹಾರವಾಗಿಲ್ಲ. ಆಶಾಗಳಿಗೆ ದುಡಿತಕ್ಕೆ ತಕ್ಕ ವೇತನ ಸಿಗುತ್ತಿಲ್ಲ ಎಂದು ಆರೋಪಿಸಿದರು.

ADVERTISEMENT

ಪ್ರತಿಭಟನೆಯನ್ನು ಉದ್ದೇಶಿಸಿ ಎ.ಐ.ಯು.ಟಿ.ಯು.ಸಿ ಕಾರ್ಮಿಕ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಎಸ್.ಎಂ.ಶರ್ಮಾ ಮಾತನಾಡಿದರು.

ಪ್ರತಿಭಟನಾ ಸ್ಥಳಕ್ಕೆ ಬಂದ ಜಿಲ್ಲಾ ಆರೋಗ್ಯಾಧಿಕಾರಿ, ಮನವಿ ಪತ್ರವನ್ನು ಸ್ವೀಕರಿಸಿ, ಜಿಲ್ಲೆಗೆ ಸಂಬಂಧಪಟ್ಟ ವಿಷಯಗಳನ್ನು ಹತ್ತು ದಿನಗಳಲ್ಲಿ ಬಗೆಹರಿಸುವದಾಗಿ ತಿಳಿಸಿದರು ಅಲ್ಲದೆ ಎಂ.ಸಿ.ಟಿ.ಎಸ್. ಅನುದಾನದ ಬಗ್ಗೆ ಸರಕಾರದ ಗಮನಕ್ಕೆ ತರುವುದಾಗಿ ತಿಳಿಸಿದರು.

ಪ್ರತಿಭಟನೆಯಲ್ಲಿ ರಾಘವೇಂದ್ರ ಎಂ.ಜಿ. ಸಂತೋಷ ಹಿರವೆ, ಮಲ್ಲಿನಾಥ ಸಿಂಘೆ, ಶಿವಲಿಂಗಮ್ಮ, ಜ್ಯೋತಿ, ಸಾವಿತ್ರಿ, ಲಕ್ಷ್ಮಿ, ಮಹಾದೇವಿ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.