ADVERTISEMENT

₹10 ಸಾವಿರ ಗೌರವಧನ ಪಾವತಿಗೆ ಆದೇಶಿಸಿ: ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 17 ಜುಲೈ 2025, 4:02 IST
Last Updated 17 ಜುಲೈ 2025, 4:02 IST
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿಯಿಂದ ಕಲಬುರಗಿಯಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಲಾಯಿತು
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿಯಿಂದ ಕಲಬುರಗಿಯಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಲಾಯಿತು   

ಕಲಬುರಗಿ: ‘ಆಶಾ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು ₹10 ಸಾವಿರ ಕೊಡುವುದಾಗಿ ನೀಡಿದ್ದ ಭರವಸೆಯನ್ನು ಸರ್ಕಾರ ಕೂಡಲೇ ಈಡೇರಿಸಬೇಕು’ ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿ ಸದಸ್ಯರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಿದರು.

ನಗರದ ಸರ್ದಾರ್‌ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಜಮಾಯಿಸಿದ ನೂರಾರು ಆಶಾ ಕಾರ್ಯಕರ್ತೆಯರು ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿ ತನಕ ಪ್ರತಿಭಟನಾ ರ‍್ಯಾಲಿ ನಡೆಸಿದರು. ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಘೋಷಣೆ ಮೊಳಗಿಸಿದರು.

ಬಳಿಕ ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಮನವಿಯನ್ನು ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗೆ ಸಲ್ಲಿಸಲಾಯಿತು.

ADVERTISEMENT

‘ಕೇಂದ್ರ ಸರ್ಕಾರದ ಪ್ರೋತ್ಸಾಹಧನ ಸೇರಿದಂತೆ ಪ್ರತಿ ತಿಂಗಳು ₹10 ಸಾವಿರ ಗೌರವ ಧನ ಏಪ್ರಿಲ್‌ ತಿಂಗಳಿನಿಂದ ಅನ್ವಯವಾಗುವಂತೆ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಆದರೆ, ಈ ಸಂಬಂಧ ಇಲ್ಲಿಯವರೆಗೆ ಆದೇಶ ಮಾಡಿಲ್ಲ. ಈ ಕೂಡಲೇ ಈ ಸಂಬಂಧ ಸೂಕ್ತ ಆದೇಶ ಮಾಡಬೇಕು’ ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಅಲ್ಲದೇ, ‘ಈ ವರ್ಷದ ಬಜೆಟ್‌ನಲ್ಲಿ ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರಿಗೆ ನೀಡಿದಂತೆ ₹1 ಸಾವಿರ ಗೌರವಧನ ಹೆಚ್ಚಿಸಬೇಕು. ಜೊತೆಗೆ ಆಶಾ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು ವೇತನ ಆಗುತ್ತಿಲ್ಲ. ರಾಜ್ಯದಾದ್ಯಂತ ಈಗಲೂ ಎರಡ್ಮೂರು ತಿಂಗಳ ಪ್ರೋತ್ಸಾಹಧನ ಬಾಕಿ ಇದೆ’ ಎಂದು ಮನವಿಯಲ್ಲಿ ಗಮನ ಸೆಳೆಯಲಾಗಿದೆ.

ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾ ಗೌರವಾಧ್ಯಕ್ಷ ವಿ.ಜಿ.ದೇಸಾಯಿ, ಜಿಲ್ಲಾಧ್ಯಕ್ಷೆ ಶಿವಲಿಂಗಮ್ಮ ನಂದೂರ, ಜಿಲ್ಲಾ ಕಾರ್ಯದರ್ಶಿ ಗೀತಾ ಮಳ್ಳಿ, ಮುಖಂಡ ರಾಘವೇಂದ್ರ, ಜೇವರ್ಗಿಯ ತಾಯಮ್ಮ, ಸಂಗೀತಾ, ಜಯಶ್ರೀ, ಕಮಲಾಪುರದ ವಿಜಯಲಕ್ಷ್ಮಿ, ಅಫಜಲಪುರದ ಕವಿತಾ, ಸೇಡಂನ ಲಕ್ಷ್ಮಿ, ಆಳಂದದ ಭಾಗ್ಯ ಜ್ಯೋತಿ ಸೇರಿದಂತೆ ನೂರಾರು ಆಶಾ ಕಾರ್ಯಕರ್ತೆರಯರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.